ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆ ಕರ್ತವ್ಯ ನಿರ್ವಹಿಸಿದ ಸಿಬ್ಬಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ಸಲಹೆ

ಆರ್‌.ನಗರ; ಚುನಾವಣಾ ಕರ್ತವ್ಯ ನಿರ್ವಹಿಸಿದ ಸಿಬ್ಬಂದಿಗೆ ಬಿಬಿಎಂಪಿ ಸಲಹೆ
Last Updated 4 ನವೆಂಬರ್ 2020, 19:09 IST
ಅಕ್ಷರ ಗಾತ್ರ

ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕರ್ತವ್ಯ ನಿರ್ವಹಿಸಿದ ಸಿಬ್ಬಂದಿಗಳೆಲ್ಲರೂ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳುವಂತೆ ಬಿಬಿಂಎಂಪಿ ಸಲಹೆ ನೀಡಿದೆ.

‘ಈ ಕ್ಷೇತ್ರದಲ್ಲಿ ಬಿಬಿಎಂಪಿ ಸಿಬ್ಬಂದಿ ಒಂದು ತಿಂಗಳಿನಿಂದ ಚುನಾವಣೆ ಕರ್ತವ್ಯದಲ್ಲಿ ತೊಡಗಿದ್ದರು. ಸೋಂಕು ಹರಡದಂತೆ ನಾವು ಸಾಕಷ್ಟು ಮುನ್ನೆಚ್ಚರಿಕೆ ವಹಿಸಿದ್ದೆವು. ಆದರೂ ಸುರಕ್ಷತೆಯ ದೃಷ್ಟಿಯಿಂದ ಈ ಸಿಬ್ಬಂದಿಗಳೆಲ್ಲರೂ ಕಡ್ಡಾಯವಾಗಿ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸೂಚನೆ ನೀಡಿದ್ದೇನೆ. ಅವರು ಪರೀಕ್ಷೆ ಮಾಡಿಸಿಕೊಳ್ಳಲು ಶುಕ್ರವಾರದಿಂದ ಸೋಮವಾರದವರೆಗೆ ವಿಶೇಷ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದ್ದೇನೆ’ ಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ‘ಪ್ರಜಾವಾಣಿ’ಗೆ ತಿಳಿಸಿದರು.

‘ಮಂಗಳವಾರ ನಡೆದ ಮತದಾನದ ವೇಳೆ ಪ್ರಿಸೈಡಿಂಗ್‌ ಅಧಿಕಾರಿಗಳು, ಸಹಾಯಕ ಪ್ರಿಸೈಡಿಂಗ್‌ ಅಧಿಕಾರಿಗಳು, ಸೆಕ್ಟರ್ ಅಧಿಕಾರಿಗಳು, ಸಹಾಯಕ ಸಿಬ್ಬಂದಿ, ಭದ್ರತಾ ಸಿಬ್ಬಂದಿಗಳಾಗಿ ಕರ್ತವ್ಯ ನಿರ್ವಹಿಸಿದ ಬಹುತೇಕರು ಈ ಕ್ಷೇತ್ರದ ಹೊರಗಿನವರು. ಮುಂಜಾಗ್ರತಾ ದೃಷ್ಟಿಯಿಂದ ಅವರೂ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ’ ಎಂದು ಆರ್‌.ಆರ್‌.ನಗರ ವಲಯದ ಉಸ್ತುವಾರಿ ಹೊತ್ತಿರುವ ವಿಶೇಷ ಆಯುಕ್ತ ಜೆ.ಮಂಜುನಾಥ್‌ ಅಭಿಪ್ರಾಯಪಟ್ಟರು.

ಚುನಾವಣಾ ಪ್ರಚಾರದ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಅಭ್ಯರ್ಥಿಗಳು ಅಂತರ ಕಾಪಾಡಿರಲಿಲ್ಲ. ಚುನಾವಣಾ ಪ್ರಚಾರ ಸಭೆಗಳಲ್ಲಿ ಸೇರಬಹುದಾದ ಜನರ ಸಂಖ್ಯೆಗೆ ಆಯೋಗ ಮಿತಿ ನಿಗದಿಪಡಿಸಿತ್ತಾದರೂ ಅದನ್ನೂ ಮೀರಿ ಸೂರಾರು ಸಂಖ್ಯೆಯಲ್ಲಿ ಜನ ಗುಂಪುಗೂಡಿದ್ದರು.

ಕೋವಿಡ್‌ ಸೋಂಕು ಹರಡುವಿಕೆ ನಿಯಂತ್ರಿಸುವ ಉದ್ದೇಶದಿಂದ ಚುನಾವಣೆ ಸಮೀಪಿಸುತ್ತಿದ್ದಂತೆ ಈ ಕ್ಷೇತ್ರದಲ್ಲಿ ಕೋವಿಡ್‌ ಪರೀಕ್ಷೆ ಪ್ರಮಾಣವನ್ನೂ ಬಿಬಿಎಂಪಿ ಹೆಚ್ಚಿಸಿತ್ತು. ಕೋವಿಡ್‌ ಪರೀಕ್ಷೆ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸಲು ಬಿಬಿಎಂಪಿ ಮುಂದಾಗಿದೆ.

‘ಕ್ಷೇತ್ರದಲ್ಲೂ ಚುನಾವಣಾ ಪ್ರಚಾರದ ವೇಳೆ ಹೆಚ್ಚು ಜನ ಜಂಗುಳಿ ಸೇರಿದ ಕಡೆ ಬಿಬಿಎಂಪಿ ವತಿಯಿಂದಲೇ ಕೋವಿಡ್‌ ಪರೀಕ್ಷೆ ನಡೆಸುವುದಕ್ಕೆ ವ್ಯವಸ್ಥೆ ಕಲ್ಪಿಸಲಿದ್ದೇವೆ. ಇಂತಹ ಕಡೆ ಜನರೇ ಸ್ವಯಂಪ್ರೇರಿತವಾಗಿ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಬೇಕು’ ಎಂದು ಜೆ.ಮಂಜುನಾಥ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT