ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯದಲ್ಲಿ ಅರಣ್ಯೀಕರಣ ಹೆಚ್ಚಾಗಬೇಕು: ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಮತ *ಅರಣ್ಯ ಹುತಾತ್ಮರಿಗೆ ಗೌರವ ಸಲ್ಲಿಕೆ
Published : 11 ಸೆಪ್ಟೆಂಬರ್ 2024, 16:32 IST
Last Updated : 11 ಸೆಪ್ಟೆಂಬರ್ 2024, 16:32 IST
ಫಾಲೋ ಮಾಡಿ
Comments

ಬೆಂಗಳೂರು: ‘ರಾಜ್ಯದಲ್ಲಿ ಶೇಕಡ 25 ರಷ್ಟು ಅರಣ್ಯ ‍ಪ್ರದೇಶವಿದೆ. ಒಟ್ಟು ಭೂಪ್ರದೇಶಕ್ಕೆ ಹೋಲಿಸಿದಲ್ಲಿ ಈ ಪ್ರಮಾಣ ಶೇ 33ರಷ್ಟಿರಬೇಕಿದೆ. ಆದ್ದರಿಂದ ರಾಜ್ಯದಲ್ಲಿ ಅರಣ್ಯೀಕರಣ ಹೆಚ್ಚಾಗಬೇಕಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅರಣ್ಯ ಇಲಾಖೆಯು ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಅರಣ್ಯ ಹುತಾತ್ಮರಿಗೆ ಗೌರವ ಸಲ್ಲಿಸಿ, ಮಾತನಾಡಿದರು.

‘ರಾಜ್ಯದಲ್ಲಿ ಆನೆ, ಹುಲಿಗಳ ಸಂಖ್ಯೆ ಹೆಚ್ಚುತ್ತಿರುವುದು ಸಂತೋಷದ ಸಂಗತಿ. ಆದರೆ, ಪ್ರಾಣಿ-ಮನುಷ್ಯ ಸಂಘರ್ಷ ತಪ್ಪಿಸಿ, ಪ್ರಾಣಿ ಸಂಪತ್ತನ್ನು ಕಾಪಾಡುವ ದಿಕ್ಕಿನಲ್ಲಿ ಇನ್ನಷ್ಟು ಪರಿಣಾಮಕಾರಿ ಕೆಲಸಗಳು ಆಗಬೇಕಿವೆ. ಇದಕ್ಕಾಗಿ ಲಭ್ಯ ಇರುವ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು. ಕಾಡು ಮತ್ತು ವನ್ಯಜೀವಿ ಸಂಪತ್ತಿನ‌ ರಕ್ಷಣೆ ಹೊಣೆ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಗೆ ಸೀಮಿತವಲ್ಲ. ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರ ಜವಾಬ್ದಾರಿ’ ಎಂದರು.

ಅರಣ್ಯ ಹುತಾತ್ಮರು ಮನುಕುಲದ ಸಂರಕ್ಷಕರು. ಅವರ ತ್ಯಾಗವು ಅರಣ್ಯ ಸಂರಕ್ಷಣೆಗೆ ಸ್ಫೂರ್ತಿಯಾಗಬೇಕು. ಅರಣ್ಯ ಹುತಾತ್ಮರ ಕುಟುಂಬಕ್ಕೆ ನೀಡುವ ಪರಿಹಾರದ ಮೊತ್ತವನ್ನು ₹ 30 ಲಕ್ಷದಿಂದ ₹ 50 ಲಕ್ಷಕ್ಕೆ ಹೆಚ್ಚಿಸಲಾಗಿದೆ’ ಎಂದು ಹೇಳಿದರು. 

ಪೊಲೀಸ್ ಕ್ಯಾಂಟೀನ್‌ ಸೌಲಭ್ಯ: ಅರಣ್ಯ ಸಚಿವ ಈಶ್ವರ ಖಂಡ್ರೆ, ‘ಕಾಡ್ಗಿಚ್ಚು ನಂದಿಸುವಾಗ, ಮಾನವ-ವನ್ಯಜೀವಿ ಸಂಘರ್ಷ ತಡೆಯುವಾಗ, ಒತ್ತುವರಿ ತೆರವು ಸೇರಿ ವಿವಿಧ ಸಂದರ್ಭದಲ್ಲಿ ಈವರೆಗೆ 61 ಅರಣ್ಯ ಸಿಬ್ಬಂದಿ ಮತ್ತು ಅಧಿಕಾರಿಗಳು ಹುತಾತ್ಮರಾಗಿದ್ದಾರೆ. ಅರಣ್ಯ ಸಂಪತ್ತಿನ ರಕ್ಷಣೆಗೆ ಹಗಲಿರುಳು ಶ್ರಮಿಸುತ್ತಿರುವ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹಾಲಿ ಇರುವ ಪೊಲೀಸ್‌ ಕ್ಯಾಂಟೀನ್‌ ಸೌಲಭ್ಯ ಬಳಸಿಕೊಳ್ಳಲು ಅವಕಾಶ ನೀಡಬೇಕೆಂಬ ಪ್ರಸ್ತಾವ ಅರಣ್ಯ ಇಲಾಖೆಯಿಂದ ಸಲ್ಲಿಕೆಯಾಗಿದೆ. ಈ ಬಗ್ಗೆ ಮುಖ್ಯಮಂತ್ರಿಯವರ ಜತೆಗೆ ಚರ್ಚಿಸಿ, ಕ್ರಮ ಕೈಗೊಳ್ಳಲಾಗುವುದು’ ಎಂದರು.

‘ಕಳೆದ 16 ತಿಂಗಳ ಅವಧಿಯಲ್ಲಿ ಅರಣ್ಯ ಇಲಾಖೆ ಸುಮಾರು 10 ಸಾವಿರ ಎಕರೆ ವಿಸ್ತೀರ್ಣದ ಜಮೀನುಗಳನ್ನು ಅಧಿಸೂಚಿತ ಅರಣ್ಯ ಎಂದು ಘೋಷಿಸಿದೆ. ಬೆಂಗಳೂರು, ಕೋಲಾರ, ಬೀದರ್‌ ಸೇರಿದಂತೆ ರಾಜ್ಯದ ವಿವಿಧೆಡೆ ಸಾವಿರಾರು ಕೋಟಿ ರೂಪಾಯಿ ಬೆಲೆ ಬಾಳುವ 2,500ಕ್ಕೂ ಹೆಚ್ಚು ಎಕರೆ ಅರಣ್ಯ ಜಮೀನುಗಳನ್ನು ಮರು ವಶಕ್ಕೆ ಪಡೆದಿದೆ. 3 ಎಕರೆಗಿಂತ ಅಧಿಕ ಹಾಗೂ ದೊಡ್ಡ ಪ್ರಮಾಣದ ಒತ್ತುವರಿ ತೆರವು ಕಾರ್ಯ ನಡೆಯುತ್ತಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT