ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಬಿಎಂಪಿಯಿಂದ ತಂತ್ರಜ್ಞಾನ ಬಳಕೆ: ರಾಜಕಾಲುವೆಯ ನೀರಿನ ಮಟ್ಟ ಅರಿಯಲು 124 ಸೆನ್ಸರ್

ಅವಾಂತರ ತಪ್ಪಿಸಲು ಬಿಬಿಎಂಪಿಯಿಂದ ತಂತ್ರಜ್ಞಾನ ಬಳಕೆ
Published 10 ಮೇ 2024, 15:33 IST
Last Updated 10 ಮೇ 2024, 15:33 IST
ಅಕ್ಷರ ಗಾತ್ರ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರವಾಹವನ್ನು ನಿಭಾಯಿಸಲು, ಅವಾಂತರಗಳನ್ನು ತಪ್ಪಿಸಲು ತಂತ್ರಜ್ಞಾನ ಬಳಸಿಕೊಳ್ಳಲಾಗಿದ್ದು, ರಾಜಕಾಲುವೆಗಳಲ್ಲಿ ಸೆನ್ಸರ್‌ಗಳನ್ನು ಅಳವಡಿಸಲಾಗಿದೆ. 

124 ಸ್ಥಳಗಳಲ್ಲಿ ನೀರಿನ ಮಟ್ಟ ಅಳೆಯುವ ಸಂವೇದಕಗಳನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ವತಿಯಿಂದ ಅಳವಡಿಸಲಾಗಿದೆ. ಪ್ರತಿಯೊಂದು ಸೆನ್ಸರ್ ಯಂತ್ರಕ್ಕೂ ಸೋಲಾರ್ ವಿದ್ಯುತ್‌ ಅಳವಡಿಸಲಾಗಿದೆ. ಈ ಸೆನ್ಸರ್‌ಗಳಿಂದ ನಿತ್ಯವೂ ಅಂತರ್ಜಾಲದ ಮೂಲಕ  ಕೆಎಸ್‌ಎನ್‌ಡಿಎಂಸಿ ನಿಯಂತ್ರಣ ಕೊಠಡಿಗೆ ಮಾಹಿತಿ ಲಭ್ಯವಾಗಲಿದೆ. ನಂತರ ಪಾಲಿಕೆಯ ಇಂಟಿಗ್ರೇಟೆಡ್ ಕಮಾಂಡಿಂಗ್ ಕಂಟ್ರೋಲ್ ಸೆಂಟರ್‌ಗೆ (ಐಸಿಸಿಸಿ) ಈ ಮಾಹಿತಿ ರವಾನೆಯಾಗಲಿದೆ ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ.

ಸೆನ್ಸರ್ ಅಳವಡಿಸಿರುವ ಕಡೆ ರಾಜಕಾಲುವೆಯಲ್ಲಿ ಹರಿಯುವ ನೀರಿನ ಮಟ್ಟವನ್ನು ಹಸಿರು, ನೀಲಿ, ಕೆಂಪು ಹಾಗೂ ಕಪ್ಪು ಬಣ್ಣಗಳಲ್ಲಿ ಗುರುತಿಸಲಾಗುತ್ತದೆ. ಹಸಿರು ಹಾಗೂ ನೀಲಿ ಬಣ್ಣವಿದ್ದರೆ ಯಾವುದೇ ಅಪಾಯವಿರುವುದಿಲ್ಲ. ಕೆಂಪು ಬಣ್ಣವಿದ್ದರೆ ಅಪಾಯ ಹಾಗೂ ಕಪ್ಪು ಬಣ್ಣಕ್ಕೆ ತಿರುಗಿದರೆ ಪ್ರವಾಹ ಉಂಟಾಗಲಿದೆ ಎಂಬ ಮಾಹಿತಿ ತಿಳಿಯಲಿದೆ. ಆ ಮಾಹಿತಿಗೆ ಅನುಗುಣವಾಗಿ ಪ್ರವಾಹ ಉಂಟಾಗುವ ಸ್ಥಳದ ಸುತ್ತಮುತ್ತಲಿನ ನಿವಾಸಿಗಳನ್ನು ಬೇರೆಡೆ ತೆರಳುವಂತೆ ಸೂಚನೆ ನೀಡಬಹುದು. ಇದರಿಂದ ಪ್ರವಾಹದಿಂದಾಗುವ ಅನಾಹುತಗಳನ್ನು ತಪ್ಪಿಸಬಹುದು.

ಬಿಬಿಎಂಪಿಯು ಈಗಾಗಲೇ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಮಳೆಗಾಲದಲ್ಲಿ ಸಂಭವಿಸುವ ಅವಾಂತರಗಳನ್ನು ತಪ್ಪಿಸಲು ಈಗಾಗಲೇ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ರಾಜಕಾಲುವೆ, ದ್ವಿತೀಯ ರಾಜಕಾಲುವೆ, ಚರಂಡಿಗಳಲ್ಲಿ ಹೂಳು ತೆಗೆಯುವ ಕಾರ್ಯವನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಜೊತೆಗೆ ರಸ್ತೆ ಬದಿಯ ಚರಂಡಿಗಳ ಬಳಿ ಇರುವ ತ್ಯಾಜ್ಯವನ್ನು ತೆರವುಗೊಳಿಸಿ ರಸ್ತೆ ಮೇಲೆ ನೀರು ನಿಲ್ಲದೆ ಸರಾಗವಾಗಿ ಹರಿದು ಹೋಗುವ ವ್ಯವಸ್ಥೆ ಮಾಡಲಾಗಿದೆ.

ಮುಖ್ಯ ಹಾಗೂ ಉಪ ಮುಖ್ಯರಸ್ತೆಗಳ ಚರಂಡಿಗಳನ್ನು ಸ್ವಚ್ಛಗೊಳಿಸುವುದು ಮತ್ತು ರಸ್ತೆ ಮೇಲೆ ಶೇಖರಣೆಯಾಗಿರುವ ಅನುಪಯುಕ್ತ ಕಟ್ಟಡ ತ್ಯಾಜ್ಯ ತೆರೆವು ಕಾರ್ಯ ಸಕ್ರಿಯವಾಗಿ ನಡೆಯುತ್ತಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ತಡೆಗೋಡೆ ನಿರ್ಮಾಣ ಪ್ರಗತಿಯಲ್ಲಿ!

ಬಿಬಿಎಂಪಿ ವ್ಯಾಪ್ತಿಯಲ್ಲಿ 860 ಕಿ.ಮೀ ಉದ್ದದ ರಾಜಕಾಲುವೆಯಿದ್ದು ಈ ಪೈಕಿ 581 ಕಿ.ಮೀ ಉದ್ದ ರಾಜಕಾಲುವೆಯನ್ನು ಆರ್.ಸಿ.ಸಿ ತಡೆಗೋಡೆಯಿಂದ ನಿರ್ಮಾಣ ಮಾಡಲಾಗಿದೆ. 199 ಕಿ.ಮೀ ಉದ್ದ ರಾಜಕಾಲುವೆಯ ಆರ್.ಸಿ.ಸಿ ತಡೆಗೋಡೆ ಕಾಮಗಾರಿ ಪ್ರಗತಿಯಲ್ಲಿದೆ. ಇನ್ನುಳಿದ 80 ಕಿ.ಮೀ ರಾಜಕಾಲುವೆಯು ಕಚ್ಚಾ ಡ್ರೈನ್ ಒಳಗೊಂಡಿರುತ್ತದೆ. ತಡೆಗೋಡೆ ನಿರ್ಮಿಸಿರುವ ರಾಜಕಾಲುವೆಯ ಭಾಗದಲ್ಲಿ ಹೂಳೆತ್ತುವ ಕಾರ್ಯ  ನಡೆಯುತ್ತಿದೆ. ನಗರದಲ್ಲಿ 74 ಕಡೆ ಪ್ರವಾಹ ಪೀಡಿತ ಪ್ರದೇಶಗಳಿದ್ದು ಆ ಸ್ಥಳಗಳಲ್ಲಿ ಶಾಶ್ವತ ಪರಿಹಾರಕ್ಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಮಳೆಗಾಲದಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ತಾತ್ಕಾಲಿಕ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT