ಭಾನುವಾರ, ನವೆಂಬರ್ 1, 2020
19 °C
ಅಧಿಕಾರಿಗಳಿಗೆ ಬಿಬಿಎಂಪಿ ಆಯುಕ್ತ ಸೂಚನೆ

ಮನೆಯಲ್ಲೇ ಚಿಕಿತ್ಸೆ ಪಡೆದವರ ಪ್ರತಿಕ್ರಿಯೆ ಸಂಗ್ರಹಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಮನೆಯಲ್ಲೇ ಪ್ರತ್ಯೇಕವಾಗಿದ್ದುಕೊಂಡು ಕೋವಿಡ್‌ಗೆ ಚಿಕಿತ್ಸೆ ಪಡೆಯುತ್ತಿರುವವರ ಪ್ರತಿಕ್ರಿಯೆ ಪಡೆಯಬೇಕು. ಇದಕ್ಕಾಗಿ ಪ್ರತ್ಯೇಕ ನಮೂನೆ ಸಿದ್ಧಪಡಿಸಿ ವಿಶ್ಲೇಷಣೆಗೊಳಪಡಿಸಬೇಕು’ ಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಅಧಿಕಾರಿಗಳಿಗೆ ಸೂಚಿಸಿದರು.

ಪೂರ್ವ ವಲಯದ ಕೋವಿಡ್ ಕಮಾಂಡ್ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿದ ಅವರು ಕೋವಿಡ್‌ ಸಂತ್ರಸ್ತರ ಸಂಪರ್ಕಕ್ಕೆ ಬಂದವರ ಪತ್ತೆ ಕಾರ್ಯ, ಮನೆಯಲ್ಲೇ ಪ್ರತ್ಯೇಕವಾಗಿದ್ದುಕೊಂಡು ಚಿಕಿತ್ಸೆ ಪಡೆಯುತ್ತಿರುವವರ ಮೇಲಿನ ನಿಗಾ ವ್ಯವಸ್ಥೆ, ಆಸ್ಪತ್ರೆಗಳಲ್ಲಿ ಹಾಸಿಗೆ ವ್ಯವಸ್ಥೆ, ಗಂಟಲು ದ್ರವಮಾದರಿ ಪರೀಕ್ಷೆಗಳ ಬಗ್ಗೆ ಪರಿಶೀಲಿಸಿದರು. 

‘ಮನೆಯಲ್ಲೇ ಚಿಕಿತ್ಸೆ ಪಡೆಯುವವ ಬಗ್ಗೆ ಇಂಡೆಕ್ಸ್ ತಂತ್ರಾಂಶದಲ್ಲಿ ಮಾಹಿತಿ ಪೂರೈಸಲಾಗುತ್ತಿದೆ. ಇದಕ್ಕಾಗಿ ವಿಧಾನಸಭಾ ಕ್ಷೇತ್ರಕ್ಕೊಬ್ಬ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮನೆಯಲ್ಲೇ ಚಿಕಿತ್ಸೆ ಪಡೆಯಲು ಬಯಸುವ ಸೋಂಕಿತರ ಜೊತೆ ಮಾತನಾಡುವ ಅವರು ಮನೆಯ ವಾತಾವರಣ, ವಾಸಕ್ಕೆ ಪ್ರತ್ಯೇಕ ಕೊಠಡಿ ಹಾಗೂ ಪ್ರತ್ಯೇಕ ಶೌಚಾಲಯವಿರುವ ಬಗ್ಗೆ ಹಾಗೂ ರೋಗ ಲಕ್ಷಣಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಾರೆ. ಪಾಲಿಕೆಯ ವೈದ್ಯರು ಸ್ಥಳಕ್ಕೆ ಭೇಟಿ ನೀಡಿ ಖಾತರಿ ಪಡಿಸಿಕೊಂಡ ಬಳಿಕವೇ ಮನೆಯಲ್ಲೇ ಚಿಕಿತ್ಸೆಗೆ ಅವಕಾಶ ಕಲ್ಪಿಸಲಾಗುತ್ತದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಮನೆಯಲ್ಲೇ ಚಿಕಿತ್ಸೆ ಪಡೆಯುವವರಿಗೆ ಆಗಾಗ ಕರೆ ಮಾಡಿ ಆರೋಗ್ಯ ವಿಚಾರಿಸಬೇಕು. ಸ್ವಯಂಸೇವಕರ ತಂಡಗಳು ಆರೋಗ್ಯ ವಿಚಾರಣೆ ಹಾಗೂ ಔಷಧ ವಿತರಣೆಯನ್ನು ಚ್ಚುಕಟ್ಟಾಗಿ ನಡೆಸಬೇಕು ಎಂದು ಆಯುಕ್ತರು ನಿರ್ದೇಶನ ನೀಡಿದರು. 

‘ಖಾಸಗಿ ಆಸ್ಪತ್ರೆಗಳಲ್ಲಿನ ಚಿಕಿತ್ಸೆ ವ್ಯವಸ್ಥೆ ಹೇಗಿದೆ ಎಂಬ ಬಗ್ಗೆ ಸಮಗ್ರ ಮಾಹಿತಿ ಲಭ್ಯವಿರಬೇಕು. ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಸೋಂಕಿತರನ್ನು ತ್ವರಿತವಾಗಿ ಆಸ್ಪತ್ರೆಗಳಿಗೆ ರವಾನಿಸಬೇಕು. ಖಾಸಗಿ ಆಸ್ಪತ್ರೆಗಳಿಗೆ ನೇಮಿಸಿರುವ ನೋಡಲ್ ಅಧಿಕಾರಿಗಳು ಸಮನ್ವಯ ಕಾಪಾಡಬೇಕು. ಚಿಕಿತ್ಸೆಗೆ ಲಭ್ಯ ಇರುವ ಹಾಸಿಗೆಗಳ ಬಗ್ಗೆ ಪೋರ್ಟಲ್‌ನಲ್ಲಿ ಕಾಲ-ಕಾಲಕ್ಕೆ ಮಾಹಿತಿ ನೀಡುತ್ತಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು’ ಎಂದು ಸೂಚನೆ ನೀಡಿದರು. 

ದೊಮ್ಮಲೂರು ಪಿಎಚ್‌ಸಿ ತಪಾಸಣೆ: ದೊಮ್ಮಲೂರು ವಾರ್ಡ್‌ನ ನಗರ ಆರೋಗ್ಯ ಪಾಥಮಿಕ ಆರೋಗ್ಯ ಕೇಂದ್ರಕ್ಕೆ ಬಿಬಿಎಂಪಿ ಆಯುಕ್ತರು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರೀಕ್ಷೆ ಮಾಡಿಸಿಕೊಳ್ಳಲು ಬಂದವರನ್ನು ಕೂಡಾ ಆಯುಕ್ತರು ವಿಚಾರಿಸಿದರು.

‘ನಿತ್ಯ 30 ರಿಂದ 40 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗುತ್ತಿದೆ. ರಜಾ ದಿನದಲ್ಲಿ 20 ರಿಂದ 25 ಮಂದಿ ಪರೀಕ್ಷೆ ಮಾಡಿಸಿಕೊಳ್ಳುತ್ತಿದ್ದಾರೆ’ ಪಿಎಚ್‌ಸಿಯ ಸಿಬ್ಬಂದಿ ಮಾಹಿತಿ ನೀಡಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು