ಶನಿವಾರ, ಜುಲೈ 31, 2021
20 °C

ಆದಿವಾಸಿಗಳಿಗೆ ಲಸಿಕೆ ನೀಡಲು ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ನಗರದಲ್ಲಿ ಅಲೆಮಾರಿ ಆದಿವಾಸಿಗಳು ನೆಲೆಸಿರುವಲ್ಲಿಗೆ ತೆರಳಿ ಅಲ್ಲಿನ ನಿವಾಸಿಗಳಿಗೆ ಕೋವಿಡ್‌ ಲಸಿಕೆ ನೀಡಬೇಕು’ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಅವರು ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಆಹಾರ ಇಲಾಖೆ ಉಪ ನಿರ್ದೇಶಕರಿಗೆ ಸೂಚನೆ ನೀಡಿದರು.   

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಎಸ್‌ಸಿ, ಎಸ್‌ಟಿ ಅಲೆಮಾರಿ ಜಿಲ್ಲಾ ಅನುಷ್ಠಾನ ಸಮಿತಿ ಸಭೆಯಲ್ಲಿ ಅವರು ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಅಲೆಮಾರಿ, ಅರೆ ಅಲೆಮಾರಿ ಮತ್ತು ಆದಿವಾಸಿ ಬುಡಕಟ್ಟು ಜನರಿಗೆ ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಅಲೆಮಾರಿ, ಆದಿವಾಸಿ ಕೋಶದ ಅಡಿಯಲ್ಲಿ 2020-21ನೇ ಸಾಲಿನಲ್ಲಿ ಸಾಲ ಸೌಲಭ್ಯ ನೀಡಲಾಗುತ್ತಿದ್ದು, ಇದಕ್ಕಾಗಿ 336 ಅರ್ಹ ಫಲಾನುಭವಿಗಳನ್ನು ಸಭೆಯಲ್ಲಿ ಆಯ್ಕೆ ಮಾಡಲಾಯಿತು.  

‘ಅಲೆಮಾರಿ ಬುಡಕಟ್ಟು ಮಹಾಸಭಾದ ಸಹಯೋಗದಲ್ಲಿ ಕೂಡಲೇ ಅಲೆಮಾರಿ ಸೆಟ್ಲ್‌ಮೆಂಟ್‌ಗಳಿಗೆ ತೆರಳಿ 3000 ಕುಟುಂಬಗಳಿಗೆ ಆಹಾರಧಾನ್ಯದ ಕಿಟ್ ವಿತರಣೆ ಮಾಡಬೇಕು. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. 

ತಾವರೆಕೆರೆ ಸಮೀಪದ ಎಲಚಗುಪ್ಪೆ (ಹಕ್ಕಿಪಿಕ್ಕಿ ಎಲ್ಲಮ್ಮ ಕಾಲೊನಿ) ನಿವಾಸಿಗಳಿಗೆ ನಿವೇಶನ ಕಲ್ಪಿಸುವ ಯೋಜನೆಯು ಮೂರು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಬಗ್ಗೆ ಬೆಂಗಳೂರು ನಗರ ಜಿಲ್ಲಾ ಅನುಷ್ಠಾನ ಸಮಿತಿ ಸದಸ್ಯ ವೆಂಕಟರಮಣಯ್ಯ ಗಮನ ಸೆಳೆದರು.

ಇದಕ್ಕೆ ಪ್ರತಿಕ್ರಿಯಿಸಿದ ಮಂಜುನಾಥ್‌, ‘ಅಲೆಮಾರಿಗಳಿಗಾಗಿ ಮೀಸಲಿಟ್ಟಿರುವ 5 ಎಕರೆ ಜಾಗವನ್ನು ಸಮತಟ್ಟು ಮಾಡಿ ರಾಜೀವ್‌ ಗಾಂಧಿ ವಸತಿ ನಿಗಮಕ್ಕೆ ಹಸ್ತಾಂತರಿಸಬೇಕು. ಇಲ್ಲಿ ಮನೆ ನಿರ್ಮಿಸುವ ಕಾರ್ಯವನ್ನು ಶೀಘ್ರವೇ ಆರಂಭಿಸಬೇಕು’ ಎಂದು ಸಮಾಜ ಕಲ್ಯಾಣ ಇಲಾಖೆ ಮತ್ತು ಕೆಆರ್‌ಐಡಿಎಲ್‌ ಅಧಿಕಾರಿಗಳಿಗೆ ತಿಳಿಸಿದರು.   

ಅಲೆಮಾರಿ ಬುಡಕಟ್ಟು ಮಹಾಸಭಾದ ಉಪಾಧ್ಯಕ್ಷ ಆನಂದ್ ಕುಮಾರ್ ಏಕಲವ್ಯ, ‘ಲಾಕ್‌ಡೌನ್‌ ಸಮಯದಲ್ಲಿ ವಾಹನಗಳಲ್ಲಿ ಆಹಾರದ ಕಿಟ್‌ ಸಾಗಿಸಲು ಪೊಲೀಸರು ಅಡ್ಡಿಪಡಿಸುತ್ತಿದ್ದು ಜಿಲ್ಲಾಡಳಿತದ ವತಿಯಿಂದ ವಾಹನಗಳ ಪಾಸ್ ಮತ್ತು ಜಿಲ್ಲಾ ಅನುಷ್ಠಾನ ಸಮಿತಿ ಸದಸ್ಯರಿಗೆ ಗುರುತಿನ ಪತ್ರ ನೀಡಬೇಕು‘ ಎಂದು ಕೋರಿದರು. ಇದಕ್ಕೆ ಜಿಲ್ಲಾಧಿಕಾರಿಯವರು ಸಕಾರಾತ್ಮಕವಾಗಿ ಸ್ಪಂದಿಸಿದರು.   

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು