ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಶ್ವರಪ್ಪ ವಿರುದ್ಧ ಪ್ರತಿಭಟನೆ: ಕಾಂಗ್ರೆಸ್ ಮುಖಂಡರ ವಿರುದ್ಧ ಎಫ್‌ಐಆರ್

Last Updated 17 ಏಪ್ರಿಲ್ 2022, 15:57 IST
ಅಕ್ಷರ ಗಾತ್ರ

ಬೆಂಗಳೂರು: ‘ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣದ ಮೊದಲ ಆರೋಪಿ ಆಗಿರುವ ಕೆ.ಎಸ್. ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ, ಬಂಧಿಸಬೇಕು’ ಎಂದು ಒತ್ತಾಯಿಸಿ ನಗರದಲ್ಲಿ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

‘ಏಪ್ರಿಲ್ 14ರಂದು ನಡೆದಿದ್ದ ಪ್ರತಿಭಟನೆ ಬಗ್ಗೆ ಮಹಿಳಾ ಪಿಎಸ್‌ಐ ಜಾಹೀದಾ ನೀಡಿರುವ ದೂರು ಆಧರಿಸಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಸದ್ಯದಲ್ಲೇ ಮುಖಂಡರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುವುದು’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲ, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್, ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಮೊಹಮ್ಮದ್ ನಲಪಾಡ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ, ಶಾಸಕ ಪ್ರಿಯಾಂಕ ಖರ್ಗೆ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮ್ಮದ್, ರಾಮಲಿಂಗಾ ರೆಡ್ಡಿ, ಕೆ.ಎಸ್. ಉಗ್ರಪ್ಪ, ಧ್ರುವನಾರಾಯಣ್, ಮುಖಂಡರಾದ ಟಿ.ಬಿ. ಜಯಚಂದ್ರ, ಐವಾನ್ ಡಿಸೋಜ, ಪ್ರಕಾಶ್ ರಾಥೋಡ್, ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಸೇರಿದಂತೆ 36 ಮಂದಿಯನ್ನು ಆರೋಪಿಯನ್ನಾಗಿ ಮಾಡಲಾಗಿದೆ’ ಎಂದೂ ತಿಳಿಸಿವೆ.

‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರಿ ನಿವಾಸ ‘ಕೃಷ್ಣಾ’ಗೆ ಮುತ್ತಿಗೆ ಹಾಕಲು ತೀರ್ಮಾನಿಸಿದ್ದ ಕಾಂಗ್ರೆಸ್ ಮುಖಂಡರು, ಮಾಧವನಗರದಿಂದ ಮೆರವಣಿಗೆ ಹೊರಟಿದ್ದರು. ಮಧ್ಯಾಹ್ನ 12.30ರ ಸುಮಾರಿಗೆ ರೇಸ್‌ಕೋರ್ಸ್‌ ರಸ್ತೆಯಲ್ಲಿರುವ ರೇಸ್ ವ್ಯೂ ಹೋಟೆಲ್ ಬಳಿ ಬಂದಿದ್ದರು. ಅಕ್ರಮ ಕೂಟ ಕಟ್ಟಿಕೊಂಡಿದ್ದ ಮುಖಂಡರು, ಘೋಷಣೆ ಕೂಗಿದರು. ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಪಡಿಸಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯನ್ನುಂಟು ಮಾಡಿದರು ಎಂಬ ಸಂಗತಿ ದೂರಿನಲ್ಲಿದೆ’ ಎಂದೂ ಮೂಲಗಳು ಹೇಳಿವೆ.

‘ಯಾವುದೇ ಅನುಮತಿ ಪಡೆಯದೇ ಸಾರ್ವಜನಿಕರ ರಸ್ತೆಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಅಕ್ರಮವಾಗಿ ಗುಂಪು ಸೇರಿ ಸಾರ್ವಜನಿಕರಿಗೆ ತೊಂದರೆ ಮಾಡಿದ್ದಾರೆ. ಅಕ್ರಮ ಕೂಟ (ಐಪಿಸಿ 143) ಹಾಗೂ ಅಕ್ರಮ ಬಂಧನ (ಐಪಿಸಿ 341) ಆರೋಪ ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದೂ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT