ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಚಿತಾಗಾರ ಕಾರ್ಮಿಕರನ್ನು ಖಾಯಂಗೊಳಿಸಿ’

Last Updated 18 ಏಪ್ರಿಲ್ 2021, 14:22 IST
ಅಕ್ಷರ ಗಾತ್ರ

ಬೆಂಗಳೂರು: ‘ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಚಿತಾಗಾರಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರನ್ನು ಖಾಯಂಗೊಳಿಸಬೇಕು’ ಎಂದು ಭಾರತೀಯ ಕಮ್ಯುನಿಸ್ಟ್‌ ಪಕ್ಷದ (ಮಾರ್ಕ್ಸ್‌ವಾದಿ)ಬೆಂಗಳೂರು ದಕ್ಷಿಣ ಮತ್ತು ಉತ್ತರ ಜಿಲ್ಲಾ ಸಮಿತಿಗಳು ಒತ್ತಾಯಿಸಿವೆ.

‘ಕೋವಿಡ್‌ನಿಂದಾಗಿ ಮೃತಪಡುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಕಾರ್ಮಿಕರು ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ಇವರಿಗೆ ಕಳೆದ ಕೆಲವು ತಿಂಗಳುಗಳಿಂದ ವೇತನ ನೀಡಿಲ್ಲ. ಬಾಕಿ ಉಳಿಸಿಕೊಂಡಿರುವ ವೇತನವನ್ನು ಕೂಡಲೇ ಬಿಡುಗಡೆಮಾಡಬೇಕು. ಪ್ರಸ್ತುತ ಸನ್ನಿವೇಶದಲ್ಲಿ ಪ್ರತಿದಿನ ರಾತ್ರಿ ಒಂದು ಗಂಟೆವರೆಗೂ ಅಂತ್ಯಕ್ರಿಯೆ ನೆರವೇರಿಸಬೇಕಾಗಿದೆ. ಹೀಗಾಗಿ ಹೆಚ್ಚುವರಿ ಕಾರ್ಮಿಕರನ್ನು ನೇಮಿಸಬೇಕು. ಹೆಚ್ಚುವರಿ ಕೆಲಸಕ್ಕೆ ದುಪ್ಪಟ್ಟು ವೇತನ ನೀಡಬೇಕು. ಪಿಪಿಇ ಕಿಟ್ ಒದಗಿಸುವ ಜೊತೆಗೆ ಅವರನ್ನು ಕೋವಿಡ್ ಮುಂಚೂಣಿ ಕಾರ್ಮಿಕರೆಂದು ಪರಿಗಣಿಸಿ ₹30 ಲಕ್ಷದ ವಿಮೆ ಒದಗಿಸಬೇಕು’ ಎಂದು ಬೆಂಗಳೂರು ದಕ್ಷಿಣ ಸಮಿತಿಯ ಕಾರ್ಯದರ್ಶಿಕೆ.ಎನ್.ಉಮೇಶ್ ಆಗ್ರಹಿಸಿದ್ದಾರೆ.

‘ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರುಗತಿಯಲ್ಲಿದೆ. ರಾಜ್ಯದಲ್ಲಿ ಆಮ್ಲಜನಕದ ಕೊರತೆ ಎದುರಾಗಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ವೈದ್ಯರು ಅಸಹಾಯಕರಾಗಿದ್ದಾರೆ. ಸಾವಿನ ಸಂಖ್ಯೆಯು ಹೆಚ್ಚುತ್ತಿದೆ. ಆಮ್ಲಜನಕದ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯಪ್ರವೃತ್ತವಾಗಬೇಕು. ಅದರ ಪೂರೈಕೆಯನ್ನು ಖಾತ್ರಿ ಪಡಿಸಲು ನೋಡಲ್ ಅಧಿಕಾರಿಯನ್ನು ನೇಮಿಸಬೇಕು’ ಎಂದು ತಿಳಿಸಿದ್ದಾರೆ.

ಬೆಂಗಳೂರು ಉತ್ತರ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಎನ್‌.ಪ್ರತಾಪ್‌ ಸಿಂಹ ‘12 ದಿನಗಳ ಹಿಂದೆ ಶುರುವಾಗಿದ್ದ ಸಾರಿಗೆ ನೌಕರರ ಮುಷ್ಕರ ಈಗಲೂ ಮುಂದುವರಿದಿದೆ. ನೌಕರರೊಂದಿಗೆ ಯಾವುದೆ ಕಾರಣಕ್ಕೂ ಮಾತುಕತೆ ನಡೆಸುವುದಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಸರ್ಕಾರದ ಹಠಮಾರಿ ಧೋರಣೆಯಿಂದಾಗಿ ಪರಿಸ್ಥಿತಿ ಮತ್ತಷ್ಟು ಜಟಿಲಗೊಂಡಿದೆ. ಸರ್ಕಾರವು ಇನ್ನಾದರೂ ತನ್ನ ನಿಲುವು ಬದಲಿಸಬೇಕು. ಮಾತುಕತೆ ಮೂಲಕ ಸಮಸ್ಯೆಗೆ ತೀಲಾಂಜಲಿ ಇಡಬೇಕು. ನೌಕರರ ವಜಾ ಮತ್ತು ಅಮಾನತಿನಂತಹ ಅಮಾನವೀಯ ಕ್ರಮವನ್ನು ಕೈಬಿಡಬೇಕು’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT