ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಆಸ್ಪತ್ರೆ ಲಿಫ್ಟ್‌ನಲ್ಲಿ ಬಾಲಕಿ ಜೊತೆ ಅಸಭ್ಯ ವರ್ತನೆ: ಭದ್ರತಾ ಸಿಬ್ಬಂದಿ ಜೈಲಿಗೆ

Published 22 ಡಿಸೆಂಬರ್ 2023, 23:30 IST
Last Updated 22 ಡಿಸೆಂಬರ್ 2023, 23:30 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಆಸ್ಪತ್ರೆಯೊಂದರ ಲಿಫ್ಟ್‌ನಲ್ಲಿ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿ ವೆಂಕಟರಮಣಪ್ಪನಿಗೆ (53) 5 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ನಗರದ ಒಂದನೇ ತ್ವರಿತ ವಿಶೇಷ ನ್ಯಾಯಾಲಯ (ಎಫ್‌ಟಿಎಸ್‌ಸಿ) ಆದೇಶ ಹೊರಡಿಸಿದೆ.

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ ಸಿದ್ದಾಪುರ ಠಾಣೆಯಲ್ಲಿ 2021ರಲ್ಲಿ ದಾಖಲಾಗಿದ್ದ ಪ್ರಕರಣದ ವಿಚಾರಣೆಯನ್ನು ನ್ಯಾಯಾಧೀಶರಾದ ರೂಪಾ ಕೆ.ಎನ್. ನಡೆಸಿದ್ದರು. ಪಬ್ಲಿಕ್ ಪ್ರಾಸಿಕ್ಯೂಟರ್ ಪಿ. ಕೃಷ್ಣವೇಣಿ ವಾದಿಸಿದ್ದರು.

ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ 16 ವರ್ಷದ ಬಾಲಕಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದೇ ಆಸ್ಪತ್ರೆಯಲ್ಲಿ ಅಪರಾಧಿ ವೆಂಕಟರಮಣಪ್ಪ, ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ. ಅದೇ ಆಸ್ಪತ್ರೆಯ ಲಿಫ್ಟ್‌ನಲ್ಲಿ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿ ದೌರ್ಜನ್ಯ ಎಸಗಿದ್ದನೆಂಬ ಆರೋಪವಿತ್ತು. ಈ ಬಗ್ಗೆ ಪೋಷಕರು, ಠಾಣೆಗೆ ದೂರು ನೀಡಿದ್ದರು. ಆರೋಪಿ ಬಂಧಿಸಿದ್ದ ಪೊಲೀಸರು, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ತಂದೆಗೆ 20 ವರ್ಷ ಶಿಕ್ಷೆ: ಏಳು ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ತಂದೆಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. 2023ರಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ನಗರದ ಒಂದನೇ ತ್ವರಿತ ವಿಶೇಷ ನ್ಯಾಯಾಲಯ (ಎಫ್‌ಟಿಎಸ್‌ಸಿ) ಈ ಆದೇಶ ಹೊರಡಿಸಿದೆ.

ಪತ್ನಿ ಮನೆಯಲ್ಲಿದ್ದ ವೇಳೆ ಮಗಳ ಮೇಲೆ ತಂದೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಮಗಳ ಮೇಲಿನ ದೌರ್ಜನ್ಯದ ಬಗ್ಗೆ ತಾಯಿ ದೂರು ನೀಡಿದ್ದರು. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT