ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೆಐಎಡಿಬಿ ಪ್ರಧಾನ ಕಚೇರಿಯಲ್ಲಿ ಇ.ಡಿ. ಶೋಧ

2021ರಲ್ಲಿ ನಕಲಿ ದಾಖಲೆ ಸೃಷ್ಟಿಸಿ ₹19.9 ಕೋಟಿ ಪರಿಹಾರ
Published 9 ಆಗಸ್ಟ್ 2024, 15:35 IST
Last Updated 9 ಆಗಸ್ಟ್ 2024, 15:35 IST
ಅಕ್ಷರ ಗಾತ್ರ

ಬೆಂಗಳೂರು: ವಿವಿಧೆಡೆ ಕೈಗಾರಿಕಾ ಪ್ರದೇಶಗಳ ನಿರ್ಮಾಣಕ್ಕೆ ಸ್ವಾಧೀನಪಡಿಸಿಕೊಂಡ ಜಮೀನುಗಳಿಗೆ ರೈತರ ಹೆಸರಿನಲ್ಲಿ ಅನ್ಯರಿಗೆ ಪರಿಹಾರ ವಿತರಿಸಿ, ವಂಚಿಸಿರುವ ಪ್ರಕರಣದ ಕುರಿತು ತನಿಖೆ ಆರಂಭಿಸಿರುವ ಜಾರಿ ನಿರ್ದೇಶನಾಲಯ (ಇ.ಡಿ), ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಪ್ರಧಾನ ಕಚೇರಿ ಮೇಲೆ ಶುಕ್ರವಾರ ದಾಳಿ ಮಾಡಿ, ಶೋಧ ನಡೆಸಿದೆ.

ಧಾರವಾಡದ ಗಾಮನಗಟ್ಟಿ ಕೈಗಾರಿಕಾ ಪ್ರದೇಶದಲ್ಲಿ 2012ರಲ್ಲಿ ಭೂಸ್ವಾಧೀನ ಪಡಿಸಿಕೊಂಡ ಜಮೀನುಗಳಿಗೆ ಒಮ್ಮೆ ಪರಿಹಾರ ನೀಡಲಾಗಿತ್ತು. 2021ರಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ 14 ಮಂದಿಗೆ ₹ 19.9 ಕೋಟಿ ಪರಿಹಾರ ವಿತರಿಸಲಾಗಿತ್ತು. ಈ ಕುರಿತು ಧಾರವಾಡದ ವಿದ್ಯಾಗಿರಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಿ, ತನಿಖೆ ನಡೆಸಲಾಗಿತ್ತು.

ಇದೇ ರೀತಿ ಇನ್ನೂ ಕೆಲವು ಪ್ರಕರಣಗಳಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಪರಿಹಾರ ವಿತರಿಸಿರುವ ಕುರಿತು ತನಿಖೆ ನಡೆಯುತ್ತಿದೆ. ಪೊಲೀಸರು ದಾಖಲಿಸಿರುವ ಎಫ್‌ಐಆರ್‌ಗಳ ಆಧಾರದಲ್ಲಿ ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿರುವ ಇ.ಡಿ. ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಕೆಐಎಡಿಬಿಯ ಪ್ರಧಾನ ಕಚೇರಿ ಮತ್ತು ಹುಬ್ಬಳ್ಳಿ ಪ್ರಾದೇಶಿಕ ಕಚೇರಿಗಳ ಮೇಲೆ ಶುಕ್ರವಾರ ಏಕಕಾಲಕ್ಕೆ ದಾಳಿ ಮಾಡಿರುವ ಇ.ಡಿ. ಅಧಿಕಾರಿಗಳು ಶೋಧ ನಡೆಸಿದ್ದಾರೆ.

ಹಣಕಾಸು ವಿಭಾಗದ ಕಡತ ವಶಕ್ಕೆ: ‘ರೇಸ್‌ ಕೋರ್ಸ್‌ ರಸ್ತೆಯಲ್ಲಿರುವ ಖನಿಜ ಭವನದಲ್ಲಿನ ಕೆಐಎಡಿಬಿ ಕಚೇರಿಯ ಹಣಕಾಸು ವಿಭಾಗದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಹಣಕಾಸು ವಿಭಾಗದ ಹಲವು ಕಡತಗಳನ್ನು ತನಿಖಾ ತಂಡ ವಶಕ್ಕೆ ಪಡೆದಿದೆ’ ಎಂದು ಮೂಲಗಳು ತಿಳಿಸಿವೆ.

‘ಹಣಕಾಸು ವಿಭಾಗದ ಕೆಲವು ಅಧಿಕಾರಿಗಳನ್ನೂ ತನಿಖಾ ತಂಡ ವಿಚಾರಣೆ ನಡೆಸಿದೆ. ಪರಿಹಾರ ವಿತರಣೆ ಪ್ರಕ್ರಿಯೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದಿದೆ’ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT