ಬೆಂಗಳೂರು: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಅವರ ತಾಯಿ ಸೋನಿಯಾ ಗಾಂಧಿ ಅವರ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡಿದ ಆರೋಪದ ಮೇಲೆ ಬಾಂಗ್ಲಾದೇಶದ ಪತ್ರಕರ್ತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಬಾಂಗ್ಲಾದೇಶದ ಪತ್ರಕರ್ತ ಸಲಾಹುದ್ದೀನ್ ಶೋಯೆಬ್ ಚೌಧರಿ ಅವರು ರಾಹುಲ್ ಮತ್ತು ಸೋನಿಯಾ ಬಗ್ಗೆ ಸುಳ್ಳು ಹೇಳಿಕೆ ನೀಡಿದ್ದಾರೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾನೂನು ಘಟಕದ ಪದಾಧಿಕಾರಿಯಾಗಿರುವ ವಕೀಲ ಜಿ. ಶ್ರೀನಿವಾಸ್ ಅವರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ದೂರಿನಲ್ಲಿ ಆರೋಪಿಸಿದ್ದಾರೆ.
‘ಸೋನಿಯಾ ಗಾಂಧಿಯನ್ನು ಪಾಕಿಸ್ತಾನದ ಐಎಸ್ಐ ಏಜೆಂಟ್’ ಎಂದು ಚೌಧರಿ ತಮ್ಮ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು.
ಎರಡು ಧರ್ಮಗಳ ಜನರ ಮಧ್ಯೆ ದ್ವೇಷ ಸೃಷ್ಟಿಸುವ ಉದ್ದೇಶದಿಂದ ಚೌಧರಿ, ‘ಭಾರತೀಯ ಪೌರತ್ವ ಪಡೆದಿದ್ದರೂ ಸೋನಿಯಾ ಇನ್ನೂ ಕ್ರೈಸ್ತ ಧರ್ಮ ಅನುಸರಿಸುತ್ತಿದ್ದಾರೆ ಎಂದು ಹೇಳಿದ್ದಾರೆ’ ಎಂದು ಶ್ರೀನಿವಾಸ್ ಆರೋಪಿಸಿದ್ದಾರೆ.
‘ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ದೂರುದಾರರ ಆರೋಪಗಳನ್ನು ಖಚಿತಪಡಿಸಿಕೊಳ್ಳಲು ಪೋಸ್ಟ್ ಗಳನ್ನು ಪರಿಶೀಲಿಸಲಾಗುತ್ತಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಾಂಗ್ಲಾದೇಶದ ಮಾಧ್ಯಮ ಕಂಪನಿ ಬ್ಲಿಟ್ಜ್ ಸಂಪಾದಕ ಮತ್ತು ಪ್ರಶಸ್ತಿ ವಿಜೇತ ಪತ್ರಕರ್ತ ಎಂದು ಚೌಧರಿ ತಮ್ಮ ‘ಎಕ್ಸ್’ ಖಾತೆಯಲ್ಲಿ ಪರಿಚಯಿಸಿಕೊಂಡಿದ್ದಾರೆ.