ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಲಿಂಗತ್ವ ಅಲ್ಪಸಂಖ್ಯಾತರಿಗಾಗಿ ಮಂಡಳಿ ಸ್ಥಾಪಿಸಲು ಆಗ್ರಹ

Published 2 ಜುಲೈ 2024, 16:36 IST
Last Updated 2 ಜುಲೈ 2024, 16:36 IST
ಅಕ್ಷರ ಗಾತ್ರ

ಬೆಂಗಳೂರು: ಲಿಂಗತ್ವ ಅಲ್ಪಸಂಖ್ಯಾತರ ಅಭಿವೃದ್ಧಿ ಮಂಡಳಿ ಸ್ಥಾಪಿಸಿ ವಾರ್ಷಿಕ ₹200 ಕೋಟಿ ಅನುದಾನ ಒದಗಿಸಬೇಕು ಎಂದು ಸಾಮಾಜಿಕ ನ್ಯಾಯಕ್ಕಾಗಿ ಲಿಂಗತ್ವ ಮತ್ತು ಲೈಂಗಿಕತೆ ಅಲ್ಪಸಂಖ್ಯಾತರ ಮೈತ್ರಿಕೂಟ ಆಗ್ರಹಿಸಿದೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೈತ್ರಿಕೂಟದ ಸದಸ್ಯರಾದ ರೂಮಿ ಹರೀಶ್, ಸವಿತಾ, ಉಮಾ, ಸನಾ ಸುಮನ್, ‘ಲಿಂಗತ್ವ ಅಲ್ಪಸಂಖ್ಯಾತ ಸಮುದಾಯಕ್ಕೆ ಸಾಮಾಜಿಕ, ಆರ್ಥಿಕ, ರಾಜಕೀಯ, ಶೈಕ್ಷಣಿಕ ಅಭಿವೃದ್ಧಿಗೆ ಸಂವಿಧಾನದ ಅಡಿಯಲ್ಲಿ ನೀಡಿರುವ ಆಶೋತ್ತರಗಳನ್ನು ಈಡೇರಿಸಲು ಮಂಡಳಿ ಸ್ಥಾಪಿಸಬೇಕು’ ಎಂದು ಒತ್ತಾಯಿಸಿದರು.

‘ಕೇಂದ್ರ ಸರ್ಕಾರವು ಏಪ್ರಿಲ್‌ 15 ಅನ್ನು ರಾಷ್ಟ್ರೀಯ ಲಿಂಗತ್ವ ಅಲ್ಪಸಂಖ್ಯಾತರ ದಿನವೆಂದು ಘೋಷಿಸಬೇಕು. ರಾಜ್ಯ ಸರ್ಕಾರ ನೀಡಿರುವ ಐದು ಗ್ಯಾರಂಟಿಗಳ ಅನುಕೂಲವು ಲಿಂಗತ್ವ ಅಲ್ಪಸಂಖ್ಯಾತರಿಗೂ ಸಿಗುವಂತೆ ಕ್ರಮ ಕೈಗೊಳ್ಳಬೇಕು. ಜೊತೆಗೆ ಲಿಂಗತ್ವ ಅಲ್ಪಸಂಖ್ಯಾತರ ನೀತಿ–2017 ಅನುಷ್ಠಾನಗೊಳಿಸಬೇಕು. ಈ ಸಮುದಾಯದ ಜನಗಣತಿ ನಡೆಸಬೇಕು. ಲಿಂಗತ್ವ ಅಲ್ಪಸಂಖ್ಯಾತರಿಗೆ ಗುರುತಿನ ಚೀಟಿ ನೀಡಬೇಕು’ ಎಂದು ಆಗ್ರಹಿಸಿದರು.

‘ಜೀವ, ಜನಸೇವಾ ಸಮಿತಿ, ಕರ್ನಾಟಕ ಮಂಗಳಮುಖಿಯರ ಸಂಘ, ಒಂದೆಡೆ, ಪಯಣ, ಪರಿವರ್ತನ ಟ್ರಸ್ಟ್‌ನ ಸಹಭಾಗಿತ್ವದಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಲಿಂಗತ್ವ ಮತ್ತು ಅಲ್ಪಸಂಖ್ಯಾತರ ಮೈತ್ರಿಕೂಟವನ್ನು ಸ್ಥಾಪಿಸಲಾಗಿದೆ. ಈ ಮೈತ್ರಿಕೂಟವು ರಾಜ್ಯದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ಹಾಗೂ ತಾರತಮ್ಯ ನೀತಿಯ ವಿರುದ್ಧ ಹೋರಾಡಲಿದೆ. ಸಾಮಾಜಿಕ ನ್ಯಾಯ ದೊರಕಿಸಿ ಕೊಡುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT