ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಭಾವಿ ಸಚಿವರ ಹೆಸರು ಬ‌ಹಿರಂಗಪಡಿಸಲು ಬಂಧಿತ ಐಪಿಎಸ್ ಅಧಿಕಾರಿ ಸಿದ್ಧ: ಡಿಕೆಶಿ

Last Updated 6 ಜುಲೈ 2022, 8:34 IST
ಅಕ್ಷರ ಗಾತ್ರ

ಬೆಂಗಳೂರು: 'ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧನದಲ್ಲಿರುವ ಎಡಿಜಿಪಿ ಅಮ್ರಿತ್ ಪೌಲ್, ಈ ಹಗರಣದಲ್ಲಿ ಭಾಗಿಯಾಗಿರುವ ಸಚಿವರು, ನಾಯಕರ ಹೆಸರು ಬಹಿರಂಗಪಡಿಸಲು ಸಿದ್ಧವಿದ್ದರೂ ತನಿಖಾಧಿಕಾರಿಗಳು ಅದನ್ನು ದಾಖಲಿಸಿಕೊಳ್ಳುತ್ತಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದರು.

ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, 'ಇಂತಹ ತನಿಖೆಯಿಂದ ನ್ಯಾಯ ಸಿಗುವುದಿಲ್ಲ. ಹೈಕೋರ್ಟ್ ಹಾಲಿ ನ್ಯಾಯಮೂರ್ತಿಯ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು' ಎಂದರು.

'ಪಿಎಸ್ಐ ಹಗರಣದಲ್ಲಿ ರಾಜ್ಯದ ಐಪಿಎಸ್ ಅಧಿಕಾರಿಗಳು, ರಾಜಕಾರಣಿಗಳು, ಮಂತ್ರಿಗಳು ಭಾಗಿಯಾಗಿದ್ದಾರೆ. ಸಚಿವರೇ ನಮ್ಮ ಜಿಲ್ಲೆಯ ಅಭ್ಯರ್ಥಿಗಳಿಗೆ ಶರಣಾಗುವಂತೆ ಹೇಳಿದ್ದಾರೆ. ಇದುವರೆಗೂ 50ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದು, ಅವರ ಹೇಳಿಕೆ, ಬಂಧನವಾಗಿರುವ ಎಡಿಜಿಪಿ ಅವರ ಹೇಳಿಕೆಯನ್ನು ಪೂರ್ಣ ಪ್ರಮಾಣದಲ್ಲಿ ತನಿಖಾಧಿಕಾರಿಗಳು ದಾಖಲೆ ಮಾಡಿಕೊಳ್ಳುತ್ತಿಲ್ಲ. ತನಿಖೆಯಲ್ಲಿ ಆಂತರಿಕವಾಗಿ ಏನೆಲ್ಲಾ ಆಗುತ್ತಿದೆ ಎಂಬುದು ಗೊತ್ತಿದೆ' ಎಂದರು.

'ರಾಜ್ಯದಲ್ಲಿ ಯಾವುದೇ ಯೋಜನೆಗಳು ಜಾರಿಯಾಗುತ್ತಿಲ್ಲ. ಬಿಜೆಪಿ ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸಿಲ್ಲ. ಅವರ ಕತೆ ಮುಕ್ತಾಯದ ಹಂತದಲ್ಲಿದ್ದು, ಜನ ಅವರನ್ನು ಅಧಿಕಾರದಿಂದ ಕಿತ್ತೊಗೆಯಲಿದ್ದಾರೆ' ಎಂದರು.

ಬಿಜೆಪಿ ಶಾಸಕರ ಅಧ್ಯಯನ ಪ್ರವಾಸ ಕುರಿತು ಕೇಳಿದ ಪ್ರಶ್ನೆಗೆ ಅವರು, ‘ಅಧ್ಯಯನದ ಹೆಸರಲ್ಲಿ ಬಿಜೆಪಿ ಶಾಸಕರು ಪ್ರವಾಸ ಮಾಡುತ್ತಿದ್ದಾರೆ. ಇದು ಅವರ ಇಚ್ಛೆ. ನಾವು ನಮ್ಮ ಶಾಸಕರನ್ನು ಅಧ್ಯಯನ ಪ್ರವಾಸಕ್ಕೆ ಕಳುಹಿಸಲು ಮುಂದಾದಾಗ ಅವರು ಟೀಕಿಸಿದ್ದರು’ ಎಂದರು.

ಸಿದ್ದರಾಮೋತ್ಸವ ಕಾರ್ಯಕ್ರಮ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ನಾಯಕರು ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುವುದರಲ್ಲಿ ಯಾವುದೇ ತಪ್ಪಿಲ್ಲ. ಅದು ಅವರ ವೈಯಕ್ತಿಕ ಹಾಗೂ ಅಭಿಮಾನಿಗಳ ಇಚ್ಛೆಗೆ ಬಿಟ್ಟದ್ದು. ಪಕ್ಷಕ್ಕೆ ಏನೆಲ್ಲಾ ಕಾರ್ಯಕ್ರಮಗಳು ಅನುಕೂಲವಾಗುತ್ತವೋ ಅದಕ್ಕೆ ಪಕ್ಷದ ಅಧ್ಯಕ್ಷನಾಗಿ ನಾನು ಬೆಂಬಲವಾಗಿ ನಿಲ್ಲುತ್ತೇನೆ' ಎಂದು ಪುನರುಚ್ಚರಿಸಿದರು.

'ದೇಶದ 75ನೇ ಸ್ವಾತಂತ್ರ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು, 75 ಸಾವಿರದಿಂದ 1 ಲಕ್ಷ ಕಾರ್ಯಕರ್ತರು ಬೆಂಗಳೂರಿನಲ್ಲಿ ಆಗಸ್ಟ್ 15 ರಂದು ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ. ಸೋನಿಯಾ ಗಾಂಧಿ ಅವರು ಆ ವಿಚಾರವಾಗಿ ನನಗೆ ಜವಾಬ್ದಾರಿ ವಹಿಸಿದ್ದು, ಇದರ ಜತೆಗೆ 75 ಕಿ.ಮೀ ಪಾದಯಾತ್ರೆ ಮಾಡಲು ತಿಳಿಸಿದ್ದಾರೆ. ಇದನ್ನು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಡೆಸಲು ಸೂಚಿಸಲಾಗಿದ್ದು, ಈ ವಿಚಾರವಾಗಿ ಗುರುವಾರ ಸಭೆ ಕರೆದಿದ್ದೇನೆ. ನಾನು ಪಕ್ಷದ ಹೈಕಮಾಂಡ್ ನಿರ್ದೇಶನದಂತೆ ನಡೆದುಕೊಳ್ಳುತ್ತಿದ್ದೇನೆ' ಎಂದರು.

'ಕಾಂಗ್ರೆಸ್ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು, ಸಂವಿಧಾನವನ್ನು ನೀಡಿದೆ. ಈ ಕಾರ್ಯಕ್ರಮದ ಆಚರಣೆ ನಮ್ಮ ಕರ್ತವ್ಯ. ಈ ಕಾರ್ಯಕ್ರಮದ ಮೂಲಕ ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಾತ್ರವನ್ನು ಎಲ್ಲರಿಗೂ ತಿಳಿಸಬೇಕಿದೆ. ಉಳಿದಂತೆ ನಾಯಕರ ಹುಟ್ಟುಹಬ್ಬ ಆಚರಣೆ ವಿಚಾರವಾಗಿ ನನಗೆ ಯಾವುದೇ ಆಕ್ಷೇಪವಿಲ್ಲ’ ಎಂದರು.

ಹೈಕೋರ್ಟ್ ನ್ಯಾಯಮೂರ್ತಿಗೆ ಬೆದರಿಕೆ ಹಾಕಿದ ಬಗ್ಗೆ ರಾಹುಲ್ ಗಾಂಧಿ ವರ ಟ್ವೀಟ್ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ರಾಹುಲ್ ಗಾಂಧಿ ಅವರು ಸರಿಯಾಗಿ ಹೇಳಿದ್ದಾರೆ. ಈ ದೇಶದಲ್ಲಿ ನ್ಯಾಯಾಂಗದ ರಕ್ಷಣೆಯಾಗಬೇಕು. ನ್ಯಾಯಮೂರ್ತಿಗಳು ಭ್ರಷ್ಟಾಚಾರ ನಿಗ್ರಹದ ವಿಚಾರವಾಗಿ ಧ್ವನಿ ಎತ್ತಿ, ಮುಕ್ತವಾದ ತನಿಖೆ ಆಗಬೇಕು ಎಂದಿದ್ದಾರೆ. ಹಗರಣಗಳಲ್ಲಿ ಸರ್ಕಾರ ಸಂಪೂರ್ಣವಾಗಿ ಭಾಗಿಯಾಗಿದೆ ಎಂದು ಅವರಿಗೂ ಗೊತ್ತಿದೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT