ಬೆಂಗಳೂರು: ಪೂರ್ಣಗೊಂಡಿರುವ ಕಾಮಗಾರಿಗಳ ಬಿಲ್ ಮೊತ್ತವನ್ನು ಜುಲೈ 15ರೊಳಗೆ ಪಾವತಿಸದಿದ್ದರೆ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಎಚ್ಚರಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಅವರು ಜುಲೈ 5ರಂದು ಪತ್ರ ಬರೆದಿದ್ದು, ‘ತಡೆ ಹಿಡಿಯಲಾಗಿದ್ದ ಬಿಲ್‌ಗಳ ಮೊತ್ತವನ್ನು ಬಿಡುಗಡೆ ಮಾಡಲು ತಾವು ಸುತ್ತೋಲೆ ಹೊರಡಿಸಿದ್ದರೂ ಅದು ಕಾರ್ಯರೂಪಕ್ಕೆ ಬಂದಿಲ್ಲ. ಸಂಬಂಧಪಟ್ಟ ಇಲಾಖೆ ಸಚಿವರು ಮತ್ತು ಅಧಿಕಾರಿಗಳಿಗೆ ಮತ್ತೊಮ್ಮೆ ಸೂಚನೆ ನೀಡಬೇಕು’ ಎಂದು ಮನವಿ ಮಾಡಿದ್ದಾರೆ.
‘ಹಿಂದಿನ ಸರ್ಕಾರ ಅನುಮೋದಿಸಿದ್ದ ವಿವಿಧ ಕಾಮಗಾರಿಗಳ ತಡೆಹಿಡಿಯಲಾಗಿದ್ದ ಬಿಲ್‌ಗಳನ್ನು ಬಿಡುಗಡೆ ಮಾಡಲು ಜೂನ್ 28ರಂದು ಸುತ್ತೋಲೆ ಹೊರಡಿಸಲಾಗಿದೆ. ಆದರೆ ಇದು ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಅಧಿಕಾರಿಗಳು ಯಾವುದೇ ಮಾಹಿತಿ ಬಂದಿಲ್ಲ ಎಂದು ಸಬೂಬು ಹೇಳುತ್ತಿದ್ದಾರೆ. ತಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಒಂದೂವರೆ ತಿಂಗಳಿಂದ ಬಿಲ್ ಪಾವತಿಯಾಗದೆ ಗುತ್ತಿಗೆದಾರರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಖಂಡನಾ ಪತ್ರ: ‘ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾಮಗಾರಿ ನಿಲ್ಲಿಸಿದರೆ ಗುತ್ತಿಗೆದಾರರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಬಾಲಿಶ ಹೇಳಿಕೆ ನೀಡಿದ್ದಾರೆ. ಐಎಎಸ್ ಅಧಿಕಾರಿಯಾಗಿರುವ ನೀವು ಈ ರೀತಿ ಬೆದರಿಕೆ ನೀಡುವುದು ತಮ್ಮ ವ್ಯಾಪ್ತಿಯನ್ನು ಮೀರಿದ ಸಂಗತಿ’ ಎಂದು ಖಂಡನಾ ಪತ್ರದಲ್ಲಿ ತಿಳಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.