ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ನಗರದಲ್ಲಿ 8 ಕಡೆ ಕೋವಿಡ್ ಲಸಿಕೆ ಇಂದಿನಿಂದ

ಪಾಲಿಕೆ ಆಯುಕ್ತ ಎನ್.ಮಂಜುನಾಥ ಪ್ರಸಾದ್ ಅವರಿಂದ ಸಿದ್ಧತೆ ಪರಿಶೀಲನೆ
Last Updated 15 ಜನವರಿ 2021, 20:08 IST
ಅಕ್ಷರ ಗಾತ್ರ

ಬೆಂಗಳೂರು: ನಗರದ 8 ಕೇಂದ್ರಗಳಲ್ಲಿ ಕೋವಿಡ್ ಲಸಿಕೆಯನ್ನು ಶನಿವಾರದಿಂದ ನೀಡಲು ಬಿಬಿಎಂಪಿ ಸಿದ್ಧತೆ ಮಾಡಿಕೊಂಡಿದೆ.

ಸಿ.ವಿ. ರಾಮನ್ ನಗರದ ಲಸಿಕಾ ಕೇಂದ್ರಕ್ಕೆ ಪಾಲಿಕೆ ಆಯುಕ್ತ ಎನ್. ಮಂಜುನಾಥಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ಅವರು ಬೆಳಿಗ್ಗೆ 10.30ಕ್ಕೆ ಲಸಿಕ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಇದೇ ವೇಳೆ ಬಿಬಿಎಂಪಿಯ 8 ಕೇಂದ್ರಗಳಲ್ಲಿ ಲಸಿಕೆ ನೀಡಲು ಆರಂಭಿಸಲಾಗುವುದು’ ಎಂದು ಹೇಳಿದರು.

‘ವಿಕ್ಟೋರಿಯಾ ಆಸ್ಪತ್ರೆ, ಕೆ.ಸಿ. ಜನರಲ್ ಆಸ್ಪತ್ರೆ, ಸಿ.ವಿ.ರಾಮನ್ ನಗರ, ಜಯನಗರ, ಸೆಂಟ್ ಜಾನ್ಸ್ ವೈದ್ಯಕೀಯ ಕಾಲೇಜು, ಮಲ್ಲಸಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರ, ಈಸ್ಟ್ ಪಾಯಿಂಟ್ ವೈದ್ಯಕೀಯ ಕಾಲೇಜು, ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಲಸಿಕೆ ನೀಡುವ ಕಾರ್ಯ ಆರಂಭವಾಗಲಿದೆ. ಪ್ರತಿ ಕೇಂದ್ರದಲ್ಲಿ 100 ಜನರಿಗೆ ಲಸಿಕೆ ನೀಡಲಾಗುವುದು’ ಎಂದು ತಿಳಿಸಿದರು.

‘1,05 ಲಕ್ಷ ಲಸಿಕೆಯನ್ನು ದಾಸ್ತಾನು ಕೇಂದ್ರದಲ್ಲಿ ಸಂಗ್ರಹಿಸಲಾಗಿದೆ. ಜ.18ರಿಂದ ಪಾಲಿಕೆ ವ್ಯಾಪ್ತಿಯ ಎಲ್ಲಾ 760 ಕೇಂದ್ರಗಳಲ್ಲೂ ಲಸಿಕೆ ನೀಡಲಾಗುತ್ತದೆ. ಅದಕ್ಕೆ ಬೇಕಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ’ ಎಂದು ವಿವರಿಸಿದರು.

‘ಸರ್ಕಾರ ಮುಖ್ಯ ಕಾರ್ಯದರ್ಶಿ ಅವರ ಜತೆ ಸಭೆ ನಡೆಸಲಾಗಿದ್ದು, ಜ.24ರ ವೇಳೆಗೆ 2ನೇ ಹಂತದ ಲಸಿಕೆ ಪಡೆಯುವ ಫಲಾನುಭವಿಗಳು ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಳ್ಳಲು ಅವರು ಸೂಚನೆ ನೀಡಿದ್ದಾರೆ. ನೋಂದಣಿಯಾದ ಬಳಿಕ ಲಸಿಕೆ ನೀಡುವ ದಿನ ಖಾತರಿಪಡಿಸಲಾಗುತ್ತದೆ. ಈ ಹಂತದಲ್ಲಿ ಪಾಲಿಕೆ, ಪೊಲೀಸ್, ಕಂದಾಯ, ಜಲಮಂಡಳಿ ಸಿಬ್ಬಂದಿಗೆ ಲಸಿಕೆ ನೀಡಲಾಗುವುದು’ ಎಂದು ಹೇಳಿದರು.

‘ಲಸಿಕೆ ಸಂದರ್ಭದಲ್ಲಿ ಫಲಾನುಭವಿಗಳಿಗೆ ಒಟಿಪಿ ಬರಲಿದೆ. ನೆಟ್‌ವರ್ಕ್ ಸಮಸ್ಯೆ ಆಗದಂತೆ ಎಲ್ಲ ಕೇಂದ್ರಗಳಲ್ಲೂ ಇಂಟರ್‌ನೆಟ್ ಸದೃಢಗೊಳಿಸಲಾಗಿದೆ. ಇಂಟರ್‌ ನೆಟ್ ಸಮಸ್ಯೆ ಎದುರಾದರೂ ಆಫ್‌ಲೈನ್‌ ಮೂಲಕ ದಾಖಲು ಮಾಡಿಕೊಂಡು ಬಳಿಕ ಆನ್‌ಲೈನ್‌ಗೆ ದಾಖಲಿಸಲಾಗುವುದು’ ಎಂದು ಸ್ಪಷ್ಟಪಡಿಸಿದರು.

‘ಲಸಿಕಾ ಕೇಂದ್ರಕ್ಕೆ ಬರುವ ಫಲಾನುಭವಿಗಳ ಕೈಗೆ ಸ್ಯಾನಿಟೈಸರ್ ಹಾಕಿ, ಥರ್ಮಲ್ ಸ್ಕ್ಯಾನ್ ಮತ್ತು ಪಲ್ಸ್ ಆಕ್ಸಿಮೀಟರ್ ಮೂಲಕ ತಪಾಸಣೆ ನಡೆಸಲಾಗುವುದು. ನಂತರ ಫಲಾನುಭವಿ ವಿವರ ಪರಿಶೀಲನೆ ನಡೆಸಿ ಅವರ ಮೊಬೈಲ್‌ಗೆ ಬರುವ ಒಟಿಪಿ ಆಧರಿಸಿ ಲಸಿಕೆ ನೀಡಲಾಗುತ್ತದೆ. ಬಳಿಕ ಅರ್ಧ ಗಂಟೆಗಳ ಕಾಲ ಅವರು ಅಲ್ಲೇ ವಿಶ್ರಾಂತಿ ಪಡೆಯಬೇಕು. ಲಸಿಕೆ ಪಡೆದವರಿಗೆ ಏನಾದರೂ ಆರೋಗ್ಯ ಸಮಸ್ಯೆ ಎದುರಾದರೆ ಚಿಕಿತ್ಸೆ ನೀಡುವ ವ್ಯವಸ್ಥೆ ಇದೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ ಲಿಂಕ್ ಮಾಡಿರುವ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಕರೆದೊಯ್ಯಲಾಗುತ್ತದೆ’ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT