ಗುರುವಾರ , ಸೆಪ್ಟೆಂಬರ್ 19, 2019
22 °C

ಡಿಕೆಶಿ ಬಂಧನ ವಿರೋಧಿಸಿ ಹೆದ್ದಾರಿ ಬಂದ್‌ಗೆ ಯತ್ನ

Published:
Updated:
Prajavani

ನೆಲಮಂಗಲ: ‘ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು, ಕಾಂಗ್ರೆಸ್‌ನ ಪ್ರಮುಖ ನಾಯಕರನ್ನು ಬಂಧಿಸಿ ಪಕ್ಷವನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ’ ಎಂದು ಕಾಂಗ್ರೆಸ್‌ ಮುಖಂಡ ಆಂಜನಮೂರ್ತಿ ಆಕ್ರೋಶ ವ್ಯಕ್ತಪಡಿಸಿದರು.

ಶಾಸಕ ಡಿ.ಕೆ.ಶಿವಕುಮಾರ್ ಬಂಧನವನ್ನು ಖಂಡಿಸಿ ಕಾಂಗ್ರೆಸ್ ಮತ್ತು ಜೆಡಿಎಸ್ ಹಮ್ಮಿಕೊಂಡಿದ್ದ ಪ್ರತಿಭಟನಾ ರ‍್ಯಾಲಿ ಮತ್ತು ರಸ್ತೆ ತಡೆ ಉದ್ದೇಶಿಸಿ ಮಾತನಾಡಿದ ಅವರು, ‘ಡಿ.ಕೆ.ಶಿವಕುಮಾರ್ ಎಲ್ಲ ಆರೋಪಗಳಿಂದ ಮುಕ್ತರಾಗಿ ಹೊರಬರುತ್ತಾರೆ ಎಂಬ ವಿಶ್ವಾಸ ಇದೆ. ಯಾರು ಏನೇ ಪ್ರಯತ್ನಪಟ್ಟರೂ ಕಾಂಗ್ರೆಸನ್ನು ಮುಗಿಸಲು ಸಾಧ್ಯವಿಲ್ಲ’ ಎಂದರು.

ಜೆಡಿಎಸ್ ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಮಾತನಾಡಿ, ‘ರಾಜ್ಯದಿಂದ 25 ಬಿಜೆಪಿ ಸಂಸದರನ್ನು ಜನ ಆಯ್ಕೆಮಾಡಿದ್ದಾರೆ. ನೆರೆ ಬಂದರೂ ಪ್ರಧಾನಿ ಮೋದಿ ರಾಜ್ಯ ಪ್ರವಾಸ ಮಾಡಿಲ್ಲ. ಅಮಿತ್ ಶಾ ಸುಮ್ಮನೆ ಬಂದುಹೋದರು. ಸೂಕ್ತ ಪರಿಹಾರ ನೀಡಿಲ್ಲ. ಬದಲಾಗಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ’ ಎಂದು ಟೀಕಿಸಿದರು.

ಕಾಂಗ್ರೆಸ್– ಜೆಡಿಎಸ್ ಕಾರ್ಯಕರ್ತರು ಪಟ್ಟಣದ ಪ್ರವಾಸಿ ಮಂದಿರದಿಂದ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತ, ಸೊಂಡೆಕೊಪ್ಪ ವೃತ್ತ, ಕುಣಿಗಲ್ ವೃತ್ತ ಮಾರ್ಗವಾಗಿ ತಾಲ್ಲೂಕು ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ 4 ತಡೆಯಲು ಸುಮಾರು 20 ನಿಮಿಷ ಪ್ರಯತ್ನಪಟ್ಟರು.

Post Comments (+)