ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನ 300 ಕಡೆ ಇಂದು ಕಾಂಗ್ರೆಸ್‌ ಪ್ರತಿಭಟನೆ

Last Updated 22 ಜನವರಿ 2023, 21:51 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಭ್ರಷ್ಟಾಚಾರದ ಆರೋಪದ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ಬೆಂಗಳೂರಿನ 300 ಸ್ಥಳಗಳಲ್ಲಿ ಕಾಂಗ್ರೆಸ್ ವತಿಯಿಂದ ಸೋಮವಾರ ಮೌನ ಪ್ರತಿಭಟನೆ ನಡೆಸಲಾಗುವುದು ಎಂದು ಶಾಸಕ ಎನ್‌.ಎ. ಹ್ಯಾರಿಸ್‌ ತಿಳಿಸಿದರು.

ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ ಅವರೊಂದಿಗೆ ಭಾನುವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಹಾಸುಹೊಕ್ಕಾಗಿದೆ. ಆರೋಪಗಳು ಬಂದರೂ ಕ್ರಮ ಕೈಗೊಳ್ಳುತ್ತಿಲ್ಲ. ಸರ್ಕಾರದಲ್ಲಿನ ಭ್ರಷ್ಟಾಚಾರದ ವಿರುದ್ಧ ಜನಜಾಗೃತಿ ಮೂಡಿಸುವುದಕ್ಕಾಗಿ ಬೆಂಗಳೂರಿನ 51 ಮೆಟ್ರೊ ರೈಲು ನಿಲ್ದಾಣಗಳು, 26 ಮೇಲುಸೇತುವೆಗಳು, 200 ಟ್ರಾಫಿಕ್ ಸಿಗ್ನಲ್ ಗಳು ಸೇರಿದಂತೆ 300 ಸ್ಥಳಗಳಲ್ಲಿ ಮೌನ ಪ್ರತಿಭಟನೆ ನಡೆಸಲಾಗುವುದು’ ಎಂದರು.

‘ಭ್ರಷ್ಟಾಚಾರ ತೊಲಗಿಸಿ- ಬೆಂಗಳೂರು ಉಳಿಸಿ’ ಎಂಬ ಘೋಷಣೆಯಡಿ ಸೋಮವಾರ ಬೆಳಿಗ್ಗೆ 10 ಗಂಟೆಯಿಂದ 12 ಗಂಟೆಯವರೆಗೆ ಏಕಕಾಲಕ್ಕೆ ಪ್ರತಿಭಟನೆಗಳು
ನಡೆಯಲಿವೆ.‌ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ‌ ಸಿದ್ದರಾಮಯ್ಯ, ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್‌, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಮತ್ತಿತರ ನಾಯಕರು ಟ್ರಿನಿಟಿ ವೃತ್ತದಲ್ಲಿ ನಡೆಯುವ ಮೌನ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವರು. ಸಂಚಾರಕ್ಕೆ ಅಡ್ಡಿಪಡಿಸುವುದಿಲ್ಲ’ ಎಂದು ಅವರು ತಿಳಿಸಿದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಶೇಕಡ 40ರಷ್ಟು ಲಂಚದ ಆರೋಪ, ಪಿಎಸ್ಐ ನೇಮಕಾತಿ ಅಕ್ರಮ, ಎಂಜಿನಿಯರ್‌ಗಳು ಮತ್ತು ಉಪನ್ಯಾಸಕರ ನೇಮಕಾತಿ ಅಕ್ರಮ ಸೇರಿದಂತೆ ಹಲವು ಹಗರಣಗಳು ನಡೆದಿವೆ. ಇಡೀ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಜನರಿಗೆ ಸಾಮಾಜಿಕ ಪಿಂಚಣಿಯನ್ನೂ ಸರಿಯಾಗಿ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿದರು.

ಬಿಬಿಎಂಪಿ ವ್ಯಾಪ್ತಿಯ ಎಲ್ಲ 28 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲೂ ಪ್ರತಿಭಟನೆಗಳು ನಡೆಯಲಿವೆ. ಶಾಸಕರು, ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಪರಾಜಿತರಾದ ಅಭ್ಯರ್ಥಿಗಳು, ಪಕ್ಷದ ಪ್ರಮುಖರು ಪ್ರತಿಭಟನೆಯ
ನೇತೃತ್ವ ವಹಿಸಲಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT