ಬೆಂಗಳೂರು: ಕೋವಿಡ್ ಪೀಡಿತರಲ್ಲಿ ಬೆಂಗಳೂರಿನಲ್ಲಿ 1,429 ಮಂದಿ ಸೇರಿದಂತೆ ರಾಜ್ಯದಲ್ಲಿ 2,133 ಮಂದಿಗೆ ಕಾಯಿಲೆ ವಾಸಿಯಾಗಿದೆ. ಇದರಿಂದಾಗಿ ಗುಣಮುಖರ ಸಂಖ್ಯೆ 8.46 ಲಕ್ಷಕ್ಕೆ ತಲುಪಿದೆ.
ರಾಜ್ಯದಲ್ಲಿ ಶನಿವಾರ 1,522 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿಗೀಡಾದವರ ಒಟ್ಟು ಸಂಖ್ಯೆ 8.82 ಲಕ್ಷಕ್ಕೆ ಏರಿಕೆಯಾಗಿದೆ. ಈ ತಿಂಗಳು 28 ದಿನಗಳ ಅವಧಿಯಲ್ಲಿ 59,196 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 2,114 ಮಂದಿ ಸೋಂಕಿತರಾಗಿದ್ದಾರೆ. ಕೋವಿಡ್ ಪೀಡಿತರಲ್ಲಿ ಮತ್ತೆ 12 ಮಂದಿ ಮೃತಪಟ್ಟಿದ್ದು, ಈವರೆಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 11,750ಕ್ಕೆ ಏರಿಕೆಯಾಗಿದೆ.
ಕೊರೊನಾ ಸೋಂಕಿತರಲ್ಲಿ ಸದ್ಯ 24,757 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇವರಲ್ಲಿ 384 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ಒಂದೇ ದಿನ 1.10 ಲಕ್ಷ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಈವರೆಗೆ 1.09 ಕೋಟಿ ಮಂದಿ ಕೋವಿಡ್ ಪರೀಕ್ಷೆಯನ್ನು ಮಾಡಿಸಿಕೊಂಡಿದ್ದಾರೆ. ರಾಜ್ಯದ ಜ್ವರ ಚಿಕಿತ್ಸಾಲಯಗಳಲ್ಲಿ 31 ಲಕ್ಷ ಮಂದಿಯನ್ನು ತಪಾಸಣೆ ಮಾಡಲಾಗಿದೆ.
ಬೆಂಗಳೂರಿನಲ್ಲಿ 719 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 3.68 ಲಕ್ಷ ದಾಟಿದೆ. ಮೈಸೂರಿನಲ್ಲಿ ಹೊಸದಾಗಿ 77 ಪ್ರಕರಣಗಳು ಪತ್ತೆಯಾಗಿವೆ. ಅಲ್ಲಿ ಒಟ್ಟು ಸೋಂಕಿತರ ಸಂಖ್ಯೆ 50,600ಕ್ಕೆ ತಲುಪಿದೆ. ತುಮಕೂರು (72), ದಕ್ಷಿಣ ಕನ್ನಡ (61) ಜಿಲ್ಲೆಯಲ್ಲಿ ಅಧಿಕ ಪ್ರಕರಣಗಳು ವರದಿಯಾಗಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.