ಬುಧವಾರ, ಸೆಪ್ಟೆಂಬರ್ 22, 2021
23 °C
ಕಾಮಗಾರಿ ನಿರ್ವಹಿಸದೆ ಬಿಲ್ ಪಾವತಿ ಆರೋಪ

11 ಬಿಬಿಎಂಪಿ ಎಂಜಿನಿಯರ್‌ಗಳ ವಿರುದ್ಧ ಲೋಕಾಯುಕ್ತಕ್ಕೆ ಡಿ.ಕೆ. ಸುರೇಶ್ ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಮಗಾರಿ ನಿರ್ವಹಿಸದೇ ಬಿಲ್ ಪಾವತಿಸಿ ರಾಜ್ಯದ ಬೊಕ್ಕಸಕ್ಕೆ ₹250 ಕೋಟಿ ನಷ್ಟವನ್ನು ಬಿಬಿಎಂಪಿ ಅಧಿಕಾರಿಗಳು ಉಂಟು ಮಾಡಿದ್ದಾರೆ’ ಎಂದು ಆರೋಪಿಸಿ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್ ಅವರು ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದಾರೆ.

ಪಾಲಿಕೆಯ ಟಿವಿಸಿಸಿ ವಿಭಾಗದ ಮುಖ್ಯ ಎಂಜಿನಿಯರ್ ದೊಡ್ಡಯ್ಯ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸತೀಶ್, ವಲಯದ ಮುಖ್ಯ ಎಂಜಿನಿಯರ್ ವಿಜಯಕುಮಾರ್, ಸಹಾಯಕ ಎಂಜಿನಿಯರ್ ಶಿಲ್ಪಾ ಸೇರಿ 11 ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

‘2019–20ನೇ ಸಾಲಿನಲ್ಲಿ ಮಂಜೂರಾಗಿದ್ದ ಕಾಮಗಾರಿಗಳ ಜಾಬ್‌ ಸಂಖ್ಯೆ‌ಗಳನ್ನು 2019ರ ಡಿಸೆಂಬರ್‌ನಲ್ಲಿ ಮಾಡಲಾಗಿದೆ. ಕಾರ್ಯಾದೇಶ ಪಡೆದು ಕಾಮಗಾರಿಯನ್ನೇ ನಿರ್ವಹಿಸದೆ 2020ರ ಜನವರಿಯಲ್ಲಿ ಬಿಲ್‌ಗಳನ್ನು ಪಡೆದು ಕೆಆರ್‌ಐಡಿಎಲ್‌ ಮೂಲಕ ಗುತ್ತಿಗೆದಾರರಿಗೆ ಹಣ ಪಾವತಿಸಲಾಗಿದೆ’ ಎಂದು ಅವರು ದೂರಿದ್ದಾರೆ.

‘ವಾರ್ಡ್‌ಗಳಲ್ಲಿ ನಿರ್ವಹಿಸಿರುವ ಕಾಮಗಾರಿಗೂ ಅಂದಾಜು ಪಟ್ಟಿಗೂ ಅಜ–ಗಜಾಂತರ ಇದೆ. ಅಧಿಕಾರಿಗಳು ಕರ್ತವ್ಯ ಲೋಪ ಎಸಗಿರುವುದು ಕಂಡು ಬಂದಿದೆ’ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ.

‘ಚರಂಡಿ ಕೆಲಸ ಇಲ್ಲದಿದ್ದರೂ ಹೂಳು ತೆಗೆಯಲಾಗಿದೆ ಎಂದು ಲೆಕ್ಕ ಬರೆದು ಬಿಲ್ ಪಾವತಿಸಲಾಗಿದೆ. ಇದರಲ್ಲಿ ಸುಮಾರು ₹250 ಕೋಟಿ ಸರ್ಕಾರಕ್ಕೆ ನಷ್ಟವಾಗಿರುವ ಸಾಧ್ಯತೆ ಇದೆ. ಪ್ರಕರಣದ ಕೂಲಂಕುಷ ತನಿಖೆ ನಡೆಸಿ ನಷ್ಟವನ್ನು ಸಂಬಂಧಪಟ್ಟ ಅಧಿಕಾರಿಗಳಿಂದಲೇ ವಸೂಲಿ ಮಾಡಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು