ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಧರ್ಮಾದಾಯ ದತ್ತಿಗಳ ತಿದ್ದುಪಡಿ ಮಸೂದೆ ರದ್ದುಗೊಳಿಸಲು ರಾಜ್ಯಪಾಲರಿಗೆ ಮನವಿ

Published 6 ಮಾರ್ಚ್ 2024, 19:33 IST
Last Updated 6 ಮಾರ್ಚ್ 2024, 19:33 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ(ತಿದ್ದುಪಡಿ) ಮಸೂದೆ–2024 ಅನ್ನು ರದ್ದುಗೊಳಿಸಬೇಕು ಎಂದು ಕರ್ನಾಟಕ ದೇವಸ್ಥಾನಗಳ ಮಹಾಸಂಘವು ರಾಜ್ಯಪಾಲರಿಗೆ ಮನವಿ ಮಾಡಿದೆ.

‘ಈ ತಿದ್ದುಪಡಿಯಲ್ಲಿ ಹಲವಾರು ದೋಷಗಳಿದ್ದು, ದೇವಸ್ಥಾನಗಳ ಪರಂಪರೆಯ ರಕ್ಷಣೆಯ ದೃಷ್ಟಿಯಿಂದ ಅಪಾಯಕಾರಿಯಾಗಿವೆ. ಜಿಲ್ಲೆ ಮತ್ತು ರಾಜ್ಯ ಮಟ್ಟದ ಉನ್ನತ ಸಮಿತಿಗಳನ್ನು ರಚನೆ ಮಾಡಲಾಗುತ್ತದೆ. ಅದರಲ್ಲಿ ಸ್ಥಳೀಯ ಶಾಸಕರು, ಸಂಸದರು ಸೇರಿ ವಿವಿಧ ಇಲಾಖೆಗಳ ಕಾರ್ಯದರ್ಶಿಗಳನ್ನು ಸಮಿತಿ ಸದಸ್ಯರನ್ನಾಗಿ ಮಾಡಲಾಗಿದೆ. ಇದರಲ್ಲಿ ಹಿಂದೂಗಳಲ್ಲದವರು ಇರುವ ಸಾಧ್ಯತೆ ಇದೆ‘ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಸಾಮಾನ್ಯ ಸಂಗ್ರಹಣ ನಿಧಿಯನ್ನು ಇತರ ಯಾವುದೇ ಧಾರ್ಮಿಕ ಸಂಸ್ಥೆಗಳಿಗೆ ನೀಡುವ ಬಗ್ಗೆ ಉಲ್ಲೇಖಿಸಲಾಗಿದೆ. ಇದು ಮುಂದಿನ ದಿನಗಳಲ್ಲಿ ಅನ್ಯಮತೀಯರಿಗು ಸಹ ಅನ್ವಯ ಮಾಡಲಾಗುವ ಸಾಧ್ಯತೆಗಳಿವೆ. ಅಧಿಕ ಆದಾಯ ಇರುವ ದೇವಸ್ಥಾನಗಳಿಂದ ಶೇ 10 ಮತ್ತು ಶೇ 5ರಷ್ಟನ್ನು ಸಾಮಾನ್ಯ ಸಂಗ್ರಹಣ ನಿಧಿಗೆ ವರ್ಗಾಯಿಸುವುದು ದೇವಸ್ಥಾನಗಳನ್ನು ದೋಚುವ ಕಾರ್ಯವಾಗಲಿದೆ. ಸಂಯೋಜಿತ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಯ ರಚನೆ ಸಂದರ್ಭದಲ್ಲಿಯೂ ಹಿಂದೂಗಳಲ್ಲದವರನ್ನು ನೇಮಕ ಮಾಡುವ ಬಗ್ಗೆ ಉಲ್ಲೇಖ ಮಾಡಲಾಗಿದೆ. ಇದು ಅಪಾಯಕಾರಿ’ ಎಂದು ಮನವಿಯಲ್ಲಿ ವಿವರಿಸಲಾಗಿದೆ.

ನೆಲಮಂಗಲ ತಹಶೀಲ್ದಾರ್‌ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಹಿಂದೂ ಜನಜಾಗೃತಿ ಸಮಿತಿಯ ಬೆಂಗಳೂರು ಜಿಲ್ಲಾ ಸಮನ್ವಯಕಾರ ಶರತ್ ಕುಮಾರ್, ವಿವಿಧ ದೇವಸ್ಥಾನಗಳ ಟ್ರಸ್ಟಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT