ಬೆಂಗಳೂರು: ಯೂನಿವರ್ಸಿಟಿ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು (ಯುವಿಸಿಇ) ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತ ಸಮುದಾಯಗಳ ವಿದ್ಯಾರ್ಥಿಗಳಿಗೆ ತಕ್ಷಣವೇ ಎಸ್‌ಎಸ್‌ಪಿ ವಿದ್ಯಾರ್ಥಿ ವೇತನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈ
ಸೇಷನ್ (ಎಐಡಿಎಸ್‌ಒ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಶುಕ್ರವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.
‘ಎರಡು ಮತ್ತು ಮೂರನೇ ವರ್ಷದ ವಿದ್ಯಾರ್ಥಿಗಳ ಪರೀಕ್ಷೆಗಳು ಮುಗಿದು ಐದು ತಿಂಗಳಾಯಿತು. ರಾಜ್ಯ ಸರ್ಕಾರ ಇಲ್ಲಿವರೆಗೂ ವಿದ್ಯಾರ್ಥಿ ವೇತನವನ್ನು ನೀಡಿಲ್ಲ. ಇದರಿಂದ ನೂರಾರು ಬಡ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ’ ಎಂದು ಪ್ರತಿಭಟನೆನಿರತ ವಿದ್ಯಾರ್ಥಿಗಳು ಆರೋಪ ಮಾಡಿದರು.
‘ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಇನ್ನೂ ವೆಬ್‌ಪೋರ್ಟಲ್‌ನಲ್ಲಿ ಪ್ರಕಟವಾಗಿಲ್ಲ. ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಸಲ್ಲಿಸುವ ಮುನ್ನವೇ ಪೋರ್ಟಲ್ ಸ್ಥಗಿತಗೊಳಿಸಲಾಗಿದೆ. ಈ ಸಮಸ್ಯೆಯನ್ನು ಸರಿಪಡಿಸಿ, ಕೂಡಲೇ ವಿದ್ಯಾರ್ಥಿ ವೇತನ ಬಿಡುಗಡೆಗೆ ವ್ಯವಸ್ಥೆ ಮಾಡಬೇಕು’ ಎಂದು ಆಗ್ರಹಿಸಿದರು.
ಪ್ರತಿಭಟನೆಯ ನಂತರ, ಸಂಘಟನೆ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಎಐಡಿಎಸ್‌ಒ ರಾಜ್ಯ ಘಟಕದ ಉಪಾಧ್ಯಕ್ಷ ಅಭಯ್ ದಿವಾಕರ್, ಜಿಲ್ಲಾ ಘಟಕದ ಅಧಕ್ಷೆ ಅಪೂರ್ವ, ಕಾರ್ಯದರ್ಶಿ ಕಲ್ಯಾಣ್, ಸದಸ್ಯರಾದ ಕಿರಣ್, ಮೇಘನಾ, ನವಾಜ್, ಯಶ್ವಂತ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.