ಬೆಂಗಳೂರು: ಕೃಷಿ ಇಲಾಖೆಯಲ್ಲಿ ರೈತರಿಗೆ ಮಾಹಿತಿ, ಸಲಹೆ, ಮಾರ್ಗದರ್ಶನ ನೀಡಲು ಏಕೀಕೃತ ರೈತ ಕರೆ ಕೇಂದ್ರವನ್ನು ಆರಂಭಿಸಲಾಗಿದೆ.
‘ರೈತರು 1800–425–3553 ದೂರವಾಣಿ ಸಂಖ್ಯೆಗೆ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು’ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಈ ಹಿಂದೆ ಬೆಳೆ ಸಮೀಕ್ಷೆ, ಪಿ.ಎಂ. ಕಿಸಾನ್, ರೈತ ವಿದ್ಯಾನಿಧಿ, ಬೆಳೆ ವಿಮೆ, ಕೃಷಿ ಸಂಜೀವಿನಿ, ಕೆ–ಕಿಸಾನ್ ಮತ್ತು ರೈತರ ಸಹಾಯವಾಣಿ ಎಂಬ ಏಳು ದೂರವಾಣಿ ಸಂಖ್ಯೆಗಳು ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದವು. ರೈತರಿಗೆ ಯಾವ ಸಹಾಯವಾಣಿಗೆ ಕರೆ ಮಾಡಬೇಕೆಂಬ ಗೊಂದಲ ಉಂಟಾಗುತ್ತಿತ್ತು. ಆ ಸಮಸ್ಯೆಗೆ ಪರಿಹಾರ ನೀಡಲು ಕೃಷಿ ಇಲಾಖೆಯ ಕೇಂದ್ರ ಕಚೇರಿಯಲ್ಲಿ ರೈತರ ಸಮಸ್ಯೆಗಳಿಗೆ ಪರಿಹಾರ ನೀಡುವ ರೈತ ಕರೆ ಕೇಂದ್ರವನ್ನು ಸ್ಥಾಪಿಸಲಾಗಿದೆ. ರಾಜ್ಯದ ಎಲ್ಲ ರೈತರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡು ಪರಿಹಾರ ಪಡೆದುಕೊಳ್ಳಬಹುದು’ ಎಂದು ತಿಳಿಸಿದರು.
‘ಮುಂದಿನ ದಿನಗಳಲ್ಲಿ ಮಷಿನ್ ಲರ್ನಿಂಗ್ ಮತ್ತು ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುವುದು. ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆಗಳು ಜಂಟಿಯಾಗಿ ಬೆಳೆ ಸಮೀಕ್ಷೆ ನಡೆಸುತ್ತಿದ್ದು, ಇದರಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಸೇರಿಸಿಕೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.