ಬೆಂಗಳೂರು: ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಹಾಗೂ ಕೊಬ್ಬರಿಗೆ ಹೆಚ್ಚಿನ ದರ ನಿಗದಿ ಪಡಿಸುವಂತೆ ಆಗ್ರಹಿಸಿ, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಹಾಸನ ಜಿಲ್ಲೆಯ ಅರಸೀಕೆರೆಯಿಂದ ಆರಂಭಗೊಂಡಿದ್ದ ರೈತರ ಪಾದಯಾತ್ರೆ ಬುಧವಾರ ನಗರ ತಲುಪಿತು.
ಸೆ.26ರಂದು ಸಂಘದ ರಾಜ್ಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರ ನೇತೃತ್ವದಲ್ಲಿ ಪಾದಯಾತ್ರೆ ಆರಂಭಗೊಂಡಿತ್ತು. ವಿವಿಧ ಪಟ್ಟಣ ಹಾಗೂ ಗ್ರಾಮಗಳ ಮೂಲಕ ಬುಧವಾರ ಬೆಳಿಗ್ಗೆ ನಗರ ತಲುಪಿದಾಗ ಅಲ್ಲಲ್ಲಿ ಪೊಲೀಸರು ತಡೆಯೊಡ್ಡಿದರು. ಪೊಲೀಸರಿಂದ ಪ್ರತಿಭಟನಕಾರರು ತಪ್ಪಿಸಿಕೊಂಡು ಸ್ವಾತಂತ್ರ್ಯ ಉದ್ಯಾನ ತಲುಪಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ)ಯನ್ನು ಶಾಸನ ಬದ್ಧಗೊಳಿಸಬೇಕು. ಇಡೀ ರಾಜ್ಯದಲ್ಲಿ ಬರ ಆವರಿಸಿದ್ದು, ಬರಪೀಡಿತ ರಾಜ್ಯ ಎಂದು ಘೋಷಣೆ ಮಾಡಬೇಕೆಂದು ರೈತರು ಆಗ್ರಹಿಸಿದರು.
ಗ್ರಾಮಾಂತರ ಪ್ರದೇಶದಲ್ಲಿ ವಿದ್ಯುತ್ ಸಮಸ್ಯೆ ತಲೆದೋರಿದೆ. ವಿದ್ಯಾರ್ಥಿಗಳು ಹಾಗೂ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶಕ್ಕೆ ನಿರಂತರ ವಿದ್ಯುತ್ ಪೂರೈಸಬೇಕು ಎಂದು ಆಗ್ರಹಿಸಿದರು.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಗರ್‌ಹುಕುಂ ಸಾಗುವಳಿದಾರರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಒಕ್ಕಲೆಬ್ಬಿಸುತ್ತಿದ್ದಾರೆ. ಇದನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.
ಅಧಿಕಾರಕ್ಕೆ ಬಂದರೆ ತಕ್ಷಣವೇ ಮಹದಾಯಿ ಯೋಜನೆ ಆರಂಭಿಸುವುದಾಗಿ ಕಾಂಗ್ರೆಸ್ ಹೇಳಿತ್ತು. ಅಧಿಕಾರ ಸಿಕ್ಕಿದ ಮೇಲೆ ಮೌನ ವಹಿಸಿದೆ ಎಂದು ರೈತ ಸಂಘದ ರಾಜ್ಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಆಕ್ರೋಶ ಹೊರಹಾಕಿದರು.
ಆಡಳಿತದ ದುರಾಸೆಯಿಂದ ರಾಜ್ಯ ಸರ್ಕಾರವು ತಮಿಳುನಾಡಿಗೆ ಕಾವೇರಿ ನೀರು ಹರಿಸಿ ರಾಜ್ಯದ ಅನ್ನದಾತರಿಗೆ ಮೋಸ ಎಸಗಿದೆ. ತಕ್ಷಣವೇ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಪ್ರತಿ ಕ್ವಿಂಟಲ್ ಕೊಬ್ಬರಿಗೆ ₹ 8 ಸಾವಿರ ನೀಡಲಾಗುತ್ತಿದೆ. ಕೊಬ್ಬರಿಗೆ ₹ 25 ಸಾವಿರ ನಿಗದಿ ಮಾಡಬೇಕು ಎಂದು ಒತ್ತಾಯಿಸಿದರು.