ಬೆಂಗಳೂರು: ‘ಭ್ರಷ್ಟಾಚಾರ, ನಿರುದ್ಯೋಗ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ದ ಯುವ ಕಾಂಗ್ರೆಸ್ ಕಾರ್ಯಕರ್ತರು ಹೋರಾಟ ಮಾಡಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಬೇಕು’ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಹೇಳಿದರು.
ಯುವ ಕಾಂಗ್ರೆಸ್ ವತಿಯಿಂದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಯುವ ಕಾಂಗ್ರೆಸ್ ರಾಷ್ಟ್ರೀಯ ಸಮಾವೇಶ ‘ಬೆಹತರ್ ಭಾರತ್ ಕೀ ಬುನಿಯಾದ್’ದ ಎರಡನೇ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಪಕ್ಷ ಯುವಕರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ. ಸುಭದ್ರ ರಾಷ್ಟ್ರ ಮತ್ತು ಜಾತ್ಯತೀತ ಸಮಾಜ ನಿರ್ಮಾಣ ಯುವಕರಿಂದ ಮಾತ್ರ ಸಾಧ್ಯ’ ಎಂದರು.
‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಯುತ್ತಿದೆ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ಪಕ್ಷ ನುಡಿದಂತೆ ನಡೆಯುತ್ತಿದೆ’ ಎಂದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಜಯ್ ಮಾಕನ್, ಕಾರ್ಯದರ್ಶಿ ಅಭಿಷೇಕ್ ದತ್, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್, ರಾಜ್ಯ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಇದ್ದರು.