ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಾಹ್ನದ ಬಿಸಿಯೂಟ ಯೋಜನೆ ಪರಿಷ್ಕೃತ ಪ್ರಮಾಣಪತ್ರಕ್ಕೆ ನಿರ್ದೇಶನ

Last Updated 18 ನವೆಂಬರ್ 2020, 20:57 IST
ಅಕ್ಷರ ಗಾತ್ರ

ಬೆಂಗಳೂರು: ಶಾಲಾ ಮಕ್ಕಳ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಪುನರಾರಂಭಕ್ಕೆ ಯಾವ ರೀತಿಯ ಸಿದ್ಧತೆ ಮಾಡಲಾಗಿದೆ ಮತ್ತು ಆರು ತಿಂಗಳ ಅವಧಿಯಲ್ಲಿ ಯೋಜನೆ ಸ್ಥಗಿತಗೊಂಡಿದ್ದರಿಂದ ತೊಂದರೆಗೊಳಗಾದ ಫಲಾನುಭವಿಗಳಿಗೆ ಹೇಗೆ ಪರಿಹಾರ ನೀಡಲಾಗುವುದು ಎಂಬುದರ ಕುರಿತು ಪರಿಷ್ಕೃತ ಪ್ರಮಾಣಪತ್ರ ಸಲ್ಲಿಸುವಂತೆ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಬುಧವಾರ ನಿರ್ದೇಶನ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್‌ ಓಕಾ ಮತ್ತು ನ್ಯಾಯಮೂರ್ತಿ ಅರವಿಂದ ಕುಮಾರ್‌ ಅವರಿದ್ದ ವಿಭಾಗೀಯ ಪೀಠಕೋವಿಡ್‌–19ಗೆ ಸಂಬಂಧಿಸಿದ ಹಲವು ಸಾರ್ವಜನಿಕ ಅರ್ಜಿಗಳ ವಿಚಾರಣೆ ನಡೆಸಿತು. ಆ ಸಂದರ್ಭದಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯೂ ನಡೆಯಿತು.

ಯೋಜನೆಯ ಪುನರಾರಂಭ ಮತ್ತು ವಿದ್ಯಾರ್ಥಿಗಳಿಗೆ ಪರಿಹಾರ ನೀಡುವ ಕುರಿತು ಪ್ರಮಾಣಪತ್ರ ಸಲ್ಲಿಸುವಂತೆ ಹಿಂದಿನ ವಿಚಾರಣೆ ವೇಳೆ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಎನ್. ನಾಗಾಂಬಿಕಾ ದೇವಿ ಬುಧವಾರ ಪ್ರಮಾಣಪತ್ರ ಸಲ್ಲಿಸಿದರು.

‘ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ರಾಜ್ಯದಲ್ಲಿ 46.15 ಲಕ್ಷ ಮಕ್ಕಳಿಗೆ ಪೌಷ್ಟಿಕ ಆಹಾರ ವಿತರಿಸಲಾಗುತ್ತಿದೆ. 2020ರ ಅಕ್ಟೋಬರ್‌ ಅಂತ್ಯದವರೆಗೂ ಪೌಷ್ಟಿಕ ಆಹಾರ ವಿತರಿಸಲಾಗಿದೆ. ನವೆಂಬರ್‌ ತಿಂಗಳ ಆಹಾರ ವಿತರಣೆ ಪ್ರಗತಿಯಲ್ಲಿದೆ’ ಎಂದು ಪ್ರಮಾಣಪತ್ರದಲ್ಲಿ ತಿಳಿಸಿದರು.

ಯೋಜನೆ ಸ್ಥಗಿತಗೊಂಡಿರುವ ಅವಧಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಪರಿಹಾರವಾಗಿ ಆಹಾರ ಧಾನ್ಯವನ್ನು ಹೇಗೆ ವಿತರಿಸಲಾಗುತ್ತದೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು. ವಿದ್ಯಾರ್ಥಿಗಳಿಗೆ ತೊಗರಿ ಬೇಳೆಯನ್ನು ಪೂರೈಸಿ, ಅಡುಗೆ
ವೆಚ್ಚವನ್ನು ನೀಡದೇ ಇರುವುದು ಮಧ್ಯಾಹ್ನದ ಬಿಸಿಯೂಟ ಯೋಜನೆಯ ನಿಯಮಗಳ ಉಲ್ಲಂಘನೆಯಾಗುತ್ತದೆ. ಶಾಲಾ ತರಗತಿಗಳು ಇನ್ನೂ ಆರಂಭವಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಆಹಾರ ಧಾನ್ಯ ನೈಜ ಫಲಾನುಭವಿಯನ್ನು ತಲುಪಲು ಸಾಧ್ಯವೇ ಎಂಬ ಅನುಮಾನಗಳಿವೆ. ಈ ಎಲ್ಲ ಅಂಶಗಳ ಬಗ್ಗೆಯೂ ಸರ್ಕಾರ ಸ್ಪಷ್ಟವಾದ ವಿವರಣೆಯೊಂದಿಗೆ ಪ್ರಮಾಣಪತ್ರ ಸಲ್ಲಿಸಬೇಕು ಎಂದು ವಿಭಾಗೀಯ ಪೀಠ ನಿರ್ದೇಶನ ನೀಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT