ಸೋಮವಾರ, 25 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೇವೆ ಕಾಯಂಗೆ ಅತಿಥಿ ಉಪನ್ಯಾಸಕರ ಆಗ್ರಹ

Published 5 ಸೆಪ್ಟೆಂಬರ್ 2023, 16:22 IST
Last Updated 5 ಸೆಪ್ಟೆಂಬರ್ 2023, 16:22 IST
ಅಕ್ಷರ ಗಾತ್ರ

ಬೆಂಗಳೂರು: ಅತಿಥಿ ಉಪನ್ಯಾಸಕರ ಸೇವೆ ಕಾಯಂ ಮಾಡುವುದೂ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ, ರಾಜ್ಯ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಕ್ಕುಗಳ ಹೋರಾಟ ಸಮಿತಿ ನೇತೃತ್ವದಲ್ಲಿ ಅತಿಥಿ ಉಪನ್ಯಾಸಕರು ಮಂಗಳವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟಿಸಿದರು.

‘ರಾಜ್ಯದ 436 ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅನೇಕ ವರ್ಷಗಳಿಂದ ಸಾವಿರಾರು ಮಂದಿ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದೇವೆ. ಎಲ್ಲರೂ ಒಂದೇ ವೃತ್ತಿ ನಂಬಿ ಜೀವನ ನಡೆಸುತ್ತಿದ್ದೇವೆ. ಸೇವೆ ಕಾಯಂ ಮಾಡಿದರೆ ನ್ಯಾಯ ಸಿಕ್ಕಂತೆ ಆಗಲಿದೆ’ ಎಂದು ಪ್ರತಿಭಟನಕಾರರು ಕೋರಿದರು.

ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಲು ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಬೇಕು ಎಂದು ಸಂಘದ ಅಧ್ಯಕ್ಷ ಎಂ.ಬಿ.ನೂರ್‌ ಅಹಮದ್‌ ಕೋರಿದರು.

‘12 ತಿಂಗಳೂ ವೇತನ ನೀಡಬೇಕು. ಅಲ್ಲದೇ ತಿಂಗಳಿಗೆ ಒಂದು ರಜಾ ಸೌಲಭ್ಯವನ್ನು ಕಡ್ಡಾಯವಾಗಿ ನೀಡಬೇಕು’ ಎಂದು ಆಗ್ರಹಿಸಿದರು.

‘ನೇಮಕಾತಿ ಆದೇಶದಲ್ಲಿ ಅತಿಥಿ ಉಪನ್ಯಾಸಕರ ಶೋಷಣೆಗೆ ಕಾರಣವಾಗಿರುವ ಷರತ್ತುಗಳನ್ನು ತೆಗೆದು ಹಾಕಬೇಕು. ಪದೇ ಪದೇ ದಾಖಲೆಗಳನ್ನು ಪರಿಶೀಲಿಸದೆ ಶಾಶ್ವತವಾಗಿ ಒಮ್ಮೆ ದಾಖಲಾತಿಗಳ ನೈಜತೆ ಪರಿಶೀಲನೆ ನಡೆಸಬೇಕು’ ಎಂದು ಆಗ್ರಹಿಸಿದರು.

ಮಹಿಳಾ ಉಪನ್ಯಾಸಕರಿಗೆ ವೇತನ ಸಹಿತ ಪ್ರಸೂತಿ ರಜೆ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕಾರ್ಯಾಧ್ಯಕ್ಷ ಆರ್‌. ಶಂಕ್ರಾನಾಯ್ಕ ನೆಲ್ಲಿಹಂಕಲು, ಮಹಿಳಾ ಅಧ್ಯಕ್ಷೆ ಶರಣಮ್ಮ ಪಾಟೀಲ್‌, ಮಾಧ್ಯಮ ವಕ್ತಾರ ಮುನಿಯಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT