ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕು ಹೆಚ್ಚಳ: ಕೋವಿಡ್‌ ಚಿಕಿತ್ಸೆಗೆ 6 ಸಾವಿರ ಹಾಸಿಗೆ ಮೀಸಲು

ಪ್ರಧಾನ ಕಾರ್ಯದರ್ಶಿ ಜೊತೆ ಬಿಬಿಎಂಪಿ ಮುಖ್ಯ ಆಯುಕ್ತ ವಿಶೇಷ ಸಭೆ
Last Updated 9 ಏಪ್ರಿಲ್ 2021, 22:40 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಕೋವಿಡ್‌ ಎರಡನೇ ಅಲೆ ಕಾಣಿಸಿಕೊಂಡಿದ್ದು, ಆಸ್ಪತ್ರೆಗಳಲ್ಲಿ ಈ ರೋಗಿಗಳ ಚಿಕಿತ್ಸೆಗೆ ಹಾಸಿಗೆಗಳ ಕೊರತೆ ಎದುರಾಗಿದೆ. ಈ ಕೊರತೆ ನೀಗಿಸಲು ಇನ್ನು ಹತ್ತು ದಿನಗಳಲ್ಲಿ ಕನಿಷ್ಟ 6,000 ಹಾಸಿಗೆಗಳನ್ನು ಕೋವಿಡ್ ಸೋಂಕಿತರ ಚಿಕಿತ್ಸೆಗೆ ಮೀಸಲಿಡಲು ಬಿಬಿಎಂಪಿ ಮುಂದಾಗಿದೆ.

ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ ಗುಪ್ತ, ‘ಕೋವಿಡ್‌ ಚಿಕಿತ್ಸೆಗೆ ಹಾಸಿಗೆಗಳ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಿದ್ದೇವೆ. ಹಾಸಿಗೆಗಳ ನಿರ್ವಹಣೆಯ ಕೇಂದ್ರೀಕೃತ ವ್ಯವಸ್ಥೆಯನ್ನು ನೋಡಿಕೊಳ್ಳುವ ತಂಡದ ಜೊತೆಗೆ ಸಮಾಲೋಚನೆ ನಡೆಸಿದ್ದೇವೆ. ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳು ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ಯಾವ ರೀತಿ ಹಾಸಿಗೆಗಳನ್ನು ವ್ಯವಸ್ಥೆ ಮಾಡಿಕೊಳ್ಳಬೇಕು, ಯಾರಿಗೆ ಯಾವ ಜವಾಬ್ದಾರಿ ನೀಡಬೇಕು ಎಂದು ಚರ್ಚಿಸಿದ್ದೇವೆ’ ಎಂದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕಿತರಿಗೆ ಹಾಸಿಗೆ ವ್ಯವಸ್ಥೆ ಕಲ್ಪಿಸುವಿಕೆ ಹಾಗೂ ಸೋಂಕು ನಿಯಂತ್ರಣದ ಕುರಿತು ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಜೊತೆ ಶುಕ್ರವಾರ ನಡೆದ ವರ್ಚುವಲ್ ಸಭೆ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

‘ನಗರದ ಆಸ್ಪತ್ರೆಗಳಲ್ಲಿ ಕೋವಿಡ್‌ ಸೋಂಕಿತರ ಚಿಕಿತ್ಸೆಗೆ ಹಾಸಿಗೆ ಸಂಖ್ಯೆ ಹೆಚ್ಚಳ ಮಾಡಲು ಈಗಾಗಲೇ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ತಂಡಗಳನ್ನು ರಚಿಸಲಾಗಿದೆ. ಆ ತಂಡಗಳ ಜೊತೆಗೂ ಸಭೆ ನಡೆಸಿದ್ದೇವೆ. ಮುಂದಿನ ಹಂತದಲ್ಲಿ ಮುಖ್ಯ ಕಾರ್ಯದರ್ಶಿ ಮಟ್ಟದಲ್ಲಿ ಮತ್ತೊಂದು ಸುತ್ತಿನ ಚರ್ಚೆ ನಡೆಯಲಿದೆ’ ಎಂದರು.

ಕೋವಿಡ್‌ ಲಸಿಕೆ ಹೆಚ್ಚಳಕ್ಕೆ ಕ್ರಮ: ‘ನಗರದಲ್ಲಿ ಕೋವಿಡ್‌ ಲಸಿಕೆ ನೀಡುವ ಸಂಖ್ಯೆಯನ್ನು ದ್ವಿಗುಣಗೊಳಿಸಲು ಕ್ರಮವಹಿಸಲಾಗುತ್ತಿದೆ. ಇದುವರೆಗೆ ನಿತ್ಯ 36 ಸಾವಿರ ಮಂದಿಗೆ ಲಸಿಕೆ ನೀಡಲಾಗುತ್ತಿತ್ತು. ಈ ಸಂಖ್ಯೆಯನ್ನು 70 ಸಾವಿರಕ್ಕೆ ಏರಿಸಲು ಕ್ರಮ ಕೈಗೊಂಡಿದ್ದೆವು. ನಿತ್ಯ 1 ಲಕ್ಷ ಮಂದಿಗೆ ಲಸಿಕೆ ನೀಡುವಂತೆ ವೈದ್ಯಕೀಯ ಶಿಕ್ಷಣ ಸಚಿವರು ಸೂಚನೆ ನೀಡಿದ್ದಾರೆ. ಹಾಗಾಗಿ ಅಪಾರ್ಟ್‌ಮೆಂಟ್ಸ್‌ ಸಮುಚ್ಚಯಗಳು, ಕಾರ್ಖಾನೆಗಳು, 100ಕ್ಕಿಂತ ಹೆಚ್ಚು ಮಂದಿ ಕಾರ್ಯನಿರ್ವಹಿಸುವ ಕಚೇರಿಗಳಿಗೆ ತೆರಳಿ ಅಲ್ಲೇ ಲಸಿಕೆ ನೀಡಲು ಕ್ರಮಕೈಗೊಳ್ಳಲಾಗುತ್ತಿದೆ’ ಎಂದರು.

ಕೋವಿಡ್‌ ಪರೀಕ್ಷೆ: ‘ನಗರದಲ್ಲಿ ನಿತ್ಯ ಸುಮಾರು 60 ಸಾವಿರ ಮಂದಿಯನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಸೋಂಕು ಅಧಿಕ ಪ್ರಮಾಣದಲ್ಲಿ ಕಂಡುಬರುವ ಪ್ರದೇಶಗಳಲ್ಲಿ ಹೆಚ್ಚು ಹೆಚ್ಚು ಪರೀಕ್ಷೆ ಮಾಡಲಾಗುತ್ತಿದೆ. ಸೋಂಕಿತರ ಜೊತೆ ನೇರ ಹಾಗೂ ಪರೋಕ್ಷ ಸಂಪರ್ಕ ಹೊಂದಿದವರನ್ನು ಪತ್ತೆಮಾಡಿ ಪರೀಕ್ಷೆಗೆ ಒಳಪಡಿಸುವ ಅಗತ್ಯವಿದೆ. ಈ ಸಲುವಾಗಿ, ಮೂಗಿನ ದ್ರವವನ್ನು ಸಂಗ್ರಹಿಸುವ ತಂಡಗಳ ಸಂಖ್ಯೆಯನ್ನು ಹೆಚ್ಚಿಸಲಿದ್ದೇವೆ. ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಮೂರು ತಂಡಗಳನ್ನು ನಿಯೋಜಿಸಲಾಗಿತ್ತು. ಇನ್ನು ಎಂಟು ತಂಡಗಳನ್ನು ನಿಯೋಜನೆ ಮಾಡಲಿದ್ದೇವೆ’ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್, ವಿಶೇಷ ಆಯುಕ್ತ (ಅರೋಗ್ಯ) ರಾಜೇಂದ್ರ ಚೋಳನ್, ವಿಶೇಷ ಆಯುಕ್ತ (ಕಸ ನಿರ್ವಹಣೆ) ಡಿ.ರಂದೀಪ್, ಆರೋಗ್ಯ ಇಲಾಖೆಯ ಆಯುಕ್ತ ಕೆ.ವಿ. ತ್ರಿಲೋಕ್ ಚಂದ್ರ, ಮುಖ್ಯ ಆರೋಗ್ಯಾಧಿಕಾರಿ ಡಾ. ಬಿ.ಕೆ. ವಿಜಯೇಂದ್ರ ಸಲಹೆ ನೀಡಿದರು.

‘ಕೋವಿಡ್‌: ಬಿಬಿಎಂಪಿಗೆ ಒಂದೇ ಸಹಾಯವಾಣಿ’
‘ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕಿಗೆ ಸಂಬಂಧಿಸಿದಂತೆ ಒಂದೇ ಸಹಾಯವಾಣಿಯನ್ನು ಹೊಂದುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಈ ಹಿಂದೆ ಆರೋಗ್ಯ ವಾಣಿ ( 104), ತೀವ್ರ ಉಸಿರಾಟ ತೊಂದರೆ (ಸಾರಿ) ಇರುವವರ ನೆರವಿಗೆ 108, ಹಾಗೂ ಆಪ್ತಮಿತ್ರ (14410) ಸಹಾಯವಾಣಿಗಳನ್ನು ಬಳಸಲಾಗುತ್ತಿತ್ತು. ಅದಲ್ಲದೇ ಪಾಲಿಕೆಯಲ್ಲಿ ಪ್ರತ್ಯೇಕ ಸಹಾಯವಾಣಿಯನ್ನೂ (1912) ಉಪಯೋಗಿಸಲಾಗುತ್ತಿತ್ತು. ಇನ್ನು 1912 ಸಂಖ್ಯೆಯನ್ನೇ ಜನಪ್ರಿಯಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ. ಇದಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುವುದು’ ಎಂದು ಗೌರವ್‌ ಗುಪ್ತ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT