ಬೆಂಗಳೂರು: ವೈದ್ಯಕೀಯ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಥಾನಿಕ ವೈದ್ಯರ ಶಿಷ್ಯವೇತನ ಹೆಚ್ಚಳಕ್ಕೆ ಆಗ್ರಹಿಸಿ ಕರ್ನಾಟಕ ಸ್ಥಾನಿಕ ವೈದ್ಯರ ಸಂಘ (ಕೆಎಆರ್‌ಡಿ) ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ಮಂಗಳವಾರವೂ ಮುಂದುವರಿದಿದ್ದು, ಸೂಕ್ತ ಚಿಕಿತ್ಸೆ ಸಿಗದೆ ರೋಗಿಗಳು ಕಷ್ಟಪಟ್ಟರು.
ಜಿಲ್ಲಾ ಕೇಂದ್ರಗಳಲ್ಲಿ ರೋಗಿಗಳು ಚಿಕಿತ್ಸೆಗಾಗಿ ಪರದಾಡಿದರು. ತುರ್ತು ಚಿಕಿತ್ಸೆ ಲಭ್ಯವಿತ್ತು. ಆಸ್ಪತ್ರೆಗಳಲ್ಲಿನ ಹಲವು ವಿಭಾಗಗಳ ಎದುರು ರೋಗಿಗಳು ಸರದಿ ಸಾಲಿನಲ್ಲಿ ನಿಂತಿದ್ದರು.
ಹಾಸನ, ಕೊಡಗಿನಲ್ಲಿ ವೈದ್ಯರ ಮುಷ್ಕರ ನಡೆದಿಲ್ಲ. ಮೈಸೂರು, ಚಾಮರಾಜನಗರ, ಮಂಡ್ಯದಲ್ಲಿ ಮುಷ್ಕರ ನಡೆದಿದೆ. ಆದರೆ ರೋಗಿಗಳಿಗೆ ತೊಂದರೆ ಆಗಿಲ್ಲ. ರಾತ್ರಿ ಪಾಳಿ ವೈದ್ಯರು ಕೆಲಸ ಮುಗಿಸಿ ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ, ಹಗಲು ಪಾಳಿಯವರು ಕರ್ತವ್ಯ ನಿರ್ವಹಿಸಿದ್ದಾರೆ.
ಬೆಂಗಳೂರು ನಗರದ ವಾಣಿ ವಿಲಾಸ, ವಿಕ್ಟೋರಿಯಾ, ಮಿಂಟೊ ಮತ್ತು ಬೌರಿಂಗ್ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಸಂಕಷ್ಟ ತಪ್ಪಲಿಲ್ಲ.
‘ನಗರದ ಸ್ವಾತಂತ್ಯ ಉದ್ಯಾನದಲ್ಲಿ ನಡೆಸುತ್ತಿದ್ದ ಪ್ರತಿಭಟನೆಯನ್ನು ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಬುಧವಾರದಿಂದ ಕಿರಿಯ ವೈದ್ಯರು ಕಪ್ಪುಪಟ್ಟಿ ಧರಿಸಿ ಆಸ್ಪತ್ರೆಗಳಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ತುರ್ತು ಚಿಕಿತ್ಸಾ ವಿಭಾಗ ಹೊರತುಪಡಿಸಿ ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಯಾರೂ ತೆರಳುವುದಿಲ್ಲ. ರಕ್ತದಾನ ಮಾಡುವುದು, ನೇತ್ರದಾನ ಹಾಗೂ ಅಂಗಾಂಗ ದಾನಕ್ಕೆ ಹೆಸರು ನೋಂದಣಿ ಮಾಡಲಾಗುವುದು’ ಎಂದು ಸಂಘದ ಅಧ್ಯಕ್ಷ ಡಾ. ಸಿರೀಶ್ ಶಿವರಾಮಯ್ಯ ತಿಳಿಸಿದರು.