ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೂಪಾ ವಿರುದ್ಧದ ಮೊಕದ್ದಮೆ ವಿಚಾರಣೆಗೆ ಹೈಕೋರ್ಟ್‌ ತಡೆ

Last Updated 11 ಜನವರಿ 2022, 15:32 IST
ಅಕ್ಷರ ಗಾತ್ರ

ಬೆಂಗಳೂರು:ಐಪಿಎಸ್ ಅಧಿಕಾರಿ ಡಿ.ರೂಪಾ ವಿರುದ್ಧ ನಿವೃತ್ತ ಡಿಜಿಪಿ ಎಚ್.ಎನ್.ಸತ್ಯನಾರಾಯಣ ರಾವ್ ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಅಧೀನ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ವಿಚಾರಣೆ ರದ್ದುಪಡಿಸುವಂತೆ ಕೋರಿ ಡಿ.ರೂಪಾ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಕೆ.ನಟರಾಜನ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿ,ದೂರುದಾರ ಎಚ್.ಎನ್.ಸತ್ಯನಾರಾಯಣ ರಾವ್‌ ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ.

ಅರ್ಜಿದಾರರ ಪರ ವಕೀಲ ಮಧುಕರ್ ದೇಶಪಾಂಡೆ, ‘ಅಪರಾಧ ದಂಡ ಪ್ರಕ್ರಿಯಾ ಸಂಹಿತೆಯ ಕಲಂ 199ರ ಅನುಸಾರ ಸರ್ಕಾರಿ ನೌಕರರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಬೇಕಾದರೆ ವಿಶೇಷ ನಿಯಮ ಅನುಸರಿಸಿ, ಪ್ರಾಸಿಕ್ಯೂಟರ್‌ ಮುಖಾಂತರವೇ ಸೆಷನ್ಸ್ ನ್ಯಾಯಾಲಯದಲ್ಲಿ ದಾಖಲಿಸಬೇಕು. ಮಾನಹಾನಿ ವರದಿ ಪ್ರಕಟಗೊಂಡ ಆರು ತಿಂಗಳ ಒಳಗಾಗಿ ಮೊಕದ್ದಮೆ ದಾಖಲಿಸಬೇಕು. ಆದರೆ,ಈ ಪ್ರಕರಣದಲ್ಲಿ ಸತ್ಯನಾರಾಯಣ ರಾವ್ ಈ ನಿಯಮ ಪಾಲಿಸಿಲ್ಲ’ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

‘ಒಬ್ಬ ಸರ್ಕಾರಿ ನೌಕರ ಮತ್ತೊಬ್ಬ ಸರ್ಕಾರಿ ನೌಕರರ ವಿರುದ್ಧಸರ್ಕಾರಕ್ಕೆ ವರದಿ ಸಲ್ಲಿಸುವುದು ಮಾನನಷ್ಟ ಪ್ರಕರಣದ ವ್ಯಾಪ್ತಿಗೆ ಬರುವುದಿಲ್ಲ.ದೂರನ್ನು ಪರಿಗಣಿಸಿ ತನಿಖೆಗೆ ಆದೇಶಿಸಿರುವ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನಡೆ ಕಾನೂನು ಬಾಹಿರ. ಆದ್ದರಿಂದ, ಡಿ.ರೂಪಾ ವಿರುದ್ಧದ ಅಧೀನ ನ್ಯಾಯಾಲಯದ ವಿಚಾರಣೆ ರದ್ದುಪಡಿಸಬೇಕು. ಈ ಅರ್ಜಿ ಇತ್ಯರ್ಥವಾಗುವರೆಗೂ ವಿಚಾರಣೆಗೆ ತಡೆ ನೀಡಬೇಕು’ ಎಂದು ಕೋರಿದರು.

ಪ್ರಕರಣವೇನು?: ರಾಜ್ಯ ಕಾರಾಗೃಹಗಳ ಇಲಾಖೆ ಡಿಜಿಐ ಆಗಿದ್ದ ಡಿ.ರೂಪಾ2017ರ ಜುಲೈ 12ರಂದು ಸರ್ಕಾರಕ್ಕೆ ವರದಿ ಸಲ್ಲಿಸಿ, ಕಾರಾಗೃಹ ಇಲಾಖೆ ಡಿಜಿಪಿಯಾಗಿದ್ದ ಎಚ್.ಎನ್. ಸತ್ಯನಾರಾಯಣ ರಾವ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದರು.ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧನದಲ್ಲಿದ್ದ ಎಐಎಡಿಎಂಕೆ ನಾಯಕಿ ಶಶಿಕಲಾ ಅವರಿಗೆ ವಿಶೇಷ ಸೌಲಭ್ಯ ಕಲ್ಪಿಸಲು ಸತ್ಯನಾರಾಯಣ ರಾವ್ ₹ 2 ಕೋಟಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಕುರಿತ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು.

2017ರ ಜುಲೈ 31ರಂದು ನಿವೃತ್ತರಾಗಿದ್ದ ಸತ್ಯನಾರಾಯಣ ರಾವ್, ‘ತಮ್ಮ ಘನತೆಗೆ ಧಕ್ಕೆ ಉಂಟಾಗಿದೆ’ ಎಂದು ಆರೋಪಿಸಿ, ಡಿ.ರೂಪಾ ವಿರುದ್ಧ2018ರ ಫೆಬ್ರುವರಿ 5ರಂದು ನಗರದ 9ನೇ ಎಸಿಎಂಎಂ ನ್ಯಾಯಾಲಯಕ್ಕೆ ₹ 20 ಕೋಟಿ ಮೊತ್ತಕ್ಕೆ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.ರೂಪಾ ಸದ್ಯ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT