ಬೆಂಗಳೂರು: ‘ಅರಣ್ಯ ಹಕ್ಕು ಕಾಯ್ದೆಯಡಿ ವಾಸ್ತವ್ಯ ಹಾಗೂ ಸಾಗುವಳಿ ಮಂಜೂರಿಗಾಗಿ ಸಲ್ಲಿಸಿದ್ದ 89,167 ಅರ್ಜಿಗಳ ಪೈಕಿ 69,733 ಅರ್ಜಿಗಳು ತಿರಸ್ಕೃತಗೊಂಡಿದ್ದು, ಇದಕ್ಕೆ ರಾಜ್ಯ ಸರ್ಕಾರದ ವೈಫಲ್ಯ ಕಾರಣ’ ಎಂದು ಆರೋಪಿಸಿ ಅರಣ್ಯ ವಾಸಿಗಳು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಸ್ವಾತಂತ್ರ್ಯ ಉದ್ಯಾನದಲ್ಲಿ ಸೇರಿದ್ದ ಉತ್ತರ ಕನ್ನಡ ಜಿಲ್ಲೆಯ ಅರಣ್ಯವಾಸಿಗಳು, ಬೇಡಿಕೆ ಈಡೇರಿಕೆಗಾಗಿ ಘೋಷಣಾ ಫಲಕ ಪ್ರದರ್ಶಿಸಿದರು. ಕಾಂಗ್ರೆಸ್ ನಾಯಕಿ ಮಾರ್ಗರೇಟ್ ಆಳ್ವ ಪ್ರತಿಭಟನೆಗೆ ಬೆಂಬಲ ನೀಡಿದರು.
‘ಅರಣ್ಯ ಪ್ರದೇಶ ಹಾಗೂ ಅರಣ್ಯ ಅವಲಂಬಿತ ವಾಸಿಗಳ ಸಂಖ್ಯೆಯಲ್ಲಿ ಕರ್ನಾಟಕ 5ನೇ ಸ್ಥಾನದಲ್ಲಿದೆ. ಅರಣ್ಯ ಹಕ್ಕು ಕಾಯ್ದೆ ಪ್ರಗತಿಯಲ್ಲಿ ಮಾತ್ರ 16ನೇ ಸ್ಥಾನದಲ್ಲಿರುವುದು ವಿಷಾದನೀಯ. ಸರ್ಕಾರದ ನಿರ್ಲಕ್ಷ್ಯದಿಂದ ಅರಣ್ಯವಾಸಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ’ ಎಂದು ಪ್ರತಿಭಟನಕಾರರು ಅಳಲು ತೋಡಿಕೊಂಡರು.
‘ಅರಣ್ಯ ಹಕ್ಕು ಕಾಯ್ದೆ ಜಾರಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಅರಣ್ಯ ವಾಸಿಗಳ ಪರ ಸುಪ್ರೀಂಕೋರ್ಟ್‌ಗೆ ತಿದ್ದುಪಡಿ ಪ್ರಮಾಣಪತ್ರ ಸಲ್ಲಿಸಬೇಕು. ಸಾಂದರ್ಭಿಕ ದಾಖಲೆಗಳ ಆಧಾರದಲ್ಲಿ ಮಂಜೂರಾತಿ ನೀಡಬೇಕು’ ಎಂದು ಆಗ್ರಹಿಸಿದರು.
‘ಅರಣ್ಯ ವಾಸಿಗಳ ಮೇಲಿನ ದೌರ್ಜನ್ಯ ನಿಲ್ಲಬೇಕು. ಕಿರುಕುಳ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಅರಣ್ಯವಾಸಿಗಳಿಗೆ ವಿಮೆ ಹಾಗೂ ಬೆಳೆ ಸಾಲ ನೀಡಬೇಕು. ಅತಿಕ್ರಮಣ ಮಂಜೂರಿಗೆ ಅರ್ಹರಿರುವ 2,513 ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಬೇಕು. ಅರಣ್ಯವಾಸಿಗಳ ಒಕ್ಕಲೆಬ್ಬಿಸುವುದನ್ನು ನಿಲ್ಲಿಸಬೇಕು. ಅರಣ್ಯವಾಸಿಗಳ ಮೇಲೆ ದಾಖಲಿಸಿರುವ ಕ್ರಿಮಿನಲ್ ಪ್ರಕರಣ ಹಿಂಪಡೆಯಬೇಕು’ ಎಂದು ಒತ್ತಾಯಿಸಿದರು.
ವಿಶೇಷ ತನಿಖೆಗೆ ಒತ್ತಾಯ: ‘ಕಾಮಗಾರಿ ನೆಪದಲ್ಲಿ 5 ವರ್ಷಗಳಲ್ಲಿ ಲಕ್ಷಕ್ಕೂ ಹೆಚ್ಚು ಮರಗಳನ್ನು ಕಡಿಯಲಾಗಿದ್ದು, ಈ ಬಗ್ಗೆ ವಿಶೇಷ ತನಿಖೆ ನಡೆಸಬೇಕು. ಶಿವಮೊಗ್ಗ ಶರಾವತಿ ವನ್ಯಜೀವಿ ಅಭಯಾರಣ್ಯಕ್ಕೆ 20,000 ಹೆಕ್ಟೆರ್ ಹೆಚ್ಚುವರಿ ಅರಣ್ಯ ಪ್ರದೇಶ ಸೇರಿಸಲಾಗಿದ್ದು, ಈ ಆದೇಶವನ್ನು ಹಿಂಪಡೆಯಬೇಕು’ ಎಂದು ಪ್ರತಿಭಟನಕಾರರು ಒತ್ತಾಯಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.