ಸೋಮವಾರ, 25 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಚ್ಚಿದ ಡೆಂಗಿ: ನಿಯಂತ್ರಣಕ್ಕೆ ಸೂಚನೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ತಿಂಗಳಲ್ಲೇ 416 ಮಂದಿಗೆ ಸೋಂಕು; ಮುನ್ಸೂಚನಾ ತಂತ್ರಾಂಶ ಅನಾವರಣ
Published 8 ಸೆಪ್ಟೆಂಬರ್ 2023, 2:58 IST
Last Updated 8 ಸೆಪ್ಟೆಂಬರ್ 2023, 2:58 IST
ಅಕ್ಷರ ಗಾತ್ರ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅದನ್ನು ನಿಯಂತ್ರಿಸಲು ಎಲ್ಲ ರೀತಿಯ ಕ್ರಮಗಳನ್ನೂ ಕೂಡಲೇ ಕೈಗೊಳ್ಳಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಸೂಚಿಸಿದರು.

ಡೆಂಗಿ ಮತ್ತು ಆರೋಗ್ಯ ವಿಷಯಕ್ಕೆ ಸಂಬಂಧಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ಅವರು ಹೆಚ್ಚಿನ ಕಾಳಜಿ ವಹಿಸಿ ಕ್ರಮಗಳನ್ನು ಕೈಗೊಳ್ಳಬೇಕು. ಔಷಧಿ ಸಿಂಪಡಣೆ ಹಾಗೂ ಜಾಗೃತಿ ಕಾರ್ಯಕ್ರಮ ನಡೆಸಬೇಕು ಎಂದರು.

ನಗರದಲ್ಲಿ ಎರಡು ತಿಂಗಳಿಂದ ಹೆಚ್ಚು ಡೆಂಗಿ ಪ್ರಕರಣಗಳು ದಾಖಲಾಗಿವೆ. ಜುಲೈನಲ್ಲಿ 1,649, ಆಗಸ್ಟ್‌ನಲ್ಲಿ 1,589, ಸೆಪ್ಟೆಂಬರ್‌ನಲ್ಲಿ 416 ಪ್ರಕರಣಗಳು ಪತ್ತೆಯಾಗಿವೆ. ಮಳೆ ನೀರು ನಿಂತಿರುವ ಕಾರಣ ಸೊಳ್ಳೆಗಳ ಲಾರ್ವಾ ಉತ್ಪತ್ತಿಯಾಗಿ
ಹೆಚ್ಚು ಪ್ರಕರಣಗಳು ಕಂಡುಬರುತ್ತಿವೆ ಎಂದು ಹೇಳಿದರು.

ಪಾಲಿಕೆ ವ್ಯಾಪ್ತಿಯಲ್ಲಿ 6 ಹೈಟೆಕ್ ಲ್ಯಾಬ್‌ಗಳಿವೆ. ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ನಮ್ಮ ಕ್ಲಿನಿಕ್‌ಗಳಲ್ಲಿ ಸಂಗ್ರಹ ಮಾಡಿ ರಕ್ತದ ಮಾದರಿಗಳನ್ನು ಪ್ರಯೋಗಾಲಯಕ್ಕೆ ರವಾನಿಸುವ (ಹಬ್ ಆ್ಯಂಡ್ ಸ್ಪೋಕ್ ಮಾಡಲ್) ವ್ಯವಸ್ಥೆ ಅಗತ್ಯವಿದೆ. ಈ ಸೌಲಭ್ಯಗಳಿಗೆ ಅನುದಾನದ ಅಗತ್ಯವಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪಾಲಿಕೆ ಸಹಯೋಗದೊಂದಿಗೆ ಎನ್.ಎಚ್.ಎಂ ಅನುದಾನದಿಂದ ಒದಗಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಡೆಂಗಿ ಮುನ್ಸೂಚನಾ ತಂತ್ರಾಂಶ ಅನಾವರಣ: ಡೆಂಗಿ ಪ್ರಕರಣಗಳನ್ನು ಒಂದು ತಿಂಗಳ ಮುಂಚಿತವಾಗಿಯೇ ತಿಳಿಯುವ ಉದ್ದೇಶದಿಂದ ಭಾರತೀಯ ವಿಜ್ಞಾನ ಸಂಸ್ಥೆಯಿಂದ ಒಂದು ತಂತ್ರಾಂಶವನ್ನು ಅಭಿವೃದ್ಧಿಪಡಿಸಿದೆ. ಇದರಿಂದ ಮುಂಚಿತವಾಗಿಯೇ ಮಾಹಿತಿ ಲಭ್ಯವಾಗಲಿದ್ದು, ಸೊಳ್ಳೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಂಡು ಡೆಂಗಿ ಪ್ರಕರಣಗಳ ನಿಯಂತ್ರಣಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ನಮ್ಮ ಕ್ಲಿನಿಕ್ ಸೇವೆ: ಬಿಬಿಎಂಪಿ ವ್ಯಾಪ್ತಿಯಲ್ಲಿ 50 ‘ನಮ್ಮ ಕ್ಲಿನಿಕ್’ಗಳು ಬೆಳಿಗ್ಗೆ 8ರಿಂದ ರಾತ್ರಿ 8ರವರೆಗೆ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ. ಬೆಳಗ್ಗೆ 8 ರಿಂದ ಸಂಜೆ 4ರವರೆಗೆ ಲ್ಯಾಬ್ ಟೆಕ್ನಿಷಿಯನ್‌ಗಳು ಹಾಗೂ ಮಧ್ಯಾಹ್ನ 12ರಿಂದ ರಾತ್ರಿ 8ರವರೆಗೆ ವೈದ್ಯರು, ನರ್ಸ್‌ಗಳಿರುವಂತೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಾದ ಡಿ. ರಂದೀಪ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌, ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಡಾ. ತ್ರಿಲೋಕ್ ಚಂದ್ರ, ಎನ್.ಎಚ್.ಎಂ ಅಭಿಯಾನ ವೀಕ್ಷಕರಾದ ನವೀನ್ ಭಟ್ ಇದ್ದರು.

ಬಿಬಿಎಂಪಿ ಪ್ರತ್ಯೇಕ ಆರೋಗ್ಯ ಜಿಲ್ಲೆ!

ನಗರದಲ್ಲಿ ಎಲ್ಲಾ ಆರೋಗ್ಯ ಸೇವೆಗಳನ್ನು ಸಮನಾಂತರವಾಗಿ ತರುವ ಉದ್ದೇಶದಿಂದ ಬಿಬಿಎಂಪಿಯನ್ನು ಪ್ರತ್ಯೇಕ ಜಿಲ್ಲೆ ಎಂದು ಪರಿಗಣಿಸಲು ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ಉನ್ನತ ಮಟ್ಟದಲ್ಲಿ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ಬಿಬಿಎಂಪಿ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ‘ನಮ್ಮ ಕ್ಲಿನಿಕ್’ಗಳನ್ನು ಮಹಾನಗರ ಪಾಲಿಕೆ ನಿರ್ವಹಿಸುತ್ತಿದೆ. ಆದರೆ‌ ಹಲವು ಆರೋಗ್ಯ ಸೇವೆಗಳನ್ನು ಒದಗಿಸಲು ಪಾಲಿಕೆಗೆ ಸಾಧ್ಯವಿಲ್ಲ. ಹೀಗಾಗಿ ಆಡಳಿತಾತ್ಮಕ ದೃಷ್ಟಿಯಿಂದ ಬೆಂಗಳೂರಿಗೆ ಪ್ರತ್ಯೇಕ ಆರೋಗ್ಯ ವಿಭಾಗ ಅಥವಾ ಕಮಿಷನರೇಟ್ ರಚಿಸಲಾಗುತ್ತದೆ ಎಂದರು.

ಆರೋಗ್ಯ ನಿರೀಕ್ಷಣಾ ಅಧಿಕಾರಿಗಳು, ಕಿರಿಯ ಆರೋಗ್ಯ ಮಹಿಳಾ ಸಹಾಯಕಿಯರ ಸಂಖ್ಯೆಯನ್ನು ಹೆಚ್ಚಿಸಬೇಕಿದೆ. ಅಲ್ಲದೆ, ಅವರ ವೇತನವನ್ನು ಕೂಡಾ ಕಾರ್ಮಿಕ ಇಲಾಖೆ ಕಾಯ್ದೆಯಂತೆ ಕನಿಷ್ಠ ವೇತನ
ಹೆಚ್ಚಳ ಮಾಡಬೇಕಿದ್ದು, ಅದಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT