ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ಜಿಲ್ಲೆಯಲ್ಲೂ ತಜ್ಞರ ಸಮಿತಿ-3ನೇ ಅಲೆ ಎದುರಿಸಲು ಆರೋಗ್ಯ ಇಲಾಖೆ ಕ್ರಮ

Last Updated 16 ಆಗಸ್ಟ್ 2021, 16:39 IST
ಅಕ್ಷರ ಗಾತ್ರ

ಬೆಂಗಳೂರು: ಸಂಭಾವ್ಯ ಕೋವಿಡ್‌ ಮೂರನೇ ಅಲೆ ಎದುರಿಸಲು ಸಲಹೆ, ಮಾರ್ಗದರ್ಶನ ನೀಡುವುದಕ್ಕಾಗಿ ಜಿಲ್ಲಾ ಮಟ್ಟದಲ್ಲಿ ತಾಂತ್ರಿಕ ತಜ್ಞರ ಸಮಿತಿಗಳನ್ನು ರಚಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.

ಕೋವಿಡ್‌ ಮೂರನೇ ಅಲೆಯು ಅಕ್ಟೋಬರ್‌– ನವೆಂಬರ್‌ ತಿಂಗಳ ಅವಧಿಯಲ್ಲಿ ಬರಬಹುದು ಎಂಬ ರಾಜ್ಯ ಮಟ್ಟದ ತಾಂತ್ರಿಕ ಸಲಹಾ ಸಮಿತಿಯ ಅಂದಾಜು ಆಧರಿಸಿ ಈ ಸಮಿತಿಗಳನ್ನು ರಚಿಸಲಾಗಿದೆ. ಈ ಸಮಿತಿಗಳು ನಿಯಮಿತವಾಗಿ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸಿ ಜಿಲ್ಲಾಡಳಿತಕ್ಕೆ ಸಲಹೆ ನೀಡಬೇಕು. ಸಮಿತಿಯ ನಡಾವಳಿಗಳ ಪ್ರತಿಯನ್ನು ಆರೋಗ್ಯ ಇಲಾಖೆಯ ಅಯುಕ್ತರ ಕಚೇರಿಗೆ ಸಲ್ಲಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್‌ ಅಖ್ತರ್‌ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ನೀಡಿರುವ ಆದೇಶದಲ್ಲಿ ತಿಳಿಸಿದ್ದಾರೆ.

ಜಿಲ್ಲಾ ಮಟ್ಟದ ತಾಂತ್ರಿಕ ತಜ್ಞರ ಸಮಿತಿಗಳಲ್ಲಿ ಸಾರ್ವಜನಿಕ ಆರೋಗ್ಯ ಅಥವಾ ಸಮುದಾಯ ಆರೋಗ್ಯ ಸೇವೆಯಲ್ಲಿ ಅನುಭವ ಹೊಂದಿರುವ ಹಿರಿಯ ತಜ್ಞ ವೈದ್ಯರು, ಹಿರಿಯ ಶ್ವಾಸಕೋಶ ತಜ್ಞರು, ಹಿರಿಯ ಫಿಜಿಷಿಯನ್‌ ಅಥವಾ ತೀವ್ರ ನಿಗಾ ಘಟಕದ ತಜ್ಞರು, ಹಿರಿಯ ಮಕ್ಕಳ ತಜ್ಞರು, ಹಿರಿಯ ಸ್ತ್ರೀರೋಗ ತಜ್ಞರು, ಹಿರಿಯ ವೈರಾಣು ತಜ್ಞರು, ವಿಶ್ವ ಆರೋಗ್ಯ ಸಂಸ್ಥೆಯ ಸರ್ವೇಕ್ಷಣಾ ಅಧಿಕಾರಿ, ಆಯುಷ್‌ ವಿಭಾಗದ ಹಿರಿಯ ಫಿಜಿಷಿಯನ್‌ ಸಮಿತಿಯ ಸದಸ್ಯರಾಗಿರುತ್ತಾರೆ. ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿದ್ದು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕರು ವಿಶೇಷ ಆಹ್ವಾನಿತರಾಗಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಸಮಿತಿಯು ನಿರಂತರವಾಗಿ ರಾಜ್ಯಮಟ್ಟದ ತಾಂತ್ರಿಕ ಸಲಹಾ ಸಮಿತಿಯ ಜತೆ ಸಮಾಲೋಚನೆ ನಡೆಸುತ್ತಿರಬೇಕು. ಆಯಾ ಜಿಲ್ಲೆಯ ಸ್ಥಿತಿಗತಿಯನ್ನು ಇತರ ಜಿಲ್ಲೆಗಳು, ರಾಜ್ಯ ಮತ್ತು ರಾಷ್ಟ್ರಮಟ್ಟದ ಪರಿಸ್ಥಿತಿ ಜತೆ ಹೋಲಿಕೆ ಮಾಡಿ ಪರಿಶೀಲಿಸಿ ವರದಿ ನೀಡಬೇಕು ಎಂದು ಸೂಚಿಸಲಾಗಿದೆ.

ಲಭ್ಯವಾಗುವ ಮಾಹಿತಿಯನ್ನು ಬಳಸಿಕೊಂಡು ಈ ಸಮಿತಿಗಳು, ಕೋವಿಡ್‌ ನಿಯಂತ್ರಿಸಲು ಜಿಲ್ಲಾಡಳಿತಗಳಿಗೆ ಸಹಕಾರ ನೀಡಬೇಕು ಎಂದು ನಿರ್ದೇಶನ ನೀಡಲಾಗಿದೆ.

ಏಳು ಜಿಲ್ಲೆಗಳಲ್ಲಿ ವಿಶೇಷ ಕ್ರಮಕ್ಕೆ ಸೂಚನೆ

ಕೋವಿಡ್‌ ಪ್ರಕರಣಗಳ ದೃಢಪ್ರಮಾಣ ದರ ಹೆಚ್ಚಿರುವ ಮತ್ತು ಮರಣ ಪ್ರಕರಣಗಳು ಜಾಸ್ತಿಯಾಗುತ್ತಿರುವ ಏಳು ಜಿಲ್ಲೆಗಳಲ್ಲಿ ಕೋವಿಡ್‌ ಪರೀಕ್ಷೆ ಹೆಚ್ಚಳ, ಲಸಿಕೆ ನೀಡುವುದನ್ನು ಹೆಚ್ಚಿಸುವುದು, ಹಾಸಿಗೆಗಳನ್ನು ಕಾಯ್ದಿರಿಸುವುದು ಸೇರಿದಂತೆ ವಿಶೇಷ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಕೆ.ವಿ. ತ್ರಿಲೋಕಚಂದ್ರ ಸೋಮವಾರ ಆದೇಶ ಹೊರಡಿಸಿದ್ದಾರೆ.

‘ದಕ್ಷಿಣ ಕನ್ನಡ, ಉಡುಪಿ, ಹಾಸನ, ಮೈಸೂರು, ಕೊಡಗು, ಚಿಕ್ಕಮಗಳೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಕೋವಿಡ್‌ ದೃಢಪ್ರಮಾಣ ದರ ಶೇಕಡ 3ರಿಂದ 4ರವರೆಗೂ ವರದಿಯಾಗುತ್ತಿದೆ. ಈ ಜಿಲ್ಲೆಗಳಲ್ಲಿ ಪ್ರತಿ ಸೋಂಕಿತರಿಗೆ ತಲಾ 20 ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು ಪತ್ತೆಹಚ್ಚಿ ಕೋವಿಡ್‌ ಪರೀಕ್ಷೆ ನಡೆಸಬೇಕು. ಲಸಿಕೆ ನೀಡುವುದನ್ನೂ ಹೆಚ್ಚಿಸಬೇಕು’ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಕೋವಿಡ್‌ ದೃಢಪ್ರಮಾಣ ದರ ಶೇ 2ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ ಪ್ರತಿದಿನ ಆಸ್ಪತ್ರೆಗಳಿಗೆ ದಾಖಲಾಗುತ್ತಿರುವವರ ಸಂಖ್ಯೆಯ ಆಧಾರದಲ್ಲಿ ಅಗತ್ಯ ಪ್ರಮಾಣದ ಸಾಮಾನ್ಯ ಹಾಸಿಗೆ, ಆಮ್ಲಜನಕ ಪೂರೈಕೆ ಇರುವ ಹಾಸಿಗೆ, ತೀವ್ರನಿಗಾ ಘಟಕದ ಹಾಸಿಕೆ ಮತ್ತು ಮಕ್ಕಳ ವಿಭಾಗದಲ್ಲಿನ ಹಾಸಿಗೆಗಳನ್ನು ಕಾಯ್ದಿರಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT