ಶುಕ್ರವಾರ, ಆಗಸ್ಟ್ 12, 2022
27 °C
ಇನ್ನೂ ಯಾವುದೇ ದೃಢ ನಿರ್ಧಾರ ತೆಗೆದುಕೊಂಡಿಲ್ಲ

ಕಾಂಗ್ರೆಸ್‌ ಸೇರುವ ನಿರ್ಧಾರಕ್ಕೆ ಇನ್ನೂ ಬಂದಿಲ್ಲ: ಶರತ್‌ ಬಚ್ಚೇಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಪಕ್ಷೇತರನಾಗಿ ಸ್ಪರ್ಧಿಸಿ ಗೆದ್ದಿರುವ ನಾನು, ನನ್ನ ಬೆಂಬಲಿಗರ ಆಶಯದಂತೆ ರಾಜಕೀಯವಾಗಿ ರಾಷ್ಟ್ರೀಯ ಪಕ್ಷವೊಂದರ ನೆರಳು ಬೇಕು ಎಂಬ ನಿರ್ಧಾರಕ್ಕೆ ಬಂದಿದ್ದೇನೆ. ಕಾಂಗ್ರೆಸ್‌ ಸೇರುತ್ತಿದ್ದೇನೆ ಎಂದು ಎಲ್ಲ ಕಡೆ ಸುದ್ದಿ ಹಬ್ಬಿದೆ. ಆದರೆ, ನಾನಿನ್ನೂ ಈ ಬಗ್ಗೆ ಯಾವುದೇ ನಿರ್ಧಾರಕ್ಕೆ ಬಂದಿಲ್ಲ’ ಎಂದು ಹೊಸಕೋಟೆ ಕ್ಷೇತ್ರದ ಶಾಸಕ ಶರತ್‌ ಬಚ್ಚೇಗೌಡ ಹೇಳಿದರು.

‘ಶರತ್‌ ಬಚ್ಚೇಗೌಡ ಅವರು ಕಾಂಗ್ರೆಸ್‌ ಸೇರಲಿದ್ದಾರೆ’ ಎಂಬ ವದಂತಿಗಳ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಅವರು, ‘ಪಕ್ಷ ಸೇರುವಂತೆ ಕಾಂಗ್ರೆಸ್‌ ನಾಯಕರು ನನ್ನನ್ನು ಸಂಪರ್ಕಿಸಿದ್ದು ನಿಜ. ಈ ಬಗ್ಗೆ ಅಧಿಕೃತವಾಗಿ ಯಾವುದೇ ಚರ್ಚೆಗಳು ನಡೆದಿಲ್ಲ. ಹೀಗಾಗಿ, ಇನ್ನೂ ಯಾವುದೇ ದೃಢ ನಿರ್ಧಾರ ತೆಗೆದುಕೊಂಡಿಲ್ಲ’ ಎಂದರು.

‘ಪಕ್ಷೇತರ ಅಭ್ಯರ್ಥಿಯಾಗಿ, ಅಪ್ಪನ ನೆರಳಿನಡಿ (ಚಿಕ್ಕಬಳ್ಳಾಪುರ ಕ್ಷೇತ್ರದ ಸಂಸದ ಬಚ್ಚೇಗೌಡ) ಆಯ್ಕೆಯಾಗಿದ್ದೀರಿ. ಆದರೆ, ರಾಜಕೀಯ ಭವಿಷ್ಯದ ದೃಷ್ಟಿಯಿಂದ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಗೆ ಮೊದಲೇ ಯಾವುದಾದರು ಪಕ್ಷಕ್ಕೆ ಸೇರುವಂತೆ ನನ್ನ ಬೆಂಬಲಿಗರು ಸಲಹೆ ನೀಡಿದ್ದಾರೆ. ಈ ಬಗ್ಗೆ ತಾಲ್ಲೂಕಿನ ನನ್ನ ಮತದಾರರ ಜೊತೆ ಚರ್ಚೆ ಮಾಡಬೇಕಿದೆ’ ಎಂದೂ ಹೇಳಿದರು.

ಹೊಸಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಾಗ ಶರತ್‌ ಅವರು ಬಿಜೆಪಿಯಿಂದ ಟಿಕೆಟ್‌ ಆಕಾಂಕ್ಷಿ ಆಗಿದ್ದರು. ಆದರೆ, ಕಾಂಗ್ರೆಸ್‌ ತೊರೆದು ಬಂದು ಸರ್ಕಾರ ರಚಿಸಲು ಕಾರಣರಾಗಿದ್ದ ಎಂ.ಟಿ.ಬಿ ನಾಗರಾಜು ಅವರಿಗೆ ಬಿಜೆಪಿ ಟಿಕೆಟ್‌ ನೀಡಿತ್ತು. ಈ ಕಾರಣಕ್ಕೆ ಪಕ್ಷದ ವಿರುದ್ಧ ತಿರುಗಿಬಿದ್ದ ಶರತ್‌, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಆರಿಸಿ ಬಂದಿದ್ದರು. ಶಾಸಕರಾದ ಬಳಿಕ ಅವರು ಬಿಜೆಪಿ ಸೇರಲಿದ್ದಾರೆ ಎಂಬ ವದಂತಿಗಳು ಹರಡಿದ್ದವು. ಆದರೆ, ಡಿ.ಕೆ. ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಕಾಂಗ್ರೆಸ್‌ ಕಡೆಗೆ ಶರತ್‌ ಒಲವು ತೋರಿಸುತ್ತಿದ್ದಾರೆ ಎನ್ನಲಾಗಿದೆ.

ಚರ್ಚೆ ನಡೆದಿದೆ: ‘ಶರತ್‌ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ನಾಯಕರು ಚರ್ಚೆ ನಡೆಸಿದ್ದಾರೆ. ಪಕ್ಷದ ಶಾಸಕಾಂಗ ಸಭೆ  ಬುಧವಾರ ( ಅ.16) ನಡೆಯಲಿದ್ದು, ಈ ಸಭೆಯ ಬಳಿಕ ಡಿ.ಕೆ. ಶಿವಕುಮಾರ್‌ ಮತ್ತು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಚರ್ಚೆ ನಡೆಸುವ ಸಾಧ್ಯತೆ ಇದೆ’ ಎಂದು ಕಾಂಗ್ರೆಸ್‌ ಮೂಲಗಳು ಹೇಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು