ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕರು ಯೋಜನೆಗಳ ಪಟ್ಟಿ ನೀಡಿದರೆ ಅನುದಾನ ಬಿಡುಗಡೆ: ಯಡಿಯೂರಪ್ಪ

Last Updated 28 ನವೆಂಬರ್ 2019, 11:33 IST
ಅಕ್ಷರ ಗಾತ್ರ

ಬೆಂಗಳೂರು: ‘ನಗರದ ಸಮಗ್ರ ಅಭಿವೃದ್ಧಿ ಆಗಬೇಕು ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರ ಅಪೇಕ್ಷೆಯಾಗಿದ್ದು, ಅವರ ನಿರೀಕ್ಷೆಗೆ ತಕ್ಕಂತೆ ಹೊಸ ಯೋಜನೆಗಳನ್ನು ರೂಪಿಸಿ ಕೇಂದ್ರದಿಂದ ಅನುದಾನ ಪಡೆಯಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಉಪಚುನಾವಣೆ ನಡೆಯುವ ಕೆ.ಆರ್‌.ಪುರ, ಮಹಾಲಕ್ಷ್ಮಿಲೇಔಟ್‌ ಮತ್ತು ಹೊಸಕೋಟೆಯಲ್ಲಿ ಬುಧವಾರ ಬಿರುಸಿನ ಚುನಾವಣಾ ಪ್ರಚಾರ ನಡೆಸಿ ಅವರು ಅಭಿವೃದ್ಧಿ ಮಂತ್ರ ಜಪಿಸಿದರು.

ಮೋದಿಯವರ ಇಚ್ಛೆಯಂತೆ ನಗರವನ್ನು ಅಭಿವೃದ್ಧಿಪಡಿಸಲು ಎಲ್ಲ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಯೋಜನೆಗಳ ಪಟ್ಟಿ ನೀಡಿದರೆ ಅಗತ್ಯ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.‘ಸರ್ಕಾರದಲ್ಲಿ ಹಣದ ಕೊರತೆ ಇಲ್ಲ. ಮನೆ ಇಲ್ಲದವರಿಗೆ, ಮುಂದಿನ ಮೂರುವರೆ ವರ್ಷಗಳಲ್ಲಿ ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ ಮನೆಗಳನ್ನು ನಿರ್ಮಿಸಿಕೊಡಲಾಗುವುದು. ನಗರದಲ್ಲಿ ಕೇಂದ್ರ ಸರ್ಕಾರದ ಎಲ್ಲ ನಗರಾಭಿವೃದ್ಧಿ ಯೋಜನೆಗಳನ್ನೂ ಜಾರಿಗೆ ತರಲಾಗುವುದು’ ಎಂದು ಭರವಸೆ ನೀಡಿದರು.

ಎಂಟಿಬಿಯನ್ನು ಸೋಲಿಸಲು ಸಾಧ್ಯವಿಲ್ಲ: ಪಕ್ಷದ ಅಭ್ಯರ್ಥಿ ಎಂ.ಟಿ.ಬಿ.ನಾಗರಾಜ್ ಅವರನ್ನು ಸೋಲಿಸಲು ಯಾವುದೇ ಶಕ್ತಿಯಿಂದ ಸಾಧ್ಯವಿಲ್ಲ ಎಂದುಹೊಸಕೋಟೆಯಲ್ಲಿ ಯಡಿಯೂರಪ್ಪ ತಿಳಿಸಿದರು. ಹೊಸಕೋಟೆಯನ್ನು ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿಪಡಿಸಲು ನಾಗರಾಜ್‌ ಅವರು ಕೋರುವ ಯೋಜನೆಗಳಿಗೆ ಒಪ್ಪಿಗೆ ನೀಡಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದೂ ಹೇಳಿದರು.

ಹಿರಿಯ ಮುಖಂಡ ಎಸ್‌.ಎಂ.ಕೃಷ್ಣ ಮಾತನಾಡಿ, ‘ರಾಜ್ಯದಲ್ಲಿ ಅಪವಿತ್ರ ಮೈತ್ರಿಯಿಂದ ಹುಟ್ಟಿದ ಕಾಂಗ್ರೆಸ್‌–ಜೆಡಿಎಸ್‌ ಸಮ್ಮಿಶ್ರ ಸರ್ಕಾರ ದಿಕ್ಕು–ದೆಸೆ ಇಲ್ಲದೆ 14 ತಿಂಗಳುಗಳ ಕಾಲ ಆಡಳಿತ ನಡೆಸಿತು. ಅದೇ ದೊಡ್ಡ ಸಾಧನೆ ಎಂದು ಎರಡೂ ಪಕ್ಷಗಳು ಹೇಳಿಕೊಳ್ಳುತ್ತಿವೆ. ಸರ್ಕಾರ ರಚನೆ ಆದ ದಿನದಿಂದಲೂ ಅನಿಶ್ಚಿತತೆಯ ತೂಗುಗತ್ತಿ ತೂಗುತ್ತಲೇ ಇತ್ತು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT