ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣ: ಈಶ್ವರಪ್ಪ ಮನೆ ಮುತ್ತಿಗೆಗೆ ಯತ್ನ

Last Updated 12 ಏಪ್ರಿಲ್ 2022, 19:37 IST
ಅಕ್ಷರ ಗಾತ್ರ

ಬೆಂಗಳೂರು: ‘ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆಗೆ ಕಾರಣರಾಗಿರುವ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾ ಮಾಡಬೇಕು. ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ ಬಂಧಿಸಬೇಕು’ ಎಂದು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ರೇಸ್‌ಕೋರ್ಸ್‌ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಎದುರು ಸೇರಿದ್ದ ಕಾರ್ಯಕರ್ತರು, ‘ಸಾವಿಗೆ ಬಿಜೆಪಿ ಸರ್ಕಾರವೇ ಹೊಣೆ’ ಎಂಬ ಘೋಷಣಾ ಫಲಕ ಪ್ರದರ್ಶಿಸಿದರು. ಪ್ರತಿಭಟನೆ ಬಳಿಕ ಗಾಂಧಿಭವನ ಬಳಿ ಇರುವ ಈಶ್ವರ‍‍ಪ್ಪ ಮನೆಗೆ ತೆರಳಿದ ಕಾರ್ಯಕರ್ತರು, ಮುತ್ತಿಗೆ ಹಾಕಲು ಯತ್ನಿಸಿದರು. ಮಹಿಳಾ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು.

ಸ್ಥಳದಲ್ಲಿದ್ದ ಪೊಲೀಸರು, ಕಾರ್ಯಕರ್ತರನ್ನು ವಶಕ್ಕೆ ಪಡೆದು ವಾಹನಗಳಲ್ಲಿ ಕರೆದೊಯ್ದರು. ಕೆಲ ಹೊತ್ತಿನ ನಂತರ ಕಾರ್ಯಕರ್ತರನ್ನು ಬಿಡುಗಡೆ ಮಾಡಿದರು.

‘ಬಿಜೆಪಿ ಕಾರ್ಯಕರ್ತರೇ ಆಗಿದ್ದ ಸಂತೋಷ್, ರಾಜ್ಯ ಸರ್ಕಾರದ ಭ್ರಷ್ಟಾಚಾರವನ್ನು ಬಯಲಿಗೆ ಎಳೆದಿದ್ದರು. ಈಶ್ವರಪ್ಪ ವಿರುದ್ಧ ಪ್ರಧಾನಮಂತ್ರಿ ಹಾಗೂ ಇತರರು ದೂರು ಸಹ ನೀಡಿದ್ದರು. ಇದೀಗ ಸಂತೋಷ್‌ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಈಶ್ವರಪ್ಪ ಹಾಗೂ ರಾಜ್ಯ ಸರ್ಕಾರ ಕಾರಣ’ ಎಂದು ಕಾರ್ಯಕರ್ತರು ಆರೋಪಿಸಿದರು.

‘ಸಂತೋಷ್ ಸಾವಿನ ಸಂಬಂಧ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಿಸಬೇಕು. ಸಾವಿನ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು’ ಎಂದೂ ಆಗ್ರಹಿಸಿದರು.

ಹೈಗ್ರೌಂಡ್ಸ್ ಠಾಣೆಗೆ ದೂರು: ‘ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಎಸ್. ಈಶ್ವರಪ್ಪ ಅವರನ್ನು ಬಂಧಿಸಬೇಕು’ ಎಂದು ಆರೋಪಿಸಿ ಆಮ್‌ ಆದ್ಮಿ ಪಾರ್ಟಿ ಕಾರ್ಯಕರ್ತರು ಹೈಗ್ರೌಂಡ್ಸ್ ಠಾಣೆಗೆ ಮಂಗಳವಾರ ದೂರು ಸಲ್ಲಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಎಎಪಿ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್‌ ದಾಸರಿ, ‘ತಮ್ಮ ಸಾವಿಗೆ ಸಚಿವ ಕೆ.ಎಸ್. ಈಶ್ವರಪ್ಪ ಅವರೇ ಕಾರಣವೆಂದು ಸಂತೋಷ್ ಮರಣಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಹೀಗಾಗಿ, ಆರೋಪಿ ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸಬೇಕು. ಅವರಿಂದ ಸಾಕ್ಷ್ಯ ನಾಶ ಆಗುವುದನ್ನು ತಡೆಯಬೇಕು’ ಎಂದರು.

‘ಈಶ್ವರಪ್ಪ ಅವರು ಶೇ 40ರಷ್ಟು ಕಮಿಷನ್ ಕೇಳುತ್ತಿದ್ದಾರೆಂದು ಸಂತೋಷ್ ಅವರು ಪ್ರಧಾನಮಂತ್ರಿಗೆ ದೂರು ನೀಡಿದ್ದರು. ಅವಾಗಲೇ ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿದ್ದರೆ, ಅಮಾಯಕ ವ್ಯಕ್ತಿ ಸಾಯುವುದು ತಪ್ಪುತ್ತಿತ್ತು. ಭ್ರಷ್ಟ ಬಿಜೆಪಿ ಆಡಳಿತದಲ್ಲಿ ಪ್ರಾಮಾಣಿಕರ ಧ್ವನಿಗೆ ಬೆಲೆ ಇಲ್ಲವಾಗಿದೆ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT