ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿ: ಫ್ಲೆಕ್ಸ್‌, ಪೋಸ್ಟರ್‌ ತೆರವು ಆರಂಭ

ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿ: 28ರಲ್ಲಿ 19 ವಿಧಾನಸಭೆ ಕ್ಷೇತ್ರಗಳು ಸೂಕ್ಷ್ಮ
Last Updated 29 ಮಾರ್ಚ್ 2023, 20:33 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆಯೇ ನಗರದಲ್ಲಿ ಬ್ಯಾನರ್, ಫ್ಲೆಕ್ಸ್‌, ಪೋಸ್ಟರ್‌ಗಳ ತೆರವು ಕಾರ್ಯ ಬುಧವಾರ ಮಧ್ಯಾಹ್ನದಿಂದಲೇ ಆರಂಭವಾಗಿದೆ.

ಸರ್ಕಾರಿ ಕಚೇರಿ, ಸರ್ಕಾರಿ ಆಸ್ತಿಗಳು ಸೇರಿದಂತೆ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ಜನಪ್ರತಿನಿಧಿಗಳ ಹೆಸರು ಹಾಗೂ ಭಾವಚಿತ್ರಗಳನ್ನು ತೆಗೆಯಲು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಲಯ ಜಂಟಿ ಆಯುಕ್ತರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಜೊತೆ ನಡೆಸಿದ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಫ್ಲೆಕ್ಸ್, ಪೋಸ್ಟರ್, ಬ್ಯಾನರ್, ಭಿತ್ತಿಪತ್ರಗಳು, ಗೋಡೆ ಬರಹಗಳು ಇರುವಂತಿಲ್ಲ. ಯಾರಾದರೂ ಪೋಸ್ಟರ್, ಬ್ಯಾನರ್ ಹಾಕಿದರೆ ಸಂಬಂಧಪಟ್ಟವರಿಗೆ ಪ್ರಕರಣ ದಾಖಲಿಸಬೇಕು’ ಎಂದರು.

ಪಾಲಿಕೆಯ ಆಯಾ ವಲಯ ವ್ಯಾಪ್ತಿಯಲ್ಲಿ ಯಾವುದಾದರೂ ಕಾರ್ಯಕ್ರಮ ಆಯೋಜಿಸಿ
ದ್ದಲ್ಲಿ ತತ್‌ಕ್ಷಣ ಅದನ್ನು ರದ್ದುಪಡಿಸಬೇಕು. ಶುದ್ಧ ಕುಡಿಯುವ ನೀರಿನ ಘಟಕ, ಉದ್ಯಾನ ಸೇರಿದಂತೆ ಇನ್ನಿತರೆ ಸ್ಥಳಗಳಲ್ಲಿ ಅಳವಡಿಸಿರುವ ನಾಮ
ಫಲಕಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರಗಳು ಇರುವಂತಿಲ್ಲ. ಎಲ್ಲೂ ಜನಪ್ರತಿನಿಧಿಗಳ ಹೆಸರಾಗಲಿ, ಸಂಪರ್ಕ ಸಂಖ್ಯೆಯಾಗಲಿ ಇರುವಂತಿಲ್ಲ ಎಂದರು.

ಸಭೆಯಲ್ಲಿ ವಿಶೇಷ ಆಯುಕ್ತರಾದ ಉಜ್ವಲ್ ಕುಮಾರ್ ಘೋಷ್, ಜಯರಾಮ ರಾಯಪುರ ಇದ್ದರು.

ಮತದಾನಕ್ಕೆ ಮನವಿ: ಬಿಬಿಎಂಪಿ ವ್ಯಾಪ್ತಿಯ 8 ವಲಯಗಳ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ ಪದಾಧಿಕಾರಿಗಳ ಜೊತೆ ವರ್ಚುವಲ್ ಸಭೆ ನಡೆಸಿದ ತುಷಾರ್‌ ಗಿರಿನಾಥ್‌, ಚುನಾವಣೆಯಲ್ಲಿ ಎಲ್ಲರೂ ತಪ್ಪದೇ ಮತದಾನ ಮಾಡುವಂತೆ ಮನವಿ ಮಾಡಿದರು.

ಸ್ವೀಪ್‌ (ಜಾಗೃತಿ) ಕಾರ್ಯಚಟುವಟಿಕೆಗಳ ಕುರಿತು ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ ಜೊತೆ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದೆ. ತಮ್ಮ ಮಟ್ಟದಲ್ಲಿ ಬರುವ ನಿವಾಸಿಗಳಿ
ಗಳೆಲ್ಲರಿಗೂ ಮತದಾನ ಮಾಡುವಂತೆ ಪ್ರೇರೇಪಿಸಿ’ ಎಂದು ತಿಳಿಸಿದರು.

ಮತದಾನ ಮಾಡುವ ಮುಂಚಿತವಾಗಿತೇ ಎಲ್ಲಾ ಮನೆಗಳಿಗೂ ಮತದಾನದ ಚೀಟಿಗಳನ್ನು ನೀಡಲಾಗುವುದು. ಅಲ್ಲದೆ ವಿ.ಎಚ್.ಎ ತಂತ್ರಾಂಶದ ಮೂಲಕ ಮತದಾರರ ಗುರುತಿನ ಚೀಟಿ ನಮೂದಿಸಿ ಮತಗಟ್ಟೆಯ ಮಾಹಿತಿ ಪಡೆದುಕೊಳ್ಳಬಹುದು ಎಂದರು.

ಮತಗಟ್ಟೆಗಳ ಬಳಿ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ. ಅದರಂತೆ ಮತಗಟ್ಟೆಗಳ ಬಳಿ ಪಾರ್ಕಿಂಗ್ ವ್ಯವಸ್ಥೆ, ವಿಕಲಚೇತನರಿಗಾಗಿ ರ‍್ಯಾಂಪ್ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯದ ವ್ಯವಸ್ಥೆ, ವಿದ್ಯುತ್ ವ್ಯವಸ್ಥೆ, ಸರತಿ ಸಾಲಿನ ವ್ಯವಸ್ಥೆ, ಮತ ಚಲಾಯಿಸಲು ಬರುವವರಿಗೆ ಬಿಸಿಲು ಬೀಳದಂತೆ ಪೆಂಡಾಲ್ ವ್ಯವಸ್ಥೆ, ವಿಶೇಷವಾಗಿ ಮಹಿಳೆಯರಿಗಾಗಿ ಪಿಂಕ್ ಬೂತ್‌ಗಳು ಸೇರಿದಂತೆ ವಿವಿಧ ಥೀಮ್ ಆಧಾರಿತ ಬೂತ್‌ಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.

‘ಪ್ರಗತಿ ಕಾಮಗಾರಿಗಳ ಪಟ್ಟಿ ಕೊಡಿ’: ಬಿಬಿಎಂಪಿ ವ್ಯಾಪ್ತಿಯ ಎಲ್ಲಾ ಎಂಟು ವಲಯಗಳ ವ್ಯಾಪ್ತಿಯಲ್ಲಿ ಯೋಜನಾ ವಿಭಾಗ, ಕೆರೆಗಳ ವಿಭಾಗ, ರಾಜಕಾಲುವೆ ವಿಭಾಗ ಸೇರಿದಂತೆ ಇನ್ನಿತರೆ ವಿಭಾಗಗಳಿಗೆ ಸಂಬಂಧಿಸಿದಂತೆ ಪ್ರಗತಿಯಲ್ಲಿರುವ ಕಾಮಗಾರಿಗಳ ಪಟ್ಟಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಾರ್ಯಾದೇಶ ನೀಡಿ ಕೆಲಸ ಪ್ರಾರಂಭಿಸಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಹೊರತುಪಡಿಸಿ ಬೇರೆ ಯಾವುದೇ ಹೊಸ ಕಾಮಗಾರಿಗಳನ್ನು ಕೈಗೆತ್ತಿ ಕೊಳ್ಳಬಾರದು. ಹೊಸ ಟೆಂಡರ್, ಹೊಸದಾಗಿ ಕಾರ್ಯಾದೇಶ ನೀಡು ವಂತಿಲ್ಲ. ಚುನಾವಣಾ ನೀತಿ ಸಂಹಿತೆ ನಿಯಮ ಉಲ್ಲಂಘಿಸುವುದು ಕಂಡು ಬಂದರೆ ಚುನಾವಣಾ ಆಯೋಗದಿಂದ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ
ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT