ಬೆಂಗಳೂರು: ನಗರದ ಟ್ರಿನಿಟಿ ವೃತ್ತದಲ್ಲಿರುವ ‘ಅಜಂತಾ ಟ್ರಿನಿಟಿ’ ಹೋಟೆಲ್‌ನಲ್ಲಿ ಮಂಗಳವಾರ ನಸುಕಿನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಮೂರು ಅಂತಸ್ತಿನ ಕಟ್ಟಡದಲ್ಲಿ ಹೋಟೆಲ್ ಇದೆ. ನೆಲಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿಯುತ್ತಿತ್ತು. ನಂತರ, ಇಡೀ ಕಟ್ಟಡದಲ್ಲಿ ಹೊಗೆ ಹೆಚ್ಚಾಗಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನೆಲಮಹಡಿಯಲ್ಲಿದ್ದ ಆಟೊ, ಕಾರು ಹಾಗೂ ಇತರೆ ವಾಹನಗಳು ಬೆಂಕಿಯಿಂದ ಸುಟ್ಟಿವೆ. ಪೀಠೋಪಕರಗಳು ಭಸ್ಮವಾಗಿವೆ. ಅದೃಷ್ಟವಶಾತ್ ಸದ್ಯಕ್ಕೆ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
‘ಘಟನೆಯಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಆರು ಮಂದಿಯನ್ನು ರಕ್ಷಿಸಲಾಗಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂಬುದನ್ನು ಪತ್ತೆ ಮಾಡಲಾಗುತ್ತಿದೆ’ ಎಂದು ಅಗ್ನಿಶಾಮಕ ದಳದ ಜಿಲ್ಲಾ ಅಧಿಕಾರಿ (ಬೆಂಗಳೂರು ದಕ್ಷಿಣ) ಕೆ. ಹೇಮಂತ್ ಕುಮಾರ್ ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.