ಭಾನುವಾರ, ಅಕ್ಟೋಬರ್ 25, 2020
22 °C
ಆಡಳಿತದಲ್ಲಿ ಪಾರದರ್ಶಕತೆ: ಆಮ್‌ ಆದ್ಮಿ ಪಕ್ಷ ಭರವಸೆ

ಭ್ರಷ್ಟಾಚಾರ ನಿರ್ಮೂಲನೆಗೆ ದೆಹಲಿ ಮಾದರಿ ಪಾಲನೆ: ಆಪ್ ಘೋಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ದೆಹಲಿಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಆಡಳಿತದಲ್ಲಿ ಭ್ರಷ್ಟಾಚಾರ ನಿರ್ಮೂಲನೆಯಾಗಿದೆ. ಅದೇ ಮಾದರಿಯಲ್ಲಿ ರಾಜ್ಯದಲ್ಲೂ ಪಾರದರ್ಶಕತೆ ತರುವುದು ನಮ್ಮ ಗುರಿ’ ಎಂದು ಆಮ್‌ ಆದ್ಮಿ ಪಕ್ಷ ತಿಳಿಸಿದೆ. 

ಪಕ್ಷದ ರಾಜ್ಯ ವೀಕ್ಷಕ ರೋಮಿ ಭಾಟಿ ಅವರು ಬಿಬಿಎಂಪಿ ಚುನಾವಣಾ ಪೂರ್ವಭಾವಿ ಸಭೆಯನ್ನು ಭಾನುವಾರ ನಡೆಸಿದರು.

‘ಆರು ವರ್ಷಗಳ ಹಿಂದೆ ದೆಹಲಿಯಲ್ಲಿ ಅಧಿಕಾರಕ್ಕೆ ಬಂದ ನಮ್ಮ ಪಕ್ಷ ಆರೋಗ್ಯ ಮೂಲಸೌಕರ್ಯ, ಶಿಕ್ಷಣ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆಯನ್ನು ತಂದಿದೆ. ಆಡಳಿತದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡಿದೆ. ತೆರಿಗೆ ವ್ಯವಸ್ಥೆಯನ್ನು ಸರಳಗೊಳಿಸಿ, ಆದಾಯ ಸೋರಿಕೆ ತಡೆದಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಆದಾಯ ಸರಾಗವಾಗಿ ಹರಿದುಬರುತ್ತಿದೆ’ ಎಂದು ರೋಮಿ ಭಾಟಿ ತಿಳಿಸಿದರು. 

‘ದೆಹಲಿ ಮಾದರಿಯನ್ನು ಮುಂದಿಟ್ಟುಕೊಂಡು ಬಿಬಿಎಂಪಿ ಚುನಾವಣೆ ಎದುರಿಸುತ್ತೇವೆ. ಸ್ಥಳೀಯ ಸಮಸ್ಯೆಗಳು ಮತ್ತು ಅವುಗಳಿಗೆ ಪರಿಹಾರವನ್ನು ಸೂಚಿಸುವಂತಹ ಕಾರ್ಯಸೂಚಿಯನ್ನು ಸಿದ್ಧಪಡಿಸಿ, ಮತದಾರರ ಬಳಿಗೆ ಹೋಗುವಂತೆ ನಮ್ಮ ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ಸೂಚಿಸಿದ್ದೇವೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ  ಎಲ್ಲ ಕ್ಷೇತ್ರಗಳಲ್ಲಿಯೂ ಪಕ್ಷ ಸ್ಪರ್ಧಿಸಲಿದೆ’ ಎಂದರು. 

ಪಕ್ಷದ ಬೆಂಗಳೂರು ನಗರ ಘಟಕದ ಅಧ್ಯಕ್ಷ ಮೋಹನ್ ದಾಸರಿ, ‘ಬಿಬಿಎಂಪಿ ಚುನಾವಣೆ ಜೊತೆಗೆ ವಿಧಾನಸಭಾ ಚುನಾವಣೆಗಳಿಗೂ ಕಾರ್ಯತಂತ್ರ ರೂಪಿಸುತ್ತಿದ್ದೇವೆ. ಪಕ್ಷವನ್ನು ಬೆಂಬಲಿಸುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು