ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಸ್‌ವೈ ಉದಾರ ನಡೆಗೆ ಟೀಕೆ, ವಿರೋಧ ಪಕ್ಷದವರ ಮೆಚ್ಚುಗೆ

ಕಟ್ಟರ್‌ವಾದಿಗಳ ಕೆಂಗಣ್ಣು:
Last Updated 8 ಏಪ್ರಿಲ್ 2020, 20:40 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್–19 ವಿಚಾರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿ ಟೀಕೆ ಮಾಡುವುದನ್ನು ಖಂಡಿಸಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿಕೆ ನೀಡಿರುವುದು ಟೀಕೆಗೆ ಗ್ರಾಸವಾಗಿದೆ.

ಯಡಿಯೂರಪ್ಪ ಅವರ ಸಜ್ಜನಿಕೆಯ ಕರೆಯನ್ನು ಟೀಕೆಗೆ ಗುರಿ ಮಾಡಿರುವ ಒಂದಿಷ್ಟು ಜನ ಸಾಮಾಜಿಕ ಜಾಲತಾಣದಲ್ಲಿ ಅವರ ವಿರುದ್ಧ ಹರಿಹಾಯ್ದಿದ್ದಾರೆ.

‘ಇಡೀ ದೇಶವೇ ಒಗ್ಗಟ್ಟಾಗಿ ಕೋವಿಡ್‌–19 ವಿರುದ್ಧ ಹೋರಾಡುತ್ತಿರುವಾಗ ಜಾತಿ– ಧರ್ಮದ ಹೆಸರು ಎಳೆದು ತರಬಾರದು. ಸಣ್ಣ ಪುಟ್ಟ ಘಟನೆಗಳನ್ನು ದೊಡ್ಡದು ಮಾಡಬಾರದು. ಅಲ್ಪಸಂಖ್ಯಾತರನ್ನು ಅನುಮಾನದಿಂದ ನೋಡಿದರೆ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ’ ಎಂದು ಯಡಿಯೂರಪ್ಪ ಹೇಳಿದ್ದರು.

ಯಡಿಯೂರಪ್ಪ ಅವರ ಹೇಳಿಕೆಯನ್ನು ವಿರೋಧ ಪಕ್ಷಗಳ ನಾಯಕರು ಹಾಗೂ ಮುಸ್ಲಿಂ ಸಮುದಾಯದ ಮುಖಂಡರು ಸ್ವಾಗತಿಸಿದ್ದರು.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧ ಚರ್ಚೆ ಆರಂಭವಾಗಿದೆ. ಕೆಲವರು ಯಡಿಯೂರಪ್ಪ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಹಿಂದುಗಳ ಪರ ನಿಲ್ಲದ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಇಳಿಸಬೇಕು ಎಂದೂ ಆಗ್ರಹಿಸಿದ್ದಾರೆ.

ಬಿಜೆಪಿಯೊಳಗಿನ ಕೆಲ ಕಟ್ಟರ್‌ವಾದಿ ನಾಯಕರೂ ಮುಖ್ಯಮಂತ್ರಿಯವರ ಹೇಳಿಕೆ ಬಗ್ಗೆ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ಸಂಸದೆ ಶೋಭಾ ಕರಂದ್ಲಾಜೆ ಮತ್ತು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಹೇಳಿಕೆಗಳನ್ನು ನೀಡುವ ಮೂಲಕ ಮುಖ್ಯಮಂತ್ರಿಯನ್ನು ಮುಜುಗರಕ್ಕೀಡು ಮಾಡಿದ್ದಾರೆ. ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಶಾಸಕರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ.

‘ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅವರು ಸರಿಯಾಗಿಯೇ ನಡೆದುಕೊಂಡಿದ್ದಾರೆ. ರಾಜ್ಯದ ಸಂಕಷ್ಟದ ಸಂದರ್ಭದಲ್ಲಿ ಎಲ್ಲರೂ ಅವರ ಕೈಬಲಪಡಿಸಬೇಕು. ರಾಜ್ಯ ಮತ್ತು ರಾಜ್ಯದ ಜನರ ಆರೋಗ್ಯ ಮುಖ್ಯವೇ ಹೊರತು ಜಾತಿ– ಧರ್ಮದ ಹೆಸರಿನಲ್ಲಿ ಕೋವಿಡ್‌–19 ವಿರುದ್ಧದ ಯುದ್ಧಕ್ಕೆ ಹಿನ್ನಡೆ ಆಗಬಾರದು’ ಎಂದು ಆರ್‌ಎಸ್‌ಎಸ್‌ ನಾಯಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT