ಬೆಂಗಳೂರಿನಲ್ಲಿ ಸೈಕಲ್ ಜಾಥಾ: ಕಾಂಗ್ರೆಸ್ ಮುಖಂಡರ ಬಂಧನ

ಬೆಂಗಳೂರು: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆ ವಿರೋಧಿಸಿ ರಾಜ್ಯದ ವಿವಿಧ ಭಾಗಗಳಲ್ಲಿ ಏಕಕಾಲಕ್ಕೆ ಕಾಂಗ್ರೆಸ್ ಸೈಕಲ್ ಜಾಥಾ ಹಮ್ಮಿಕೊಂಡಿದ್ದು, ಪ್ರದೇಶ ಕಾಂಗ್ರೆಸ್ ಸಮಿತಿಯ ಕೇಂದ್ರ ಕಚೇರಿ ಮುಂಭಾಗದಲ್ಲಿ ಪಕ್ಷದ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ ಹಾಗೂ ಸಲೀಂ ಅಹ್ಮದ್ ನೇತೃತ್ವದಲ್ಲಿ ನೂರಕ್ಕೂ ಹೆಚ್ಚು ಕಾರ್ಯಕರ್ತರು ಸೈಕಲ್ ಜಾಥಾ ನಡೆಸಿದರು.
ಕೋವಿಡ್ ನಿಯಮಾವಳಿ ಹಿನ್ನೆಲೆಯಲ್ಲಿ ಮೆರವಣಿಗೆ, ಸೈಕಲ್ ಜಾಥಾ ನಡೆಸಲು ಸರ್ಕಾರದ ಅನುಮತಿ ಇಲ್ಲ. ಅಲ್ಲದೆ, ಮುಂಚಿತವಾಗಿ ಪರವಾನಗಿ ಪಡೆಯದ ಕಾರಣ ಜಾಥಾವನ್ನು ಪೊಲೀಸರು ತಡೆದರು.
ರಾಜ್ಯದ ಕೆಲವೆಡೆ ಪೊಲೀಸರು ಬಿಗಿ ಬಂದೋಬಸ್ತ್‌ನಲ್ಲಿ ಅರ್ಧ ಕಿ.ಮೀನಷ್ಟು ಮೆರವಣಿಗೆ ನಡೆಸಲು ಅವಕಾಶ ನೀಡಿದ್ದಾರೆ. ಆದರೆ. ಕ್ವೀನ್ಸ್ ರಸ್ತೆಯ ಸಂಚಾರ ದಟ್ಟಣೆ ವಿಪರೀತವಾಗಿದ್ದು, ಈ ಸಂದರ್ಭದಲ್ಲಿ ಜಾಥಾ ನಡೆಸಿದರು.
ಸಂಚಾರದಟ್ಟಣೆ ಜೊತೆ ಕೋವಿಡ್ ನಿಯಮದ ಉಲ್ಲಂಘನೆ ಕಾರಣಕ್ಕೆ ಜಾಥಾ ಹೆಚ್ಚು ಸಮಯ ನಡೆಸಲು ಪೊಲೀಸರು ಅವಕಾಶ ನೀಡಲಿಲ್ಲ. ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್, ಶಾಸಕ ರಿಜ್ವಾನ್ ಅರ್ಷದ್ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ಬಂಧಿಸಿ ಕರೆದೊಯ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.