ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಸ್ಕ್‌ ಧರಿಸದೆ ರ‍್ಯಾಲಿ: ಸಂಸದ ತೇಜಸ್ವಿ ಸೂರ್ಯ ಸೇರಿ 9 ಮಂದಿಗೆ ದಂಡ

ಮಾಸ್ಕ್‌ ಧರಿಸದೆ ರ‍್ಯಾಲಿ: ಹೈಕೋರ್ಟ್‌ಗೆ ಸರ್ಕಾರದ ಮಾಹಿತಿ
Last Updated 9 ನವೆಂಬರ್ 2020, 22:07 IST
ಅಕ್ಷರ ಗಾತ್ರ

ಬೆಂಗಳೂರು: ಸೆ.30ರಂದು ಮಾಸ್ಕ್‌ ಧರಿಸದೆ ಮತ್ತು ಅಂತರ ಕಾಯ್ದುಕೊಳ್ಳದೆ ರ‍್ಯಾಲಿ ನಡೆಸಿ ಕೋವಿಡ್‌ ನಿಯಂತ್ರಣ ಮಾರ್ಗಸೂಚಿ ಉಲ್ಲಂಘಿಸಿದ್ದ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ 9 ಮಂದಿಗೆ ನ. 7ರಂದು ದಂಡ ವಿಧಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಲ್ಲೇಶ್ವರದಲ್ಲಿರುವ ಬಿಜೆಪಿ ರಾಜ್ಯ ಕಚೇರಿವರೆಗೆ ಕೋವಿಡ್‌ ನಿಯಂತ್ರಣ ಮಾರ್ಗಸೂಚಿ ಪಾಲಿಸದೇ ರ‍್ಯಾಲಿ ನಡೆಸಲು ಅನುಮತಿ ನೀಡಿದ್ದನ್ನು ಪ್ರಶ್ನಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಸೋಮವಾರ ನಡೆಯಿತು.

ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್ ಓಕಾ ನೇತೃತ್ವದ ವಿಭಾಗೀಯ ಪೀಠಕ್ಕೆ ಪ್ರಮಾಣಪತ್ರ ಸಲ್ಲಿಸಿದ ರಾಜ್ಯ ಸರ್ಕಾರ, ‘ಸೆ.30ರಂದು ಬಿಜೆಪಿ ಕಚೇರಿ ಬಳಿ ನಿಯಮ ಉಲ್ಲಂಘಿಸಿರುವುದು ಪತ್ತೆಯಾಗಿದೆ. ಈ ಸಂಬಂಧ ವೈಯಾಲಿಕಾವಲ್‌ ಪೊಲೀಸರು ತೇಜಸ್ವಿ ಸೂರ್ಯ ಮತ್ತು ಇತರ ಎಂಟು ಮಂದಿಗೆ ನ.7ರಂದು ದಂಡ ವಿಧಿಸಿದ್ದಾರೆ’ ಎಂದು ಮಾಹಿತಿ ನೀಡಿತು.

‘ಮಾಸ್ಕ್‌ ಧರಿಸದೆ, ಅಂತರ ಪಾಲಿಸದೆ ರ‍್ಯಾಲಿ ನಡೆಸಿದ ಪ್ರಭಾವಿ ವ್ಯಕ್ತಿಗಳು ಎರಡೂವರೆ ತಿಂಗಳ ಬಳಿಕ ಕೇವಲ ದಂಡ ಪಾವತಿಸಿ ಆರಾಮದಿಂದ ಇದ್ದಾರೆ’ ಎಂದು ನ್ಯಾಯಪೀಠ ಮೌಖಿಕವಾಗಿ ಪ್ರತಿಕ್ರಿಯಿಸಿತು.

ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆಯ ಪರಿಷ್ಕೃತ ಪ್ರತಿಯನ್ನು ಸಲ್ಲಿಸುವಂತೆ ನಿರ್ದೇಶನ ನೀಡಿದ ನ್ಯಾಯಪೀಠ, ಮಾಸ್ಕ್‌ ಧರಿಸದವರಿಂದ ದಂಡ ವಸೂಲಿಗೆ ನಿಯೋಜಿಸಿರುವ ಮಾರ್ಷಲ್‌ಗಳಿಗೆ ನಿಯಮಿತವಾಗಿ ವೇತನ ಪಾವತಿಸಲಾಗುತ್ತಿದೆಯೆ ಎಂಬುದರ ಮಾಹಿತಿ ನೀಡುವಂತೆ ಸೂಚಿಸಿತು.

ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಕೋವಿಡ್‌ ನಿಯಂತ್ರಣ ಮಾರ್ಗಸೂಚಿ ಉಲ್ಲಂಘಿಸಿದ್ದ 684 ಜನರಿಗೆ ದಂಡ ವಿಧಿಸಲಾಗಿದೆ ಎಂದು ಸರ್ಕಾರದ ಪರ ವಕೀಲರು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು. ಚುನಾವಣಾ ಪ್ರಚಾರ ಸಭೆ, ರ‍್ಯಾಲಿ ನಡೆಸಲು ಅನುಮತಿ ನೀಡಿರುವುದಕ್ಕೆ ಸಂಬಂಧಿಸಿದ ವಿವರಗಳನ್ನೂ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT