ಬೆಂಗಳೂರು: ‘ರಾಜ್ಯದಲ್ಲಿ ಡೆಂಗಿ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಹಾಯಕರು ಹಾಗೂ ಆಶಾ ಕಾರ್ಯಕರ್ತೆಯರು ಈಡಿಸ್ ಲಾರ್ವಾ ಸಮೀಕ್ಷೆಯ ಜತೆಗೆ ಜ್ವರ ಸಮೀಕ್ಷೆಯನ್ನೂ ನಡೆಸುತ್ತಿದ್ದಾರೆ’ ಎಂದು ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್ ತಿಳಿಸಿದ್ದಾರೆ.
ಈ ಅವಧಿಯಲ್ಲಿ ಡೆಂಗಿ ಪ್ರಕರಣಗಳ ಏರಿಕೆಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ಅವರು, ‘ಮುಂಗಾರು ಪೂರ್ವ, ಮುಂಗಾರು ಹಾಗೂ ನಂತರದ ದಿನಗಳಲ್ಲಿ ಘನತ್ಯಾಜ್ಯ ವಸ್ತುಗಳಲ್ಲಿ ಮಳೆ ನೀರು ಸಂಗ್ರಹವಾಗಿ, ಈಡಿಸ್ ಸೊಳ್ಳೆಗಳ ಉತ್ಪತ್ತಿ ತಾಣಗಳು ಹೆಚ್ಚಳವಾಗುವ ಸಾಧ್ಯತೆ ಇರುತ್ತವೆ. ಆದ್ದರಿಂದ ಈ ಅವಧಿಯಲ್ಲಿ ಡೆಂಗಿ ಹಾಗೂ ಚಿಕೂನ್‌ಗುನ್ಯಾ ಪ್ರಕರಣಗಳ ಹೆಚ್ಚಳ ಸಾಮಾನ್ಯವಾಗಿದೆ. ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಸೊಳ್ಳೆ ಉತ್ಪತ್ತಿ ತಾಣಗಳ ನಾಶ, ಆರೋಗ್ಯ ಶಿಕ್ಷಣ ಸೇರಿ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಹೇಳಿದ್ದಾರೆ.
15 ದಿನಗಳಿಗೊಮ್ಮೆ ಸಭೆ: ‘ಜಿಲ್ಲೆಗಳಲ್ಲಿ ಡೆಂಗಿ ಪರಿಸ್ಥಿತಿಯನ್ನು ಪರಿಶೀಲಿಸಿ, ಅಗತ್ಯ ಸಲಹೆ ಸೂಚನೆಗಳನ್ನು ನೀಡಲು ಪ್ರತಿ 15 ದಿನಗಳಿಗೊಮ್ಮೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗುತ್ತಿದೆ. ಅಕ್ಟೋಬರ್ ಅಂತ್ಯದವರೆಗೂ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ, ಡೆಂಗಿ ನಿಯಂತ್ರಣ ಕ್ರಮಗಳ ಪರಿಶೀಲನೆಗೆ ಸೂಚನೆ ನೀಡಲಾಗಿದೆ’ ಎಂದು ಡಿ. ರಂದೀಪ್ ತಿಳಿಸಿದ್ದಾರೆ.
‘ಡೆಂಗಿ ಪ್ರಕರಣಗಳಿಗೆ ಆಸ್ಪತ್ರೆ ಹಾಗೂ ಕ್ಷೇತ್ರ ಮಟ್ಟದಲ್ಲಿ ಚಿಕಿತ್ಸೆ ಮತ್ತು ಔಷಧಗಳಿಗೆ ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ಮಟ್ಟದಲ್ಲಿ ಕ್ರಿಪ್ರ ಕಾರ್ಯಾಚರಣೆ ಪಡೆಯನ್ನು ಸನ್ನದ್ಧವಾಗಿರಿಸಲಾಗಿದ್ದು, ತುರ್ತು ಸಂದರ್ಭದಲ್ಲಿ ಸ್ಪಂದಿಸುವಂತೆ ಸೂಚಿಸಲಾಗಿದೆ’ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.