ಶುಕ್ರವಾರ, ಜೂನ್ 18, 2021
27 °C
ಜ್ವರ ಚಿಕಿತ್ಸಾಲಯಗಳಲ್ಲಿ ಒಂದೇ ದಿನ 5,969 ಮಂದಿ ತಪಾಸಣೆ

ಬೆಂಗಳೂರಿನಲ್ಲಿ ಮತ್ತೆ 2,912 ಪ್ರಕರಣ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದಲ್ಲಿ ಗುರುವಾರ 2,912 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 99,822ಕ್ಕೆ ಏರಿಕೆಯಾಗಿದೆ.

ನಗರದಲ್ಲಿ 6 ಲಕ್ಷಕ್ಕೂ ಅಧಿಕ ಕೋವಿಡ್‌ ಪರೀಕ್ಷೆಗಳನ್ನು ಈವರೆಗೆ ನಡೆಸಲಾಗಿದೆ. ಕೆಲ ದಿನಗಳಿಂದ ಆ್ಯಂಟಿಜೆನ್‌ ಪರೀಕ್ಷೆಯನ್ನೂ ಪ್ರಾರಂಭಿಸಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಪತ್ತೆಯಾಗುತ್ತಿವೆ. ಸದ್ಯ ಸೋಂಕು ದೃಢ ಪ್ರಮಾಣ ಶೇ 16.67 ರಷ್ಟಿದ್ದು, 20 ದಿನಗಳಲ್ಲಿ 44,278 ಮಂದಿ ಕೋವಿಡ್ ಪೀಡಿತರಾಗಿದ್ದಾರೆ.

ಈ ತಿಂಗಳು ಪ್ರತಿನಿತ್ಯ ಸರಾಸರಿ 2,213 ಮಂದಿ ಸೋಂಕಿತರಾಗುತ್ತಿದ್ದಾರೆ. ಹತ್ತು ದಿನಗಳಿಂದ ಪಶ್ಚಿಮ ವಲಯದಲ್ಲಿ ಪ್ರಕರಣಗಳು ಹೆಚ್ಚುತ್ತಿದ್ದು, ಈ ಅವಧಿಯಲ್ಲಿ ನಗರದಲ್ಲಿ ಸೋಂಕಿತರಾದವರಲ್ಲಿ ಶೇ 25 ರಷ್ಟು ಮಂದಿ ಆ ಭಾಗಕ್ಕೆ ಸೇರಿದ್ದಾರೆ. ಪೂರ್ವ ವಲಯದಲ್ಲಿ ಶೇ 17 ರಷ್ಟು ಹಾಗೂ ದಕ್ಷಿಣದಲ್ಲಿ ಶೇ 16 ರಷ್ಟು ಪ್ರಕರಣಗಳು ವರದಿಯಾಗಿವೆ.

34 ಸಾವಿರಕ್ಕೂ ಅಧಿಕ ಸೋಂಕಿತರು ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿತರಲ್ಲಿ ಮತ್ತೆ 25 ಮಂದಿ ಮೃತಪಟ್ಟಿದ್ದು, ಸಾವಿಗೀಡಾದವರ ಸಂಖ್ಯೆ 1,613ಕ್ಕೆ ಏರಿಕೆಯಾಗಿದೆ. ಕೋವಿಡ್ ಪೀಡಿತರಲ್ಲಿ 1,981 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇದರಿಂದಾಗಿ ಈವರೆಗೆ ಒಟ್ಟು ಗುಣಮುಖರಾದವರ ಸಂಖ್ಯೆ 64 ಸಾವಿರದ ಗಡಿ ದಾಟಿದೆ. 334 ರೋಗಿಗಳಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ.

ನಗರದ ಜ್ವರ ಚಿಕಿತ್ಸಾಲಯಗಳಲ್ಲಿ ಒಂದೇ ದಿನ 5,969 ಮಂದಿಯನ್ನು ತಪಾಸಣೆ ಮಾಡಲಾಗಿದೆ. ಈವರೆಗೆ ಒಂದು ದಿನದ ಅವಧಿಯಲ್ಲಿ ನಡೆಸಿದ ಗರಿಷ್ಠ ತಪಾಸಣೆಗಳು ಇವಾಗಿವೆ. ಈ ಚಿಕಿತ್ಸಾಲಯಗಳಲ್ಲಿ ಈವರೆಗೆ ಒಟ್ಟು 1.27 ಲಕ್ಷ ಮಂದಿಯನ್ನು ಪರೀಕ್ಷೆ ಮಾಡಲಾಗಿದೆ.

ಅನುಕೂಲಕರವಾದ ವಾತಾವರಣ ನಿರ್ಮಿಸಿ
ನಂಜನಗೂಡಿನ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಅವರ ಸಾವಿನ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್ ಹೋಮ್‌ಗಳ ಅಸೋಸಿಯೇಷನ್ (ಫಾನಾ), ವೈದ್ಯರು, ಶುಶ್ರೂಷಕರು ಹಾಗೂ ಆರೋಗ್ಯ ಸಿಬ್ಬಂದಿಗೆ ಒತ್ತಡವಿಲ್ಲದೆ ಕೆಲಸ ಮಾಡಲು ಅನುಕೂಲಕರವಾದ ವಾತಾವರಣ ನಿರ್ಮಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದೆ. 

‘ಕೋವಿಡ್‌ ಚಿಕಿತ್ಸೆಯಲ್ಲಿ ಮುಂಚೂಣಿಯಲ್ಲಿರುವವರಿಗೆ ಅನಗತ್ಯವಾಗಿ ಒತ್ತಡ ಸೃಷ್ಟಿಯಾಗದಂತೆ ನೋಡಿಕೊಳ್ಳಬೇಕು. ಈ ಘಟನೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ ನಡೆಸಬೇಕು’ ಎಂದು ಫಾನಾ ಅಧ್ಯಕ್ಷ ಡಾ.ಆರ್. ರವೀಂದ್ರ ಒತ್ತಾಯಿಸಿದ್ದಾರೆ.

₹30 ಲಕ್ಷ ಪರಿಹಾರ
‘ನಂಜನಗೂಡು ಆರೋಗ್ಯಾಧಿಕಾರಿ ಡಾ.ಎಸ್.ಆರ್. ನಾಗೇಂದ್ರ ಅವರ ಕುಟುಂಬಕ್ಕೆ ಸರ್ಕಾರ ಕೂಡಲೇ ₹30 ಲಕ್ಷ ಪರಿಹಾರ ಘೋಷಿಸಿದೆ. ಅವರ ಸಾವಿನ ವಿಚಾರವನ್ನು ಅನ್ಯ ಕಾರಣಗಳಿಗೆ ದುರ್ಬಳಕೆ ಮಾಡಬಾರದು’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕೋರಿದ್ದಾರೆ.

‘ಅವರ ಸಾವಿನ ತನಿಖೆಗೆ ಆದೇಶ ಮಾಡಿದ್ದು, ಕುಟುಂಬಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ’ ಎಂದು ಅವರು ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು