ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣೇಶೋತ್ಸವ ವೇಳೆ ಸಿ.ಸಿ.ಟಿ.ವಿ ಕಡ್ಡಾಯ; ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ

ಗಣೇಶೋತ್ಸವ: ಸಾರ್ವಜನಿಕರ ಶಾಂತಿ ಸಭೆ
Last Updated 25 ಆಗಸ್ಟ್ 2022, 19:45 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಗಣೇಶೋತ್ಸವ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ಕೈಗೊಂಡಿರುವ ಬಿಬಿಎಂಪಿ ಹಾಗೂ ಪೊಲೀಸ್ ಅಧಿಕಾರಿಗಳು, ಪುರಭವನದಲ್ಲಿ ಗುರುವಾರ ಸಾರ್ವಜನಿಕ ಶಾಂತಿ ಸೌಹಾರ್ದ ಸಭೆ ನಡೆಸಿದರು.

ನಗರದ ಬಹುತೇಕ ಪ್ರದೇಶಗಳ ನಿವಾಸಿಗಳು, ಗಣೇಶೋತ್ಸವ ಸಮಿತಿ ಸದಸ್ಯರು, ಸಂಘಟನೆಗಳ ಪದಾಧಿಕಾರಿಗಳು ಮತ್ತು ಸರ್ವಧರ್ಮಗಳ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು. ಹಬ್ಬದ ಆಚರಣೆಗೆ ಪೊಲೀಸರು ಹಾಗೂ ಬಿಬಿಎಂಪಿ ಯಾವೆಲ್ಲ ವ್ಯವಸ್ಥೆ ಕಲ್ಪಿಸಬೇಕು ಎಂಬುದರ ಬಗ್ಗೆ ಅಭಿಪ್ರಾಯ ಹಂಚಿಕೊಂಡರು. ಬೆಸ್ಕಾಂ, ಅಗ್ನಿಶಾಮಕ ಇಲಾಖೆ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳೂ ಸಭೆಯಲ್ಲಿದ್ದರು.

ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ, ‘ಎಲ್ಲರೂ ಶಾಂತಿಯುತವಾಗಿ ಹಬ್ಬ ಆಚರಿಸಬೇಕು. ಭದ್ರತೆ ದೃಷ್ಟಿಯಿಂದ ಜಾರಿಗೆ ತಂದಿರುವ ನಿಯಮಗಳನ್ನು ಪಾಲಿಸಬೇಕು’ ಎಂದು ಕೋರಿದರು.

‘ಗಣೇಶೋತ್ಸವ ಆಚರಣೆ ಸಂಬಂಧ 2018- 2019ರಲ್ಲಿ ರೂಪಿಸಿದ್ದ ನಿಯಮಗಳೇ ಈ ವರ್ಷವೂ ಜಾರಿಯಲ್ಲಿರಲಿವೆ. ಸಾರ್ವಜನಿಕ ಸ್ಥಳದಲ್ಲಿ ಗಣೇಶ ಪ್ರತಿಷ್ಠಾಪನೆ ಹಾಗೂ ಉತ್ಸವದ ಜವಾಬ್ದಾರಿ ವಹಿಸಿಕೊಂಡಿರುವ ಮಂಡಳಿಗಳು, ಸಂಘ-ಸಂಸ್ಥೆಗಳು ಹಾಗೂ ಮುಖಂಡರು, ಜನರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಯಾವುದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ಹಬ್ಬ ಆಚರಿಸಬೇಕು. ನಿಯಮ ಮೀರಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.

‘ಸುರಕ್ಷತೆ ದೃಷ್ಟಿಯಿಂದ ಪ್ರತಿಯೊಂದು ಪೆಂಡಾಲ್ ಒಳಗೆ ಹಾಗೂ ಹೊರಗೆ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸುವುದು ಕಡ್ಡಾಯವಾಗಿದೆ. ಜೊತೆಗೆ, ಆಯೋಜಕರೇ ತಮ್ಮ ಪೆಂಡಾಲ್ ಬಳಿ ಸರದಿ ಪ್ರಕಾರ 24 ಗಂಟೆಯೂ ಗಸ್ತು ತಿರುಗಿದರೆ ಒಳ್ಳೆಯದು. ಇದರಿಂದ ಅಹಿತಕರ ಘಟನೆಗಳು ನಡೆಯದಂತೆ ತಡೆಯಬಹುದು’ ಎಂದೂ ಹೇಳಿದರು.

‘ರಸ್ತೆಯ ನಡುವೆ ಪೆಂಡಾಲ್ ನಿರ್ಮಿಸಬಾರದು. ಅಗ್ನಿಶಾಮಕ ವಾಹನ, ಆಂಬುಲೆನ್ಸ್ ಹಾಗೂ ಸಾರ್ವಜನಿಕರ ವಾಹನಗಳ ಓಡಾಟಕ್ಕೆ ಜಾಗವಿರುವಂತೆ ನೋಡಿಕೊಳ್ಳಬೇಕು. ತಮ್ಮ ವ್ಯಾಪ್ತಿಯ ಠಾಣೆ ಪೊಲೀಸರ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಭದ್ರತೆಗೆ ಅವರ ಸಹಾಯ ಪಡೆಯಬೇಕು. ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ನಿಗಾ ವಹಿಸಬೇಕು’ ಎಂದು ಪ್ರತಾಪ್ ರೆಡ್ಡಿ ತಿಳಿಸಿದರು.

ಏಕಗವಾಕ್ಷಿ ಮೂಲಕ ಅರ್ಜಿ ಸಲ್ಲಿಕೆ: ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್, ‘ಸಾರ್ವಜನಿಕ ಸ್ಥಳದಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡುವವರು ಏಕಗವಾಕ್ಷಿ ವ್ಯವಸ್ಥೆ ಮೂಲಕ ಅರ್ಜಿ ಸಲ್ಲಿಸಬೇಕು. ಅದನ್ನು ಪರಿಶೀಲಿಸಿ ಉತ್ಸವಕ್ಕೆ ಅನುಮತಿ ನೀಡಲಾಗುವುದು’ ಎಂದರು.

ಹೆಚ್ಚುವರಿ ಪೊಲೀಸ್ ಕಮಿಷನರ್‌ಗಳಾದ ಸುಬ್ರಹ್ಮಣ್ಯೇಶ್ವರ್‌ ರಾವ್, ಸಂದೀಪ್ ಪಾಟೀಲ, ಸಂಚಾರ ವಿಭಾಗದ ಜಂಟಿ ಕಮಿಷನರ್ ಬಿ.ಆರ್. ರವಿಕಾಂತೆಗೌಡ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT