ಯಲಹಂಕ: ಕೆಬಿಜಿ ಸ್ವಯಂ ಸೇವಕರು ಮತ್ತು ಡಾ.ಸೋಲಂಕಿ ಕಣ್ಣಿನ ಆಸ್ಪತ್ರೆ ಹಾಗೂ ನವ್ಯ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಸಹಯೋಗದಲ್ಲಿ ಕಾಂಗ್ರೆಸ್ ಮುಖಂಡ ದಿ.ಸಂತೋಷ್ ಬೆಳ್ಳೂಟಿ ಅವರ ಸ್ಮರಣಾರ್ಥ ಮಾರೇನಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಆಯೋಜಿಸಿದ್ದ ಉಚಿತ ನೇತ್ರ ತಪಾಸಣೆ ಶಿಬಿರವನ್ನು ಸಾಮಾಜಿಕ ಕಾರ್ಯಕರ್ತೆ ಮೀನಾಕ್ಷಿ ಶೇಷಾದ್ರಿ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ‘ಇತ್ತೀಚಿನ ದಿನಗಳಲ್ಲಿ ಕಣ್ಣಿನ ಸಮಸ್ಯೆ ಗಂಭೀರ ಸ್ವರೂಪದ ಕಾಯಿಲೆಯಾಗಿ ಪರಿಣಮಿಸುತ್ತಿದೆ. ಆರಂಭದಲ್ಲೇ ತಪಾಸಣೆ ಮಾಡಿಸಿ, ಸಮಸ್ಯೆ ಕಂಡರೆ ಚಿಕಿತ್ಸೆ ಪಡೆಯಬೇಕು’ ಎಂದು ಸಲಹೆ ನೀಡಿದರು.
‘ಕಣ್ಣಿನ ತಪಾಸಣೆ ನಡೆಸಿ, ಅಗತ್ಯವಿದ್ದವರಿಗೆ ಉಚಿತವಾಗಿ ಕನ್ನಡಕ ವಿತರಿಸುವುದರ ಜೊತೆಗೆ ಕಣ್ಣಿನ ಶಸ್ತ್ರಚಿಕಿತ್ಸೆಗೆ ನೆರವಾಗುವ ಉದ್ದೇಶದಿಂದ ಈ ಶಿಬಿರವನ್ನು ಆಯೋಜಿಸಲಾಗಿದೆ’ ಎಂದು ತಿಳಿಸಿದರು.
ಶಿಬಿರದಲ್ಲಿ ಒಟ್ಟು 350 ಜನರಿಗೆ ರಕ್ತದೊತ್ತಡ, ಮಧುಮೇಹ ಹಾಗೂ ಕಣ್ಣಿನ ತಪಾಸಣೆ ನಡೆಸಲಾಯಿತು. ಇದರಲ್ಲಿ 220 ಮಂದಿಗೆ ಉಚಿತವಾಗಿ ಕನ್ನಡಕ ವಿತರಿಸಲಾಯಿತು. ಉಚಿತ ಔಷಧ ವಿತರಣೆಯ ಜೊತೆಗೆ ಕಣ್ಣಿನಪೊರೆ ಶಸ್ತ್ರಚಿಕಿತ್ಸೆ ಅವಶ್ಯಕತೆಯಿದ್ದ 24 ಮಂದಿಯನ್ನು ಗುರುತಿಸಿ, ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಯಿತು.
ಕಾಂಗ್ರೆಸ್ ಮುಖಂಡ ಪುಟ್ಟು ಆಂಜಿನಪ್ಪ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ನಾಗರಾಜ್, ಮಾರೇನಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷ ಪಿ.ರಾಹುಲ್, ಮಾಜಿ ಅಧ್ಯಕ್ಷರಾದ ವಿ.ನಂಜೇಗೌಡ, ಚೌಡಪ್ಪ, ಮುಖಂಡರಾದ ಈರೇಗೌಡ, ಅವಿನಾಶ್, ಸತೀಶ್, ಚಂದನ್ ಮತ್ತಿತರರು ಉಪಸ್ಥಿತರಿದ್ದರು.