ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಪ್ರತಿನಿತ್ಯ 1,500 ಕೋವಿಡ್ ಪರೀಕ್ಷೆಗೆ ಸೂಚನೆ: ದಿನೇಶ್ ಗುಂಡೂರಾವ್

Published 20 ಡಿಸೆಂಬರ್ 2023, 23:30 IST
Last Updated 20 ಡಿಸೆಂಬರ್ 2023, 23:30 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್ ತಡೆಗೆ ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಪ್ರತಿನಿತ್ಯ 1,500 ಕೋವಿಡ್ ಪರೀಕ್ಷೆಗಳನ್ನು ನಡೆಸಬೇಕು ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದರು. 

ಕೇರಳದಲ್ಲಿ ಕೊರೊನಾ ವೈರಾಣುವಿನ ರೂಪಾಂತರಿ ಜೆಎನ್.1 ಪತ್ತೆಯಾಗಿರುವ ಕಾರಣ ನಗರದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಬಿಬಿಎಂಪಿ ಹಾಗೂ ಇಲಾಖೆ ಅಧಿಕಾರಿಗಳ ಜತೆಗೆ ಅವರು ಬುಧವಾರ ಸಭೆ ನಡೆಸಿದರು.

ಈಗಾಗಲೇ ಮಾಡಿಕೊಂಡಿರುವ ಸಿದ್ಧತೆಗಳ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಂದ ಮಾಹಿತಿ ಪಡೆದುಕೊಂಡ ಅವರು, ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ವಿಶೇಷ ನಿಗಾ ಇರಿಸಲು ಸೂಚಿಸಿದರು. ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್, ಆಯುಕ್ತ ಡಿ. ರಂದೀಪ್, ಎನ್‌ಎಚ್‌ಎಂ ನವೀನ್ ಭಟ್ ಇದ್ದರು.

‘ಬಿಬಿಎಂಪಿ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ವೈದ್ಯಕೀಯ ಆಮ್ಲಜನಕ ಸಂಪರ್ಕ ಹೊಂದಿರುವ ಹಾಸಿಗೆಗಳ ಜತೆಗೆ ತೀವ್ರ ನಿಗಾ ಘಟಕ (ಐಸಿಯು) ಹಾಸಿಗೆಗಳು ಕೊರತೆಯಾಗದಂತೆ ನೋಡಿಕೊಳ್ಳಬೇಕು. ಮುಖಗವಸು ಧರಿಸುವ ಬಗ್ಗೆ ಜನರಿಗೆ ಜಾಗೃತಿ ಮೂಡಿಸಬೇಕು’ ಎಂದು ಅಧಿಕಾರಿಗಳಿಗೆ ತಿಳಿಸಿದರು. 

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರೂಪಾಂತರಿ ವೈರಾಣು ಪತ್ತೆಗೆ ಸಂಬಂಧಿಸಿದಂತೆ  ವೈರಾಣುವಿನ  ವಂಶವಾಹಿ ಸಂರಚನಾ ವಿಶ್ಲೇಷಣೆ (ಜಿನೋಮಿಕ್ ಸಿಕ್ವೆನ್ಸೀಸ್‌) ಪರೀಕ್ಷೆ ನಡೆಸಲು ರಾಜ್ಯ ಸರ್ಕಾರವೇ ನಿರ್ಧರಿಸಿದೆ. ಈ ಬಗ್ಗೆ ಕೇಂದ್ರದ ಮಾರ್ಗಸೂಚಿ ಇಲ್ಲದಿದ್ದರೂ, ವೈರಾಣುವಿನ ವಂಶವಾಹಿ ಸಂರಚನಾ ವಿಶ್ಲೇಷಣೆಗೆ ಕ್ರಮವಹಿಸಲಾಗಿದೆ. ಈ ಪರೀಕ್ಷೆಗೆ 50 ಮಾದರಿಗಳು ಅಗತ್ಯ. ಮಾದರಿ ಸಂಗ್ರಹಕ್ಕೆ ಕ್ರಮ ವಹಿಸಲಾಗಿದೆ’ ಎಂದರು.

‘ಹೊಸ ವರ್ಷದ ಆಚರಣೆಗೆ ನಿರ್ಬಂಧ ಹಾಕುವ ಬಗ್ಗೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾಪವಿಲ್ಲ. ಶನಿವಾರ ವೇಳೆಗೆ ಪರೀಕ್ಷೆ ಹೆಚ್ಚಿಸಿದಾಗ ಪ್ರಕರಣಗಳು ಒಂದಷ್ಟು ಹೆಚ್ಚಾಗಬಹುದು. ಪರಿಸ್ಥಿತಿ ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ’ ಎಂದು ಹೇಳಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT