ಬೆಂಗಳೂರು: ಹಿಂದುಸ್ತಾನ್ ಇನ್‌ಫ್ರಾಕಾನ್ ಇಂಡಿಯಾ ಲಿಮಿಟೆಡ್ ಹೆಸರಿನಲ್ಲಿ ಸಾರ್ವಜನಿಕರಿಂದ ಠೇವಣಿ ಸಂಗ್ರಹಿಸಿ ₹ 199.54 ಕೋಟಿ ವಂಚಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಬೆಂಗಳೂರು ಮತ್ತು ಮಂಡ್ಯ ಜಿಲ್ಲೆಯ ಐದು ಸ್ಥಳಗಳಲ್ಲಿ ಶೋಧ ನಡೆಸಿದ್ದಾರೆ.
‘ಜೂನ್ 27ರಂದು ಬೆಂಗಳೂರು ಮತ್ತು ಮಂಡ್ಯದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಸಾರ್ವಜನಿಕರಿಂದ ಸಂಗ್ರಹಿಸಿದ್ದ ಠೇವಣಿ ಹಣವನ್ನು ದುರ್ಬಳಕೆ ಮಾಡಿರುವುದು, ಅನ್ಯ ಉದ್ದೇಶಗಳಿಗೆ ವರ್ಗಾವಣೆ ಮಾಡಿರುವುದಕ್ಕೆ ಸಂಬಂಧಿಸಿದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಠೇವಣಿ ಹಣ ಬಳಸಿ ಖರೀದಿಸಿರುವ ಸ್ಥಿರಾಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳೂ ಪತ್ತೆಯಾಗಿವೆ’ ಎಂದು ಇ.ಡಿ ಅಧಿಕಾರಿಗಳು ತಿಳಿಸಿದ್ದಾರೆ.
2010ರಿಂದ 2015ರ ಅವಧಿಯಲ್ಲಿ ಇನ್‌ಫ್ರಾಕಾನ್ ಕಂಪ ನಿಯು ಹೆಚ್ಚಿನ ಬಡ್ಡಿ ನೀಡುವ ಆಮಿಷವೊಡ್ಡಿ ಸಾರ್ವಜನಿಕರಿಂದ ₹389 ಕೋಟಿಯಷ್ಟು ಠೇವಣಿ ಸಂಗ್ರಹಿಸಿತ್ತು. ಈ ಪೈಕಿ ₹ 199.54 ಕೋಟಿಯನ್ನು ಠೇವಣಿದಾರರಿಗೆ ಹಿಂದಿರುಗಿಸದೇ ವಂಚಿಸಲಾಗಿತ್ತು. ಬೆಂಗಳೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣ ಆಧರಿಸಿ ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಇ.ಡಿ ಪ್ರತ್ಯೇಕ ಮೊಕ ದ್ದಮೆ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.