ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಎದುರಿಸಲು ಲಸಿಕೆ ಪಡೆದುಕೊಳ್ಳಿ: ನಟಿಯರು ಮನವಿ

Last Updated 14 ಏಪ್ರಿಲ್ 2021, 21:01 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಕಾಣಿಸಿಕೊಂಡಿರುವ ಕಾರಣ 45 ವರ್ಷ ಮೇಲ್ಪಟ್ಟವರು ಆದಷ್ಟು ಬೇಗ ಕೋವಿಡ್ ಲಸಿಕೆ ಪಡೆದುಕೊಳ್ಳಬೇಕು ಎಂದು ನಟಿಯರು ಮನವಿ ಮಾಡಿದ್ದಾರೆ.

ಈ ಬಗ್ಗೆ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಆರೋಗ್ಯ ಇಲಾಖೆಯು ಹಂಚಿಕೊಂಡಿದ್ದು, ಕೋವಿಡ್ ಎರಡನೇ ಅಲೆ ಎದುರಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ನಟಿಯರು ತಿಳಿಸಿದ್ದಾರೆ.

‘ಕೋವಿಡ್ ಪೀಡಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಜವಾಬ್ದಾರಿಯುತ ನಾಗರಿಕರಾದ ನಾವು ಎಲ್ಲ ನಿಯಮಗಳನ್ನು ತಪ್ಪದೇ ಪಾಲಿಸಬೇಕು. ಮನೆಯಿಂದ ಹೊರಗಡೆ ಹೋಗುವಾಗ ಮುಖಗವಸು ಧರಿಸುವುದನ್ನು ಮರೆಯಬಾರದು. ಅರ್ಹ ಫಲಾನುಭವಿಗಳು ಆದಷ್ಟು ಬೇಗ ಲಸಿಕೆ ಪಡೆದುಕೊಳ್ಳಬೇಕು. ಇದರಿಂದ ಕಾಯಿಲೆಯ ತೀವ್ರತೆ ಹಾಗೂ ಸಾವಿನ ಪ್ರಮಾಣ ಕಡಿಮೆ ಆಗಲಿದೆ’ ಎಂದು ನಟಿ ಸುಧಾರಾಣಿ ತಿಳಿಸಿದ್ದಾರೆ.

ಅನುಪ್ರಭಾಕರ್, ‘ಕೋವಿಡ್ ಎರಡನೇ ಅಲೆ ಶುರುವಾಗಿದೆ. ಈ ಸಂದರ್ಭದಲ್ಲಿ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕು. 45 ವರ್ಷ ಮೇಲ್ಪಟ್ಟವರಿಗೆ ಸರ್ಕಾರವು ಲಸಿಕೆ ವಿತರಿಸುತ್ತಿದೆ. ಅರ್ಹ ಫಲಾನುಭವಿಗಳು ಆದಷ್ಟು ಬೇಗ ಲಸಿಕೆ ಪಡೆದುಕೊಳ್ಳುವ ಮೂಲಕ ಕೋವಿಡ್‌ನಿಂದ ರಕ್ಷಣೆ ಪಡೆದುಕೊಳ್ಳಬೇಕು’ ಎಂದು ಮನವಿ ಮಾಡಿದ್ದಾರೆ.

‘ಕೋವಿಡ್ ನಿಯಂತ್ರಣಕ್ಕೆ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು. ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿರುವ ಕಾರಣ ಯಾರೂ ಮನೆಯ ಹೊರಗಡೆ ಓಡಾಟ ನಡೆಸಬಾರದು. ಲಸಿಕೆಯನ್ನು ಪಡೆದುಕೊಳ್ಳುವ ಮೂಲಕ ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕು’ ಎಂದು ಹರ್ಷಿಕಾ ಪೂಣಚ್ಚ ಹೇಳಿದ್ದಾರೆ.

ಸ್ವಚ್ಛತೆಗೆ ಆದ್ಯತೆ ನೀಡಿ: ‘ಹೊರಗಡೆಯಿಂದ ಮನೆಗೆ ಬಂದ ಬಳಿಕ ಸ್ವಚ್ಛತೆಯನ್ನು ಖಚಿತಪಡಿಸಿಕೊಳ್ಳಬೇಕು. ಕೈ–ಕಾಲು, ಮುಖ ತೊಳೆದುಕೊಳ್ಳುವ ಜತೆಗೆ ಬಟ್ಟೆಯನ್ನು ಸೋಪಿನ ನೀರಿನಿಂದ ತೊಳೆಯಬೇಕು. ಕನ್ನಡಕ, ಕೈ ಗಡಿಯಾರ, ಮೊಬೈಲ್ ಸೇರಿದಂತೆ ವಿವಿಧ ಸಾಧನಗಳನ್ನು ಸೋಂಕು ನಿವಾರಕದಿಂದ ಸ್ವಚ್ಛಪಡಿಸಿಕೊಳ್ಳಬೇಕು. ಕೋವಿಡ್‌ ಪೀಡಿತರು ಮನೆ ಆರೈಕೆಗೆ ಒಳಗಾದಲ್ಲಿ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಆದ್ಯತೆ ನೀಡಬೇಕಾಗುತ್ತದೆ. ವ್ಯಾಯಾಮ, ಯೋಗ, ಧ್ಯಾನ ಮಾಡಬೇಕು. ಪೌಷ್ಟಿಕ ಆಹಾರ ಸೇವಿಸಬೇಕು’ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT