ಶುಕ್ರವಾರ, ಫೆಬ್ರವರಿ 26, 2021
19 °C

ಪರಿಶಿಷ್ಟ ಸಮುದಾಯಕ್ಕೆ ಆಸ್ತಿ | ಕಾರ್ಯಕ್ರಮ ರೂಪಿಸಿ: ಗೋವಿಂದ ಕಾರಜೋಳ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘2020-21ನೇ ಸಾಲಿನ ಎಸ್‍ಸಿಪಿ ಮತ್ತು ಟಿಎಸ್‍ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯದವರಿಗೆ ಆಸ್ತಿಯಾಗುವಂತಹ ಯೋಜನೆಗಳು ಮತ್ತು ಕಾರ್ಯಕ್ರಮಗಳ ಕ್ರಿಯಾ ಯೋಜನೆಯನ್ನು ರೂಪಿಸಬೇಕು’ ಎಂದು ಸಮಾಜ ಕಲ್ಯಾಣ ಸಚಿವ ಗೋವಿಂದ ಎಂ ಕಾರಜೋಳ ಸೂಚಿಸಿದರು.

ವಿಕಾಸಸೌಧದಲ್ಲಿ ಬುಧವಾರ 2020-21ನೇ ಸಾಲಿನ ಎಸ್‍ಸಿಪಿ ಮತ್ತು ಟಿಎಸ್‌ಪಿ ಕ್ರಿಯಾ ಯೋಜನೆಯ ಕುರಿತು ನೋಡಲ್‌ ಏಜೆನ್ಸಿ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ‘ಶಿಕ್ಷಣ, ಸ್ವಯಂ ಉದ್ಯೋಗ, ಕೌಶಲ ಅಭಿವೃದ್ಧಿ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ವಸತಿ ಇಲಾಖೆಯು ಉತ್ತಮ ಗುಣಮಟ್ಟದ ಮನೆಗಳನ್ನು ನಿರ್ಮಿಸಬೇಕು. ಕಳೆದ ವರ್ಷ ಅಪೂರ್ಣಗೊಂಡ ಮನೆಗಳನ್ನು ಪೂರ್ಣಗೊಳಿಸಬೇಕು’ ಎಂದರು.

‘ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಬೇರೆ ಊರುಗಳಿಗೆ ಉದ್ಯೋಗಕ್ಕಾಗಿ ಹೋದವರು ಹೆಚ್ಚಾಗಿ ಅವರ ಗ್ರಾಮಗಳಲ್ಲಿದ್ದಾರೆ. ಉದ್ಯೋಗ ಖಾತರಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಕೂಲಿ ಕಾರ್ಮಿಕರಿಗೆ ಕಡ್ಡಾಯವಾಗಿ ಉದ್ಯೋಗ ಕಾರ್ಡುಗಳನ್ನು ನೀಡಬೇಕು. ಕೃಷಿ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯದ ರೈತರ ಕುರಿತು ಮಾಹಿತಿ ಸಂಗ್ರಹಿಸಿ, ಸೌಲಭ್ಯಗಳನ್ನು ಸಮರ್ಪಕವಾಗಿ ವಿತರಿಸಬೇಕು. ಗಂಗಾ ಕಲ್ಯಾಣ ಯೋಜನೆಯು ಅತ್ಯುತ್ತಮ ಯೋಜನೆಯಾಗಿದ್ದು, ಕೊಳವೆ ಬಾವಿಗಳಿಗೆ ಕೂಡಲೇ ವಿದ್ಯುತ್ ಸಂಪರ್ಕ ಕಲ್ಪಿಸಬೇಕು’ ಎಂದರು.

‘ಎಲ್ಲಾ ಇಲಾಖೆಗಳು ಪರಿಶಿಷ್ಟ ಜಾತಿ ಮತ್ತು ಪಂಗಡದ ಜನಸಂಖ್ಯೆಯ ಮಾಹಿತಿಯನ್ನು ಸಂಗ್ರಹಿಸಬೇಕು. ಯೋಜನೆವಾರು ಫಲಾನುಭವಿಗಳ ವಿವರವನ್ನು ಆ್ಯಪ್‌ನಲ್ಲಿ ಅಪ್‌ಲೋಡ್ ಮಾಡಬೇಕು. ಬಡತನದಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಅನುಕೂಲವಾಗುವಂತಹ ಕಾರ್ಯಕ್ರಮಗಳನ್ನು ರೂಪಿಸಬೇಕು’ ಎಂದರು.

ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ ನಾಯಕ್, ಎಸ್‍ಸಿಪಿ ಮತ್ತು ಟಿಎಸ್‍ಪಿ ಯೋಜನೆಯ ಸಲಹೆಗಾರರ ಇ.ವೆಂಕಟಯ್ಯ  ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು