ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಸರ್ಕಾರಗಳಿಂದ ರೈತರ ಬದುಕು ನಾಶ: ಸಿದ್ದರಾಮಯ್ಯ

Last Updated 13 ಸೆಪ್ಟೆಂಬರ್ 2020, 20:27 IST
ಅಕ್ಷರ ಗಾತ್ರ

ಬೆಂಗಳೂರು: ಬಂಡವಾಳಶಾಹಿಗಳಿಗೆ ಅನುಕೂಲ ಮಾಡಿಕೊಡಲು ಭೂಸುಧಾರಣೆ ಕಾಯ್ದೆ, ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ) ಕಾಯ್ದೆಗಳಿಗೆ ಏಕಪಕ್ಷೀಯವಾಗಿ ತಿದ್ದುಪಡಿ ತಂದಿರುವ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರಗಳು ರೈತರ ಬದುಕನ್ನು ನಾಶ ಮಾಡುತ್ತಿವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು.

ನಗರದ ಗಾಂಧಿ ಭವನದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನದಾಸ್‌ ಅವರ ‘ರೈತರ ಭದ್ರತೆ ದೇಶದ ಭದ್ರತೆ’ ಎಂಬ ಕೃತಿ ಬಿಡುಗಡೆ ಮಾಡಿ ಮಾತನಾಡಿದ ಅವರು, ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇತ್ತೀಚಿನ ದಿನಗಳಲ್ಲಿ ಹಲವು ಕಾಯ್ದೆಗಳಿಗೆ ಸುಗ್ರೀವಾಜ್ಞೆ ಮೂಲಕ ತಂದಿರುವ ತಿದ್ದುಪಡಿಗಳು ರೈತರ ಸಾಮಾಜಿಕ ಮತ್ತು ಆರ್ಥಿಕ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರಲಿವೆ’ ಎಂದರು.

‘ಇತರ ಎಲ್ಲ ಉತ್ಪನ್ನಗಳ ದರ ನಿಗದಿಯ ಅಧಿಕಾರ ಉತ್ಪಾದಕರ ಬಳಿಯಲ್ಲೇ ಇರುತ್ತದೆ. ಆದರೆ, ಕೃಷಿ ಉತ್ಪನ್ನಗಳ ದರ ನಿಗದಿ ಮಾಡುವ ಅಧಿಕಾರ ರೈತರಿಗೆ ಇಲ್ಲ. ಬರಗಾಲ, ಪ್ರವಾಹ, ಕೊರೊನಾ ಸಂಕಷ್ಟಗಳಿಂದ ರೈತರು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಭೂ ಸುಧಾರಣೆ, ಎಪಿಎಂಸಿ ಕಾಯ್ದೆಗಳಿಗೆ ತಿದ್ದುಪಡಿ ತಂದಿರುವ ರಾಜ್ಯ ಸರ್ಕಾರ, ರೈತರ ಬೆನ್ನುಮೂಳೆ ಮುರಿದಿದೆ’ ಎಂದು ಟೀಕಿಸಿದರು.

ಒಕ್ಕೂಟ ವ್ಯವಸ್ಥೆಗೆ ಧಕ್ಕೆ: ರೈತರು, ಕಾರ್ಮಿಕರು ಮತ್ತು ಸಾಮಾನ್ಯ ಜನರ ಜೀವನದ ಮೇಲೆ ನೇರವಾಗಿ ಪರಿಣಾಮ ಬೀರುವಂತಹ ಅನೇಕ ವಿಚಾರಗಳಲ್ಲಿ ರಾಜ್ಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಕೇಂದ್ರ ಸರ್ಕಾರ ಕಾನೂನುಗಳನ್ನು ತಿದ್ದುಪಡಿ ಮಾಡುತ್ತಿದೆ. ರಾಜ್ಯಗಳಿಗೆ ಸಂಬಂಧಿಸಿದ ವಿಷಯಗಳಲ್ಲೂ ಹಸ್ತಕ್ಷೇಪ ಮಾಡುವ ಮೂಲಕ ಸಹಕಾರ ಒಕ್ಕೂಟ ವ್ಯವಸ್ಥೆಯನ್ನು ನಾಶ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

‘ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಭೂ ಸುಧಾರಣೆ ಮತ್ತು ಎಪಿಎಂಸಿ ಕಾಯ್ದೆಗಳ ತಿದ್ದುಪಡಿಗೆ ಸಂಬಂಧಿಸಿದಂತೆ ಪ್ರಬಲ ಹೋರಾಟ ನಡೆಸುತ್ತೇವೆ. ಈ ವಿಚಾರದಲ್ಲಿ ರೈತ, ಕಾರ್ಮಿಕ ಮತ್ತು ದಲಿತ ಸಂಘಟನೆಗಳ ಏಕತೆಯಿಂದ ಹೋರಾಡಬೇಕು. ಈ ಐಕ್ಯ ಹೋರಾಟವನ್ನು ಕಾಂಗ್ರೆಸ್‌ ಬೆಂಬಲಿಸಲಿದೆ’ ಎಂದರು.

ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಎಸ್‌.ಆರ್‌.ಪಾಟೀಲ ಮಾತನಾಡಿ, ‘ಭೂ ಸುಧಾರಣೆ ಕಾಯ್ದೆಯ ತಿದ್ದುಪಡಿಯು ತಾಯಿಯಿಂದ ಮಕ್ಕಳನ್ನು ದೂರ ಮಾಡಿದಂತಹ ಸ್ಥಿತಿಯನ್ನು ನಿರ್ಮಿಸಲಿದೆ. ಈ ಸರ್ಕಾರಗಳು ತಂದಿರುವ ಸುಗ್ರೀವಾಜ್ಞೆಗಳು ನಾಡಿನ ನೆಲ ಮತ್ತು ಜಲಕ್ಕೆ ಕುತ್ತಾಗಲಿವೆ’ ಎಂದು ಆತಂಕ ವ್ಯಕ್ತಪಡಿಸಿದರು.

ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ ಡಾ. ಪ್ರಕಾಶ್‌ ಕಮ್ಮರಡಿ, ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್‌, ಪರಿಸರ ತಜ್ಞ ಎ.ಎನ್‌.ಯಲ್ಲಪ್ಪ ರೆಡ್ಡಿ, ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರಬೂರು ಶಾಂತಕುಮಾರ್‌, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಗುರುಪ್ರಸಾದ್‌ ಕೆರಗೋಡು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT