ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ | ಆಸ್ಪತ್ರೆಗಳಲ್ಲಿ ಅಗತ್ಯ ವ್ಯವಸ್ಥೆ: ವದಂತಿಗಳಿಗೆ ಕಿವಿಗೊಡದಂತೆ ಮನವಿ

Last Updated 3 ಮಾರ್ಚ್ 2020, 18:44 IST
ಅಕ್ಷರ ಗಾತ್ರ

ಬೆಂಗಳೂರು: ‘ನಗರದಿಂದ ತೆಲಂಗಾಣಕ್ಕೆ ತೆರಳಿದ ಟೆಕಿಯೊಬ್ಬರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋಂಕು ಶಂಕಿತರಿಗೆ ಅಗತ್ಯ ಚಿಕಿತ್ಸೆ ಒದಗಿಸಲು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ. ಸಾಮಾಜಿಕ ಜಾಣತಾಣದಲ್ಲಿ ಸೋಂಕಿನ ಬಗ್ಗೆ ಬರುತ್ತಿರುವ ವದಂತಿಗಳಿಗೆ ಕಿವಿಗೊಡಬಾರದು’ ಎಂದು ಆರೋಗ್ಯ ಇಲಾಖೆ ಮನವಿ ಮಾಡಿದೆ.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಸಚಿವ ಬಿ.ಶ್ರೀರಾಮುಲು ಮಾತನಾಡಿ, ‘ಟೆಕಿ ಬೆಂಗಳೂರಿನಿಂದ ತೆಲಂಗಾಣಕ್ಕೆ ಪ್ರಯಾಣಿಸಿದ್ದ ಬಸ್‌ ಅನ್ನು ಸ್ವಚ್ಛಗೊಳಿಸಲಾಗಿದೆ. ಆತನ ಸಂಪರ್ಕದಲ್ಲಿದ್ದವರ ಎಲ್ಲರನ್ನೂ ತಪಾಸಣೆಗೆ ಒಳಪಡಿಸಲಾಗಿದ್ದು, ಅವರ ಮೇಲೆ ನಿಗಾ ಇರಿಸಲಾಗಿದೆ.ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿಮಾನ ನಿಲ್ದಾಣ ಹಾಗೂ ಬಂದರುಗಳಲ್ಲಿ ಥರ್ಮಲ್ ಸ್ಕ್ಯಾನರ್ ಮೂಲಕ ಈವರೆಗೆ 40 ಸಾವಿರ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ಶಂಕಿತ 245 ಮಂದಿಯ ರಕ್ತ ಪರೀಕ್ಷೆ ಮಾಡಲಾಗಿದೆ. ಈವರೆಗೂ ಬಂದಿರುವ 243 ವರದಿಗಳಲ್ಲಿ ಯಾರಲ್ಲೂ ಸೋಂಕು ದೃಢಪಟ್ಟಿಲ್ಲ. ಯಾರೂ ಆತಂಕಪಡಬೇಕಿಲ್ಲ’ ಎಂದರು.

‘ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಆಸ್ಪತ್ರೆಗಳು, ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳು ಸೇರಿದಂತೆ ರಾಜ್ಯದಲ್ಲಿ ಕೋವಿಡ್ ಶಂಕಿತರು ಹಾಗೂ ಸೋಂಕಿತರ ಚಿಕಿತ್ಸೆಗಾಗಿ 630 ಹಾಸಿಗೆಗಳ ಪ್ರತ್ಯೇಕ ವಾರ್ಡ್‍ಗಳ ವ್ಯವಸ್ಥೆ ಮಾಡಲಾಗಿದೆ. ಇದಲ್ಲದೆ 1,700ಕ್ಕೂ ಹೆಚ್ಚು ಖಾಸಗಿ ಆಸ್ಪತ್ರೆಗಳಲ್ಲೂ ಈ ಸೋಂಕಿಗೆ ಚಿಕಿತ್ಸೆ ನೀಡಲು ಸೂಚಿಸಲಾಗಿದೆ’ಎಂದು ಹೇಳಿದರು.‌

ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಮಾತನಾಡಿ, ‘ವಿಶ್ವ ಆರೋಗ್ಯ ಸಂಸ್ಥೆ ಸೂಚನೆಯಂತೆ ರಾಜ್ಯದಲ್ಲಿ ಕೋವಿಡ್ ವೈರಸ್ ಬಗ್ಗೆ ಎಲ್ಲ ಬಗೆಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ನಿಯಮದ ಪ್ರಕಾರ ಶಂಕಿತರನ್ನು 14 ದಿನಗಳ ಕಾಲ ನಿಗಾದಲ್ಲಿ ಇರಿಸಬೇಕು. ಈ ಬಗ್ಗೆ ಹೆಚ್ಚಿನ ಕ್ರಮಗಳನ್ನು ವಹಿಸಲು 28 ದಿನಗಳ ಕಾಲ ನಿಗಾದಲ್ಲಿ ಇರಿಸುತ್ತಿದ್ದೇವೆ. 24 ಗಂಟೆಗಳ ಸಹಾಯವಾಣಿಯನ್ನು ತೆರೆದು, ಜನರಿಗೆ ಅಗತ್ಯ ಮಾಹಿತಿ ನೀಡಲಾಗುತ್ತಿದೆ’ ಎಂದು ಹೇಳಿದರು.

ಕೋಳಿ ಮಾಂಸ ಸೇವಿಸಿ: ‘ದೇಶದಲ್ಲಿ ಕೋಳಿಗಳಿಗೆ ಕೋವಿಡ್ ಸೋಂಕು ಕಾಣಿಸಿಕೊಂಡ ಬಗ್ಗೆ ಇದುವರೆಗೆ ಯಾವುದೇ ವರದಿಗಳಿಲ್ಲ. ಈ ಸೋಂಕು ಹರಡುವಿಕೆಯಲ್ಲಿ ಕೋಳಿಗಳ ಪಾತ್ರವೇನೂ ಇಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ತಪ್ಪು ಮಾಹಿತಿಯಿಂದಾಗಿ ಕುಕ್ಕುಟ ಉದ್ಯಮಕ್ಕೆ ಪೆಟ್ಟು ಬೀಳುತ್ತಿದೆ’ ಎಂದುಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಬೇಸರ ವ್ಯಕ್ತಪಡಿಸಿದ್ದಾರೆ.

‘ಸಾಮಾನ್ಯವಾಗಿ ಕೋಳಿ ಮಾಂಸವನ್ನು 100 ಡಿಗ್ರಿ ಸೆಂಟಿಗ್ರೇಡ್ ಉಷ್ಣತೆಯಲ್ಲಿ ಬೇಯಿಸಲಾಗುತ್ತದೆ. ಈ ಉಷ್ಣತೆಯಲ್ಲಿ ಯಾವುದೇ ವೈರಾಣುಗಳು ಬದುಕುಳಿಯಲು ಸಾಧ್ಯವಿಲ್ಲ. ಸೋಂಕು ಕೋಳಿಗಳಿಂದ ಹರಡುತ್ತದೆ ಎಂಬ ವದಂತಿಗಳಿಗೆ ಕಿವಿ ಕೊಡಬಾರದು’ ಎಂದು ಮನವಿ ಮಾಡಿದ್ದಾರೆ.

ಸಹಾಯವಾಣಿ: 1800 425 012, 080 23417100.

ಜತೆಗಿದ್ದ ವ್ಯಕ್ತಿಗೆ ಸೋಂಕು ತಗುಲಿಲ್ಲ
ಅಪಾರ್ಟ್‌ಮೆಂಟ್‌ ಸಮುಚ್ಚಯದಲ್ಲಿಟೆಕ್ಕಿ ಜತೆ ಒಂದೇ ಕೊಠಡಿಯಲ್ಲಿ ವಾಸವಿದ್ದ ವ್ಯಕ್ತಿಗೂ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿತ್ತು.ಈ ಹಿನ್ನೆಲೆಯಲ್ಲಿ ಅವರ ರಕ್ತದ ಮಾದರಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿತ್ತು. ವರದಿಯಲ್ಲಿ ಸೋಂಕು ತಗುಲಿಲ್ಲ ಎನ್ನುವುದು ದೃಢಪಟ್ಟಿದೆ.

ಕಲಬುರ್ಗಿ, ರಾಯಚೂರು ಹಾಗೂ ಬೀದರ್ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.ಕೇರಳದಲ್ಲಿ ಸೋಂಕು ಇರುವುದು ಖಚಿತವಾದಾಗ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಕಟ್ಟೆಚ್ಚರ ಘೋಷಿಸಲಾಗಿತ್ತು.

ಪ್ರಯೋಗಾಲಯಕ್ಕೆ ಭೇಟಿ
ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ಪ್ರಾರಂಭಿಸಿರುವ ಶಂಕಿತರ ರಕ್ತದ ಮಾದರಿ ಪರೀಕ್ಷಾ ಕೇಂದ್ರಕ್ಕೆಸಚಿವ ಡಾ.ಕೆ.ಸುಧಾಕರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಬಸ್‍ಗಳನ್ನು ಶುಚಿಯಾಗಿಟ್ಟುಕೊಳ್ಳುವಂತೆ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಸುತ್ತೋಲೆ ಹೊರಡಿಸಿವೆ. ಜಗತ್ತಿನ ನಾನಾ ಭಾಗಗಳಿಂದ ಹಾಗೂ ವಿವಿಧ ಜಿಲ್ಲೆಗಳಿಂದ ಬರುತ್ತಿರುತ್ತಾರೆ. ಹೀಗಾಗಿ ಬಸ್‍ನ ಒಳ ಹಾಗೂ ಹೊರಭಾಗವನ್ನು ಸ್ವಚ್ಛವಾಗಿಡುವುದು ಮತ್ತು ಸಾಂಕ್ರಾಮಿಕ ರೋಗಗಳು ಬಾರದಂತೆ ಶುಚಿತ್ವ ಕಾಪಾಡುವುದು ಅಗತ್ಯ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

**

ಈ ಸೋಂಕಿಗೆ ಯಾವುದೇ ನಿರ್ದಿಷ್ಟ ಚಿಕಿತ್ಸೆಯಿಲ್ಲ. ಸಂಶೋಧನೆಗಳು ನಡೆಯುತ್ತಿವೆ.ಸಾಕಷ್ಟು ನೀರನ್ನು ಕುಡಿಯುವ ಜತೆಗೆ ವಿಶ್ರಾಂತಿ ಮತ್ತು ಪೌಷ್ಟಿಕ ಆಹಾರ ಅಗತ್ಯ.
-ಡಾ.ಮಹೇಶ್ ಕುಮಾರ್, ನಾರಾಯಣ ಹೆಲ್ತ್ ಸಿಟಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT